ಸಾರಾಂಶ
ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15 ರ ವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉಡುಪಿ : ರಾಷ್ಟ್ರೀಯ ಹೆದಾರಿ 169 ಎ ಇದರ ತೀರ್ಥಹಳ್ಳಿ- ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15 ರ ವರೆಗೆ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮಳಿಗಳು 1989ರ ಕಲಂ 221(ಎ)(2) ಮತ್ತು (5) ರ ಅನ್ವಯ ಸದರಿ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
ತೀರ್ಥಹಳ್ಳಿಯಿಂದ ಉಡುಪಿಗೆ ಚಲಿಸುವ ಭಾರಿ ವಾಹನಗಳು ತೀರ್ಥಹಳ್ಳಿ - ಮಾಸ್ತಿಕಟ್ಟೆ - ಸಿದ್ದಾಪುರ - ಕುಂದಾಪುರ ಮಾರ್ಗವಾಗಿ ಉಡುಪಿಗೆ ತಲುಪುವಂತೆ ಹಾಗೂ ಉಡುಪಿಯಿಂದ ತೀರ್ಥಹಳ್ಳಿ ಮಾರ್ಗವಾಗಿ ಚಲಿಸುವ ಭಾರಿ ವಾಹನಗಳು ಉಡುಪಿ - ಕುಂದಾಪುರ -ಸಿದ್ದಾಪುರ - ಮಾಸ್ತಿಕಟ್ಟೆ ಮಾರ್ಗವಾಗಿ ತೀರ್ಥಹಳ್ಳಿಗೆ ತಲಪುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.