ಇಂದಿನಿಂದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ: ಅಮರೇಶ ನಾಯಕ

| Published : Jan 30 2024, 02:02 AM IST

ಸಾರಾಂಶ

ಬಾಗಲಕೋಟೆ: ಕುಷ್ಠರೋಗ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜನವರಿ 30 ರಿಂದ ಫೆಬ್ರವರಿ 13ರವರೆಗೆ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ ತಿಳಿಸಿದರು. ಜಿಪಂ ಸಭಾಭವನದಲ್ಲಿ ಸೋಮವಾರ ಕುಷ್ಠರೋಗ ಜಾಗೃತಿ ಅಭಿಯಾನ ಕುರಿತು ಜರುಗಿದ ಅಂತರ ಇಲಾಖೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಷ್ಠರೋಗ ಶಾಪವಲ್ಲ. ಸೂಕ್ತ ಚಿಕಿತ್ಸೆಯಿಂದ ಅಂಗವಿಕಲತೆ ಆಗುವುದನ್ನು ತಡೆಗಟ್ಟಬಹುದಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಕುಷ್ಠರೋಗ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜನವರಿ 30 ರಿಂದ ಫೆಬ್ರವರಿ 13ರವರೆಗೆ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ ತಿಳಿಸಿದರು.

ಜಿಪಂ ಸಭಾಭವನದಲ್ಲಿ ಸೋಮವಾರ ಕುಷ್ಠರೋಗ ಜಾಗೃತಿ ಅಭಿಯಾನ ಕುರಿತು ಜರುಗಿದ ಅಂತರ ಇಲಾಖೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಷ್ಠರೋಗ ಶಾಪವಲ್ಲ. ಸೂಕ್ತ ಚಿಕಿತ್ಸೆಯಿಂದ ಅಂಗವಿಕಲತೆ ಆಗುವುದನ್ನು ತಡೆಗಟ್ಟಬಹುದಾಗಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಕಳಂಕ ಕೊನೆಗೊಳಿಸಿ, ಘನತೆ ಎತ್ತಿ ಹಿಡಿಯಿರಿ ಎಂಬ ಘೋಷವ್ಯಾಕ್ಯದೊಂದಿಗೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ಕುಷ್ಠರೋಗ ತಡೆಗಟ್ಟುವಲ್ಲಿ ಪಂಚಾಯತ್ ರಾಜ್, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಾರ್ತಾ ಇಲಾಖೆ ಸಹಕಾರ ಹಾಗೂ ಜವಾಬ್ದಾರಿ ಅಗತ್ಯವಾಗಿದೆ. ಗ್ರಾಮಮಟ್ಟದಲ್ಲಿ ಜಾಗೃತಿ ಮೂಡಿಸಲು ಡಂಗುರ, ಧ್ವನಿವರ್ದಕಗಳ ಮೂಲಕ ಪ್ರಚಾರ ಕೈಗೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಸ ವಿಲೇವಾರಿ ವಾಹನಗಳ ಧ್ವನಿವರ್ಧಕ ಮೂಲಕ ಪ್ರಚಾರ ಮಾಡಬೇಕು. ಸರ್ಕಾರಿ, ಖಾಸಗಿ ಕಚೇರಿ, ಶಾಲಾ-ಕಾಲೇಜು, ವಸತಿ ನಿಲಯಗಳಲ್ಲಿ ಜಾಗೃತಿ ಅಭಿಯಾನಕ್ಕೆ ಸಹಕಾರ ನೀಡಲು ತಿಳಿಸಿದರು.

ಶಾಲಾ ಮಕ್ಕಳಿಂದ ಜನಜಾಗೃತಿ ಜಾಥಾ, ಶಾಲೆಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸಬೇಕು. ತಾಯಂದಿರ ಸಭೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಿರಂತರವಾಗಿ ಜಾಗೃತಿ ಮೂಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು. ಜಿಲ್ಲೆಯಲ್ಲಿ ಕುಷ್ಠರೋಗ ಹರಡುವಿಕೆ ಪ್ರಮಾಣ ಶೇ.0.18 ಇದ್ದು, ಇದನ್ನು ಸಂಪೂರ್ಣ ತಡೆಗಟ್ಟುವ ಮೂಲಕ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಕ್ರಮ ಕೈಗೊಳ್ಳಲು ತಿಳಿಸಿದರು.

ಜಿಲ್ಲಾ ಕುಷ್ಠರೋಗ ನಿರ್ಮೂಲಣಾಧಿಕಾರಿ ಡಾ.ಶಿವನಗೌಡ ಪಾಟೀಲ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮಗಳ ಬಗ್ಗೆ ವಿವರವಾಗಿ ಸಭೆಗೆ ತಿಳಿಸಿದರು. ಕುಷ್ಠರೋಗ ಜಾಗೃತಿ ಅಭಿಯಾನದ ಪ್ರಚಾರದ ಪೋಸ್ಟರ್‌, ಜಾಗೃತಿಯ ಫಲಕಗಳನ್ನು ಬಿಡುಗಡೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಮಲೇರಿಯಾ ನಿರ್ಮೂಲಣಾ ಅಧಿಕಾರಿ ಡಾ.ಕುಸುಮಾ ಮಾಗಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಗ್ಯಾನಪ್ಪ ದಾಸರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಕಲಾ ಸಿನ್ನೂರ, ಜಿಲ್ಲಾ ಕುಷ್ಠರೋಗ ಸಂಘದ ಅಧಿಕಾರಿ ನಾಗಪ್ಪ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.