ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರುದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸಹಕಾರ ಸಂಘಗಳ ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರ ‘ಜಿಲ್ಲಾ ಮಟ್ಟದ ಕ್ರೀಡಾಕೂಟ’ ನ.30ರಂದು ಬೆಳಗ್ಗೆ 9 ಗಂಟೆಗೆ ಪುತ್ತೂರಿನ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಕ್ರೀಡಾಕೂಟದಲ್ಲಿ ಮಹಿಳೆಯರಿಗೆ ಹಾಗೂ ಪುರುಷರಿಗೆ 100 ಮೀ. ಓಟ, ಗುಂಡು ಎಸೆತ ಹಾಗೂ ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿವೆ. ಸಹಕಾರಿ ಸಂಘಗಳ ಸದಸ್ಯರು, ಸಿಬ್ಬಂದಿ, ನವೋದಯ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಪ್ರೇರಕರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಿಬ್ಬಂದಿ ವರ್ಗದವರು ಒಳಗೊಂಡಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಕ್ರೀಡಾಪಟುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.ಸಹಕಾರ ಸಚಿವರಿಂದ ಉದ್ಘಾಟನೆ:ಜಿಲ್ಲಾ ಮಟ್ಟದ ಈ ಕ್ರೀಡಾಕೂಟದ ಉದ್ಘಾಟನೆಯನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕ್ರೀಡಾಕೂಟಕ್ಕೆ ಚಾಲನೆ ನೀಡುವರು. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಕ್ರೀಡಾ ಜ್ಯೋತಿ ಪ್ರಜ್ವಲನೆ ಮಾಡುತ್ತಾರೆ. ಸಂಸದ ನಳಿನ್ ಕುಮಾರ್ ಕಟೀಲು ಮೆರವಣಿಗೆಯನ್ನು ಉದ್ಘಾಟನೆ ಮಾಡಲಿದ್ದಾರೆ ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ವಹಿಸುತ್ತಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೆ., ಮಾಜಿ ಶಾಸಕ ಸಂಜೀವ ಮಠಂದೂರು ಭಾಗವಹಿಸಲಿದ್ದಾರೆ.ಸಮಾರೋಪ ಸಮಾರಂಭ:ಅದೇ ದಿನ ಸಂಜೆ 4 ಗಂಟೆಗೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದೆ. ಪುತ್ತೂರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು ವಿಜೇತರಿಗೆ ಪ್ರಶಸ್ತಿ ವಿತರಣೆ ಮಾಡುತ್ತಾರೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ರಾಮಕೃಷ್ಣ ಸರ್ಕಾರಿ ಪ್ರೌಢಶಾಲೆ ಪುತ್ತೂರು ಸಂಚಾಲಕ ಹೇಮನಾಥ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ನಗರಸಭೆಯ ಮಾಜಿ ಅಧ್ಯಕ್ಷ ಜೀವಂಧರ ಜೈನ್ ಮತ್ತು ಪುತ್ತೂರು ನಗರಸಭೆಯ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್ ಭಾಗವಹಿಸಲಿದ್ದಾರೆ ಎಂದು ಡಾ.ರಾಜೇಂದ್ರ ಕುಮಾರ್ ಮಾಹಿತಿ ನೀಡಿದರು.
ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರಿಶ್ಚಂದ್ರ, ಕೆ. ಜೈರಾಜ್ ಬಿ.ರೈ, ಸ್ಕ್ಯಾಡ್ಸ್ ಅಧ್ಯಕ್ಷರಾದ ರವೀಂದ್ರ ಕಂಬಳಿ, ಬ್ಯಾಂಕ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಇದ್ದರು.