ಸಾರಾಂಶ
ಹಾವೇರಿ: ರಾಜ್ಯದ ವಿವಿಧ ಸಹಕಾರ ಮಹಾ ಮಂಡಳಗಳ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳ ಸಹಯೋಗದಲ್ಲಿ ರಾಜ್ಯಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025 ಅನ್ನು ನಗರದ ರಜನಿ ಸಭಾಂಗಣದಲ್ಲಿ ನ. 18ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ಬೆಳಗಾವಿ ಪ್ರಾಂತದ ಸಹಕಾರ ಸಂಘಗಳ ಸಂಯುಕ್ತ ನಿಬಂಧಕರಾದ ಕಲ್ಲಪ್ಪ ಓಬಣ್ಣಗೋಳ ಹೇಳಿದರು.ಇಲ್ಲಿನ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,ಸಪ್ತಾಹವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸಹಕಾರ ಧ್ವಜಾರೋಹಣ ನೆರವೇರಿಸುವರು. ಸಹಕಾರಿ ಪಿತಾಮಹ ಭಾವಚಿತ್ರಕ್ಕೆ ಕಾನೂನು ಸಚಿವ ಎಚ್.ಕೆ. ಪಾಟೀಲ ಪುಷ್ಪಾರ್ಚನೆ ಮಾಡುವರು. ಉತ್ತಮ ಸಹಕಾರಿ ಸಂಘಗಳಿಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ಸನ್ಮಾನಿಸುವರು. ಇ-ಫ್ಯಾಕ್ಸಗಳ ಪ್ರಮಾಣ ಪತ್ರವನ್ನು ಸಂಸದ ಬಸವರಾಜ ಬೊಮ್ಮಾಯಿ ವಿತರಿಸುವರು. ವಾರ ಪತ್ರಿಕೆಯನ್ನು ವಿಪ ಮುಖ್ಯಸಚೇತಕ ಸಲೀಂ ಅಹ್ಮದ್ ಅನಾವರಣಗೊಳಿಸುವರು. ಪ್ರದರ್ಶನ ಮಳಿಗೆಗಳ ಉದ್ಘಾಟನೆಯನ್ನು ಸಹಕಾರ ಮಹಾಮಂಡಳದ ಅಧ್ಯಕ್ಷ, ಶಾಸಕ ಜಿ.ಟಿ. ದೇವೇಗೌಡ ನೆರವೇರಿಸುವರು. ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ಬೆಳಗಾವಿ, ಹಾವೇರಿ, ಧಾರವಾಡ, ಗದಗ ಜಿಲ್ಲೆಗಳ ಶಾಸಕರು, ಜನಪ್ರತಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.ದೇಶಾದ್ಯಂತ ಪ್ರತಿ ವರ್ಷ ನ.14ರಿಂದ 20ರ ವರೆಗೆ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಆಚರಿಸಲಾಗುತ್ತಿದೆ. ಈ ಬಾರಿ ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು ಎಂಬ ಧ್ಯೇಯ ವಾಕ್ಯದೊಂದಿಗೆ, ಸಹಕಾರ ಉದ್ಯಮಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ ಎಂಬ ವಿಷಯವನ್ನಿಟ್ಟುಕೊಂಡು ಸಪ್ತಾಹ ಆಚರಿಸಲಾಗುತ್ತಿದೆ. ಪ್ರತಿಯೊಂದು ವಿಭಾಗದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೆಳಗಾವಿ ವಿಭಾಗದ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಹಾವೇರಿಯಲ್ಲಿ ಆಯೋಜಿಸಲಾಗಿದ್ದು, 3 ಸಾವಿರಕ್ಕೂ ಅಧಿಕ ಸಹಕಾರಿಗಳು ಆಗಮಿಸಲಿದ್ದಾರೆ ಎಂದರು.