ಇಂದು ಮಂಗಳೂರಿನಲ್ಲಿ ಅದ್ಧೂರಿ ಸಹಕಾರ ಸಪ್ತಾಹ

| Published : Nov 16 2025, 02:00 AM IST

ಸಾರಾಂಶ

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ (ನ.16) ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹ ಅದ್ಧೂರಿಯಾಗಿ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ (ನ.16) ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹ ಅದ್ಧೂರಿಯಾಗಿ ನಡೆಯಲಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ। ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಶನಿವಾರ ಕಾರ್ಯಕ್ರಮದ ಅಂತಿಮ ಸಿದ್ಧತೆಯನ್ನು ವೀಕ್ಷಿಸಿದ ಬಳಿಕ ರಾಜೇಂದ್ರ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸಹಕಾರ ಸಪ್ತಾಹವನ್ನು ‘ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು’ ಧ್ಯೇಯವಾಕ್ಯದೊಂದಿಗೆ ಈ ಬಾರಿ ಆಚರಿಸಲಾಗುತ್ತಿದೆ. ಅದೇ ರೀತಿಯಾಗಿ ೭ ದಿನ ಕಾರ್ಯಕ್ರಮದಲ್ಲಿ ವಿವಿಧ ವಿಷಯಗಳ ಬಗ್ಗೆಯೂ ಚಿಂತನ-ಮಂಥನ ನಡೆಯುತ್ತಿದೆ. ಈ ಸಂದರ್ಭದಲ್ಲಿ ‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯನ್ನು ಬಲಪಡಿಸುವುದು’ ವಿಷಯದ ಬಗ್ಗೆ ಕಾರ್ಯಕ್ರಮ ನಡೆಯಲಿದೆ ಎಂದರು.

ಈ ಬಾರಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.) ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ದ ಸಹಕಾರ ಸಂಘಗಳು ಹಾಗೂ ಎಲ್ಲ ವಿಧದ ಸಹಕಾರ ಸಂಘಗಳು ಮತ್ತು ಸಹಕಾರ ಇಲಾಖೆಯ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಬೆಳಗ್ಗೆ 9.30 ಗಂಟೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಸಹಕಾರ ಧ್ವಜಾರೋಹಣಗೊಂಡು ಮೆರವಣಿಗೆ ಹೊರಡಲಿದೆ. 10.15ಕ್ಕೆ ಕರಾವಳಿ ಮೈದಾನಕ್ಕೆ ಮೆರವಣಿಗೆ ತಲುಪಲಿದೆ. 10.30ಕ್ಕೆ ಸಭಾ ಕಾರ್ಯಕ್ರಮ ಆರಂಭವಾಗಲಿದೆ. ನವೋದಯ ಸ್ವಸಹಾಯ ಸಂಘಗಳ ರಜತೋತ್ಸವದ ಸ್ಮರಣ ಸಂಚಿಕೆಯನ್ನು ಸಮಾರಂಭದಲ್ಲಿ ಅನಾವರಣಗೊಳಿಸಲಾಗುವುದು. ಸಮಾರಂಭದಲ್ಲಿ ಸುಮಾರು 15 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಡಾ.ರಾಜೇಂದ್ರ ಕುಮಾರ್‌ ಹೇಳಿದರು.

ದ.ಕ. ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ಅಧ್ಯಕ್ಷ ಡಾ. ರವಿರಾಜ ಹೆಗ್ಡೆ, ಸ್ಕ್ವಾಡ್ಸ್‌ ಅಧ್ಯಕ್ಷ ರವೀಂದ್ರ ಕಂಬಳಿ, ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ್‌ ಶೆಟ್ಟಿ, ಶಶಿಕುಮಾರ್‌ ರೈ ಬಾಲ್ಯೊಟ್ಟು, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್‌, ಭಾಸ್ಕರ ಕೋಟ್ಯಾನ್‌, ಮೋನಪ್ಪ ಶೆಟ್ಟಿ ಎಕ್ಕಾರ್‌, ಜಯರಾಜ್‌ ರೈ, ಸಹಕಾರಿ ಸಂಘಗಳ ಡಿಆರ್‌ ಎಚ್‌.ಎಂ.ರಮೇಶ್‌, ಎಆರ್‌ ರಘು, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್‌ ಇದ್ದರು.ಸಹಕಾರ ಮಾಣಿಕ್ಯ ಪ್ರಶಸ್ತಿ:

