ಗದಗ: ಇಂದಿನ ಜಾಗತಿಕ ಯುಗದಲ್ಲಿ ಶಿಕ್ಷಣ ಬಹು ಮುಖ್ಯವಾಗಿದ್ದು, ಲಂಬಾಣಿ ಜನಾಂಗ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವುದರ ಮೂಲಕ ಉತ್ತಮ ಸಮಾಜ, ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.ನಗರದ ಜಿಲ್ಲಾಡಳಿತ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಮಂಗಳವಾರ ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜರುಗಿದ ಸಂತ ಸೇವಾಲಾಲರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಂಸ್ಕೃತಿ, ನಾಗರಿಕ ಪ್ರಜ್ಞೆ ಹಾಗೂ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವುದನ್ನು ತಾಂಡಾಗಳಲ್ಲಿ ಕಾಣಬಹುದು. ಲಂಬಾಣಿ ಸಮುದಾಯ ಬಹುದೊಡ್ಡ ಸಮುದಾಯವಾಗಿದೆ. ದೇಶದಲ್ಲಿ ಸುಮಾರು 12 ಕೋಟಿಯಷ್ಟು ಜನಸಂಖ್ಯೆ ಹೊಂದಿದೆ. ಜಿಲ್ಲೆಯಲ್ಲಿ ಅನೇಕ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಿದೆ. ಇತ್ತೀಚೆಗೆ 19 ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಿ ಹಕ್ಕುಪತ್ರ ವಿತರಿಸಲಾಗಿದೆ ಎಂದರು.

ಲಂಬಾಣಿ ಸಮುದಾಯವು ಇಂದಿಗೂ ಸಂಸ್ಕೃತಿಯನ್ನು ಬಿಟ್ಟು ಕೊಡದೆ ಅದನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಸಂತಸದ ವಿಷಯ. ಇದಕ್ಕೆ ಸಂತ ಸೇವಾಲಾಲರು ಪ್ರೇರಣೆಯಾಗಿದ್ದಾರೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನಪ್ರಾತಿನಿಧ್ಯ ವ್ಯವಸ್ಥೆಯಡಿ ಲಂಬಾಣಿ ಸಮುದಾಯ ತಮ್ಮದೇ ಆದ ವ್ಯವಸ್ಥೆಯನ್ನು ಹೊಂದಿದೆ. ತಮ್ಮ ಸಮುದಾಯದ ಹಿರಿಯರಿಗೆ ನೀಡುವ ಗೌರವ ಸಮಾಜಕ್ಕೆ ಮಾದರಿಯಾಗಿದೆ. ಲಂಬಾಣಿ ಸಮುದಾಯ ಕೊಟ್ಟ ಮಾತನ್ನು ಉಳಿಸಿಕೊಳ್ಳುವ, ಸ್ವಾಭಿಮಾನದ ಸಂಕೇತಕ್ಕೆ ಮಾದರಿಯಾದಂತಹ ಸಮುದಾಯವಾಗಿದ್ದು, ಪ್ರತಿವರ್ಷ ಇದೇ ರೀತಿ ಒಗ್ಗಟ್ಟಿನಿಂದ ಸಂತ ಸೇವಾಲಾಲರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಿ ಎಂದರು.ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ಹರಿಲಾಲ ಪವಾರ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು. ಈ ವೇಳೆ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ಬಸವರಾಜ ಬಳ್ಳಾರಿ, ಶಿವಪ್ಪ ನಾಯಕ ಸೇರಿದಂತೆ ಸಮಾಜದ ಗಣ್ಯರು, ಮುಖಂಡರು ಇದ್ದರು. ಬಾಬು ಚವಾಣ ಪ್ರಾಸ್ತಾವಿಕವಾಗಿ ಮಾತನಾಡಿದರು. ವೆಂಕಟೇಶ ಅಲಕೋಡ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತಪಡಿಸಿದರು. ಬಾಹುಬಲಿ ಜೈನರ ನಿರೂಪಿಸಿದರು.