ಪ್ರವಾಸಿ ತಾಣಗಳನ್ನು ಪ್ಲಾಸ್ಟಿಕ್‌ ಮುಕ್ತಗೊಳಿಸಬೇಕು

| Published : Sep 28 2024, 01:22 AM IST

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬೆಟ್ಟ, ನೆಲಮಂಗಲ ತಾಲೂಕಿನ ಶಿವಗಂಗೆ, ದೇವನಹಳ್ಳಿ ತಾಲೂಕಿನ ಆವತಿ ಬೆಟ್ಟದಂತಹ ಚಾರಣ ತಾಣಗಳು, ಘಾಟಿ ಸುಬ್ರಹ್ಮಣ್ಯ ಸೇರಿದಂತೆ ವಿವಿಧ ಧಾರ್ಮಿಕ ಸ್ಥಳಗಳು ಹಾಗೂ ಅನೇಕ ಪಾರಂಪರಿಕ ಕಟ್ಟಡಗಳಿರುವುದು ಜಿಲ್ಲೆಯ ಅನನ್ಯತೆಯಾಗಿದೆ ಎಂದು ಜಿಪಂ ಸಿಇಒ ಡಾ.ಕೆ.ಎನ್.ಅನುರಾಧಾ ಹೇಳಿದರು.

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬೆಟ್ಟ, ನೆಲಮಂಗಲ ತಾಲೂಕಿನ ಶಿವಗಂಗೆ, ದೇವನಹಳ್ಳಿ ತಾಲೂಕಿನ ಆವತಿ ಬೆಟ್ಟದಂತಹ ಚಾರಣ ತಾಣಗಳು, ಘಾಟಿ ಸುಬ್ರಹ್ಮಣ್ಯ ಸೇರಿದಂತೆ ವಿವಿಧ ಧಾರ್ಮಿಕ ಸ್ಥಳಗಳು ಹಾಗೂ ಅನೇಕ ಪಾರಂಪರಿಕ ಕಟ್ಟಡಗಳಿರುವುದು ಜಿಲ್ಲೆಯ ಅನನ್ಯತೆಯಾಗಿದೆ ಎಂದು ಜಿಪಂ ಸಿಇಒ ಡಾ.ಕೆ.ಎನ್.ಅನುರಾಧಾ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆವತಿ ಬೆಟ್ಟದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಮತ್ತು ಶಾಂತಿ ಧ್ಯೇಯ ವಾಕ್ಯದೊಂದಿಗೆ ಚಾರಣ, ಸಸಿ ನೆಡುವ ಹಾಗೂ ಸ್ವಚ್ಛತೆಯೇ ಸೇವೆ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಚಾರಣಕ್ಕೆ ಅನುಕೂಲಕರ ವಾತಾವರಣವನ್ನು ಜಿಲ್ಲಾಡಳಿತ ಕಲ್ಪಿಸುತ್ತಿದ್ದು, ಸಾರ್ವಜನಿಕರು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದಾಗ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಸ್ವಚ್ಛತೆ ಕಾಪಾಡಬೇಕು ಎಂದರು.

ಸ್ವಚ್ಛತೆಯೇ ಸೇವೆ ಆಂದೋಲನ:

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ಸ್ವಚ್ಛತೆಯೇ ಸೇವೆ ಪಾಕ್ಷಿಕವನ್ನು ಆಯೋಜಿಸಲಾಗುತ್ತಿದ್ದು ಜಿಲ್ಲೆಯಾದ್ಯಂತ ಸೆ.17 ರಿಂದ ಅ.2 ರ ವರೆಗೆ ಸೇವಾ ಪಾಕ್ಷಿಕ-2024 ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಆಂದೋಲನದ ಭಾಗವಾಗಿ ಎಲ್ಲಾ ಅಧಿಕಾರಿಗಳು, ಸಂಘಸಂಸ್ಥೆಗಳು, ಸಾರ್ವಜನಿಕರು ಆವತಿ ಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳು, ಕಸ-ತ್ಯಾಜ್ಯವನ್ನು ಸಂಗ್ರಹಿಸಿ ಸ್ವಚ್ಚತೆ ಮಾಡಿದರು. ಈ ಸಂದರ್ಭದಲ್ಲಿ ಸ್ವಚ್ಛತೆ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಬಳಿಕ ಬೆಟ್ಟದ ಸುತ್ತಮುತ್ತಲಿನ ಪ್ರದೇಶದಲ್ಲಿ 100ಕ್ಕೂ ಅಧಿಕ ಸಸಿಗಳನ್ನು ನೆಡಲಾಯಿತು.

ಪರಿಸರ ಸಂರಕ್ಷಣೆಗಾಗಿ ಸಮಾಜದಲ್ಲಿ ಗಿಡ-ಮರ ನೆಟ್ಟು ಹಸಿರು ವಾತಾವರಣ ನಿರ್ಮಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಲಾಯಿತು. ಇದೇ ವೇಳೆ ಅರಣ್ಯ ಬೆಳೆಸಿ ಪೋಷಿಸಿದ ಅಧಿಕಾರಿಗಳು, ಸಿಬ್ಬಂದಿ, ಪರಿಸರ ಸಂಸ್ಥೆಗಳು ಹಾಗೂ ಪ್ರವಾಸೋದ್ಯಮ ಮಿತ್ರರ ಕಾರ್ಯಕ್ಕೆ ಪ್ರಶಂಸನಾ ಪತ್ರ ನೀಡಿ ಸನ್ಮಾನಿಸಲಾಯಿತು.

ಅಪರ ಜಿಲ್ಲಾಧಿಕಾರಿ ಆರ್. ಸುಮಾ, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗಾರ, ಜಿಪಂ ಯೋಜನಾ ನಿರ್ದೇಶಕ ವಿಠ್ಠಲ್ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಪ್ರೀತಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರಗೌಡ, ದೊಡ್ಡ ಬಳ್ಳಾಪುರ ವಿಭಾಗದ ಡಿವೈಎಸ್ಪಿ ರವಿ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.