ಈಗಾಗಲೇ ಸಹಕಾರ ಮಾಣಿಕ್ಯ ಪ್ರಶಸ್ತಿಯನ್ನು ೩ ಸಹಕಾರ ಸಂಸ್ಥೆಗಳಿಗೆ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಲಾ ೧ ಉತ್ತಮ ಕೃಷಿಪತ್ತಿನ ಸಹಕಾರಿ ಸಂಘಗಳನ್ನು ಹಾಗೂ ೧ ಪತ್ತಿನ ಸಹಕಾರಿ ಸಂಘವನ್ನು ೨೦೨೫ನೇ ಸಾಲಿನ ಸಹಕಾರ ಮಾಣಿಕ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯ ಜೊತೆಗೆ ೫ ಗ್ರಾಂ ಚಿನ್ನದ ಪದಕ, ೧೦,೦೦೦ ರು. ನಗದು ಹಾಗೂ ಪಾರಿತೋಷಕವನ್ನು ನೀಡಲಾಗುವುದು. ಸಾಮಾನ್ಯ ವಿಭಾಗದಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳ ಪೈಕಿ ಉಭಯ ಜಿಲ್ಲೆಗಳಲ್ಲಿ ಒಂದರಂತೆ ಹಾಗೂ ಹೈನುಗಾರಿಕೆ ಕ್ರೆಡಿಟ್ ಸೊಸೈಟಿ, ಮೀನುಗಾರಿಕಾ ಸಹಕಾರಿ ಸಂಘ, ಸೌಹಾರ್ಧ ಸಹಕಾರಿ ಸಂಘ ಹಾಗೂ ಮಹಿಳಾ ಸಹಕಾರಿ ಸಂಘಕ್ಕೆ ಉಭಯ ಜಿಲ್ಲೆಗಳಿಂದ ೧ ಹಾಗೂ ವಜ್ರ ಮಹೋತ್ಸವ ಮತ್ತು ಸುವರ್ಣ ಮಹೋತ್ಸವ ಪೂರೈಸಿದ ಸಂಘಗಳನ್ನು ಗೌರವಿಸಲಾಗುವುದು ಎಂದು ಅವರು ಹೇಳಿದರು.

ಕೋಟ್‌

ಎಸ್‌ಸಿಡಿಸಿಸಿ ಬ್ಯಾಂಕ್‌ನ ಸಾಧನೆ ಗಮನಿಸಿ ಸರ್ಕಾರ ಅನೇಕ ಪ್ರಶಸ್ತಿ ನೀಡಿ ಗೌರವಿಸಿದೆ. ಅತೀ ಹೆಚ್ಚು ಸಹಕಾರ ರತ್ನ ಪ್ರಶಸ್ತಿ ನೀಡಿರುವುದಕ್ಕೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಇಲ್ಲಿನ ಎಂಟು ಮಂದಿಗೆ ಸಹಕಾರ ರತ್ನ ಪ್ರಶಸ್ತಿ ದೊರೆತಿದೆ. ಎಲ್ಲರ ಸಹಕಾರ, ಪ್ರೋತ್ಸಾಹದಿಂದ ಬ್ಯಾಂಕ್‌ ಉನ್ನತ ಮಟ್ಟದಲ್ಲಿ ಮುನ್ನಡೆಯಲು ಸಾಧ್ಯವಾಗಿದೆ.

-ಡಾ। ಎಂ.ಎನ್‌.ರಾಜೇಂದ್ರ ಕುಮಾರ್‌.