ಸಾರಾಂಶ
ಕನ್ನಡಪ್ರಭ ವಾರ್ತೆ ಕುಶಾಲನಗರತೊರೆನೂರು ಶ್ರೀ ಶನೇಶ್ವರ ಸ್ವಾಮಿ ದೇವಾಲಯ ಅಭಿವೃದ್ಧಿ ಸಮಿತಿ ಮತ್ತು ಕುಶಾಲನಗರ ಕನ್ನಡ ಸಿರಿ ಸ್ನೇಹ ಬಳಗ ಸಂಯುಕ್ತ ಆಶಯದಲ್ಲಿ 8ರಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಮತ್ತು ಜಾನಪದ ಉತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿ ಪ್ರಮುಖ ಕೆ.ಎಸ್. ಕೃಷ್ಣೇಗೌಡ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮಹಾಶಿವರಾತ್ರಿ ಅಂಗವಾಗಿ 8ರಂದು ಬೆಳಗ್ಗೆ ದೇವಾಲಯದಲ್ಲಿ ಗಣಪತಿ ಹೋಮ, ವಿವಿಧ ಅಭಿಷೇಕಗಳು, ನಂತರ ಸಾಮೂಹಿಕ ಮಹಾ ಮೃತ್ಯುಂಜಯ ಹೋಮ ನಡೆಸಲಾಗುವುದು ಎಂದರು.ದೇವಾಲಯ ಆವರಣದಲ್ಲಿ ತ್ರಿವಿಧ ದಾಸೋಹಿ ಪದ್ಮ ವಿಭೂಷಣ ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮತ್ತು ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಸಂಜೆ 7 ಗಂಟೆಗೆ ವಿಶ್ವ ಮಹಿಳಾ ದಿನಾಚರಣೆ ಮತ್ತು ರಾಜ್ಯಮಟ್ಟದ ನೃತ್ಯ ಸ್ಪರ್ಧೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಸದಾಶಿವ ಸ್ವಾಮೀಜಿ ಹಾಗೂ ಶ್ರೀ ಮಲ್ಲೇಶ ಸ್ವಾಮೀಜಿ ಸಾನಿಧ್ಯದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸುವರು ಎಂದರು. ದೇವಾಲಯ ಸಮಿತಿ ಅಧ್ಯಕ್ಷ ಪಿ.ಎ. ಮಾದಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಉಪನ್ಯಾಸಕರಾದ ಡಾ. ಜಮೀರ್ ಅಹ್ಮದ್ ಅವರು ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.ಕನ್ನಡ ಸೇರಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಮಾತನಾಡಿ, ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕ ಮಹಿಳೆಯರನ್ನು ಸನ್ಮಾನಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಾನಪದ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ನೃತ್ಯ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವರು ಮೊಬೈಲ್ ಸಂಖ್ಯೆ 9972847278 ಅಥವಾ 99809888123 ಸಂಪರ್ಕಿಸುವಂತೆ ಕೋರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ತೊರೆನೂರು ದೇವಾಲಯ ಸಮಿತಿ ಅಧ್ಯಕ್ಷ ಟಿ.ಬಿ. ಜಗದೀಶ್ ಇದ್ದರು.