ಕೆಸಿಸಿ ಬ್ಯಾಂಕ್‌ವತಿಯಿಂದ ಹಾವೇರಿ, ಗದಗ, ಧಾರವಾಡ ಜಿಲ್ಲೆಗಳ 45664 ರೈತರಿಗೆ 348ಕೋಟಿ ರು. ಅಲ್ಪಾವಧಿ, 589 ರೈತರಿಗೆ 36ಕೋಟಿ ರು. ಮಧ್ಯಮಾವಧಿ, 1237ರೈತರಿಗೆ 21ಕೋಟಿ ಧೀರ್ಘಾವದಿ ಸಾಲ ವಿತರಿಸಲಾಗಿದೆ. ಯಶಸ್ವಿನಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಹಾವೇರಿ ಜಿಲ್ಲೆಯಲ್ಲಿ 1.04ಲಕ್ಷ ಫಲಾನುಭವಿಗಳು ನೋಂದಣಿಯಾಗಿದ್ದು, ಈ ಪೈಕಿ 1919 ಫಲಾನುಭವಿಗಳು ಇದರ ಪ್ರಯೋಜನ ಪಡೆದಿದ್ದಾರೆ. ಅಖಂಡ ಧಾರವಾಡ ಜಿಲ್ಲೆಯಲ್ಲಿ 3754 ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ ಎಂದರು. ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ ಮಾತನಾಡಿ, ನ. 23ರಂದು ಹಾವೇರಿಯಲ್ಲಿ ಕೆಸಿಸಿ ಬ್ಯಾಂಕ್‌ನ ಪ್ರಾದೇಶಿಕ ಕಚೇರಿ ಉದ್ಘಾಟನೆಗೊಳ್ಳಲಿದ್ದು, ಇಲ್ಲಿಯೂ ಸಹ ಬೋರ್ಡ್ ಸಭೆ ನಡೆಸಲು, 10 ಲಕ್ಷ ರು.ಗಿಂತಲೂ ಕಡಿಮೆ ಬೇಡಿಕೆಯ ಸಾಲಗಳಿಗೆ ಇಲ್ಲಿಯೇ ಮಂಜೂರಾತಿ ನೀಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದರು.ಹಾವೇರಿ ಹಾಲು ಒಕ್ಕೂಟದ ಅಧ್ಯಕ್ಷ ಮಂಜನಗೌಡ ಪಾಟೀಲ ಮಾತನಾಡಿ, ಕೇಂದ್ರ ಸರ್ಕಾರ ರೈತರಿಗೆ ನೀಡುವ ನಬಾರ್ಡ್‌ನ ಸಾಲ ಕಡಿಮೆ ಮಾಡಿರುವುದರಿಂದ ರೈತರಿಗೆ ಶೂನ್ಯ ಬಡ್ಡಿದರಲ್ಲಿ ಹೆಚ್ಚಿನ ಸಾಲಸೌಲಭ್ಯ ನೀಡಲು ಸಾಧ್ಯವಾಗುತ್ತಿಲ್ಲ, ಹೀಗಾಗಿ ಸಾಲದ ಪ್ರಮಾಣವನ್ನು ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಲು ಸಪ್ತಾಹದಲ್ಲಿ ಮನವಿ ಸಲ್ಲಿಸಲಾಗುವುದು ಎಂದರು. ಸಹಕಾರಿ ಮಹಾಮಂಡಳದ ನಿರ್ದೇಶಕ ಬಸವರಾಜ ಅಬರಗೊಂಡ ಮಾತನಾಡಿ, ನ. 18ರ ಬೆಳಗ್ಗೆ 10ಕ್ಕೆ ಸಹಕಾರಿ ಯೂನಿಯನ್‌ದ ಸಹಕಾರಿ ಭವನದ ಉದ್ಘಾಟನೆ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪತ್ತಿನ ಸಹಕಾರ ಸಂಘಗಳ ಮಹಾಮಂಡಳದ ನಿರ್ದೆಶಕರಾದ ಡಾ.ಸಂಜಯ್ ಹೊಸಮಠ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಿವಾನಂದ ಸಂಗಾಪುರ, ಸಹಕಾರ ಸಂಘಗಳ ಉಪನಿಬಂಧಕ ಅಜ್ಮತ್ ಉಲ್ಲಾದ್‌ಖಾನ್, ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ಪುಂಡಲೀಕ ಕೆರೂರು, ಹಾವೇಮೂಲ್ ನಿರ್ದೇಶಕ ಬಸವೇಶಗೌಡ ಪಾಟೀಲ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ವಿಕ್ರಂ ಕುಲಕರ್ಣಿ, ಎಸ್.ಜಿ. ಸುಣಗಾರ ಇತರರಿದ್ದರು.
;Resize=(128,128))
;Resize=(128,128))