ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಫಲಾನುಭವಿಗಳಿಗೆ ನೀಡಲಾಗುತ್ತಿರುವ ₹2000 ಆರ್ಥಿಕ ನೆರವನ್ನು ಮಹಿಳೆಯರು ಸ್ವಾವಲಂಬನೆ, ಮಕ್ಕಳ ವಿದ್ಯಾಭ್ಯಾಸ, ಕೃಷಿ ಚಟುವಟಿಕೆ, ಹೈನುಗಾರಿಕೆ, ವೈದ್ಯಕೀಯ ವೆಚ್ಚ ಸೇರಿದಂತೆ ವಿವಿಧ ಅಗತ್ಯಗಳಿಗೆ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ
ಗದಗ: ಗೃಹಲಕ್ಷ್ಮೀ ಯೋಜನೆಯ ಉದ್ದೇಶಕ್ಕೆ ಧಕ್ಕೆಯಾಗದಂತೆ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯ ತಲುಪಿಸುವುದು ಹಾಗೂ ಅನರ್ಹರಿಗೆ ಸರ್ಕಾರದ ಹಣ ಸೋರಿಕೆಯಾಗದಂತೆ ತಡೆಯುವುದು ಮರುಪರಿಶೀಲನೆಯ ಪ್ರಮುಖ ಉದ್ದೇಶವಾಗಿದೆ. ಈ ಕಾರ್ಯವನ್ನು ಜವಾಬ್ದಾರಿಯುತವಾಗಿ ಹಾಗೂ ಪಾರದರ್ಶಕವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಆಸೂಟಿ ತಿಳಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಡೆದ ಗೃಹಲಕ್ಷ್ಮೀ ಯೋಜನೆಯ ಮರುಪರಿಶೀಲನಾ ಅರ್ಜಿಗಳ ಕುರಿತು ಜಿಲ್ಲಾ ಮಟ್ಟದ ತರಬೇತುದಾರರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು ಫಲಾನುಭವಿಗಳಿಗೆ ನೀಡಲಾಗುತ್ತಿರುವ ₹2000 ಆರ್ಥಿಕ ನೆರವನ್ನು ಮಹಿಳೆಯರು ಸ್ವಾವಲಂಬನೆ, ಮಕ್ಕಳ ವಿದ್ಯಾಭ್ಯಾಸ, ಕೃಷಿ ಚಟುವಟಿಕೆ, ಹೈನುಗಾರಿಕೆ, ವೈದ್ಯಕೀಯ ವೆಚ್ಚ ಸೇರಿದಂತೆ ವಿವಿಧ ಅಗತ್ಯಗಳಿಗೆ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಗದಗ ಜಿಲ್ಲೆಯಲ್ಲಿ ಸುಮಾರು 2.74 ಲಕ್ಷ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ತಲುಪಿದೆ ಎಂದರು.
ಯೋಜನೆ ಜಾರಿಯಾಗಿ ಮೂರು ವರ್ಷಗಳು ಕಳೆದಿರುವ ಹಿನ್ನೆಲೆ ಫಲಾನುಭವಿಗಳ ವಿವರಗಳನ್ನು ಮರುಪರಿಶೀಲಿಸುವ ಅಗತ್ಯವಿದೆ. ಈ ಅವಧಿಯಲ್ಲಿ ಕೆಲವು ಫಲಾನುಭವಿಗಳು ಮೃತಪಟ್ಟಿರುವುದಾಗಿ ದಾಖಲಾಗಿದ್ದರೂ ಅವರ ಕುಟುಂಬದ ಸದಸ್ಯರು ಯೋಜನೆಯ ಹಣ ಪಡೆಯುತ್ತಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇಂತಹ ಪ್ರಕರಣಗಳಿಂದ ಸರ್ಕಾರದ ಹಣ ಅನರ್ಹವಾಗಿ ಬಳಕೆಯಾಗುವ ಸಾಧ್ಯತೆ ಇರುವುದರಿಂದ ಫಲಾನುಭವಿಗಳ ನೈಜ ಸ್ಥಿತಿಗತಿಯನ್ನು ಪರಿಶೀಲಿಸಬೇಕು. ಅರ್ಹತೆ ಹೊಂದಿರುವ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಸೌಲಭ್ಯ ಮುಂದುವರಿಸುವಂತೆ ಕ್ರಮ ವಹಿಸಬೇಕು ಎಂದರು.ಅದೇ ರೀತಿ, ಬೇರೆ ರಾಜ್ಯದವರು ಸೇರಿದಂತೆ ವಿವಿಧ ಕಾರಣಗಳಿಂದ ಯೋಜನೆಗೆ ಅನರ್ಹರಾಗಿರುವವರು ಸೌಲಭ್ಯ ಪಡೆಯುತ್ತಿರುವ ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ಪರಿಶೀಲನೆ ನಡೆಸಬೇಕು. ಸರ್ಕಾರದ ಹಣ ದುರ್ಬಳಕೆಯಾಗದಂತೆ ಅಧಿಕಾರಿಗಳು ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯಡಿ ಅರ್ಹ ಮಹಿಳೆಯರಿಗೆ ಸರ್ಕಾರದಿಂದ ದೊರೆಯುತ್ತಿರುವ ಆರ್ಥಿಕ ನೆರವು ಕುಟುಂಬದ ಜೀವನಮಟ್ಟ ಸುಧಾರಣೆಗೆ ಸಹಕಾರಿಯಾಗಿದೆ. ಯೋಜನೆಯ ಉದ್ದೇಶಕ್ಕೆ ಧಕ್ಕೆಯಾಗದಂತೆ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಸಕಾಲದಲ್ಲಿ ಸೌಲಭ್ಯ ದೊರೆಯುವಂತೆ ಕ್ರಮ ವಹಿಸಬೇಕು ಎಂದರು.ಯೋಜನೆಯಡಿ ಅನರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರೆಯುತ್ತಿರುವುದು ಕಂಡುಬಂದಲ್ಲಿ ಅಂತಹ ಪ್ರಕರಣಗಳನ್ನು ನಿಯಮಾನುಸಾರ ಮರುಪರಿಶೀಲಿಸಿ ಸರಿಪಡಿಸಬೇಕು. ಈ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಫಲಾನುಭವಿಗೆ ಅನ್ಯಾಯವಾಗದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಈ ವೇಳೆ ಜಿಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಬಿ. ಅಳಗವಾಡಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ದೇವಪ್ಪ ಮುರನಾಳ, ನಾಗರಾಜ ಮಡಿವಾಳರ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. ನೇತ್ರಾ ಹರ್ತಿ ನಿರೂಪಿಸಿ, ವಂದಿಸಿದರು.