ಕನ್ನಡಪ್ರಭ ವಾರ್ತೆ ಬಾಗಲಕೋಟೆಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಚುನಾವಣೆ ಅತ್ಯಂತ ಮಹತ್ವದ ಪ್ರಕ್ರಿಯೆಯಾಗಿದ್ದು, ಚುನಾವಣೆಗಳು ಸಮರ್ಪಕವಾಗಿ ನಡೆಯಲು ಮತದಾರರ ಪಟ್ಟಿಯೂ ಪರಿಶುದ್ಧವಾಗಿರಬೇಕೆಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಚುನಾವಣೆ ಅತ್ಯಂತ ಮಹತ್ವದ ಪ್ರಕ್ರಿಯೆಯಾಗಿದ್ದು, ಚುನಾವಣೆಗಳು ಸಮರ್ಪಕವಾಗಿ ನಡೆಯಲು ಮತದಾರರ ಪಟ್ಟಿಯೂ ಪರಿಶುದ್ಧವಾಗಿರಬೇಕೆಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಹೇಳಿದರು.

ನವನಗರದ ಸರ್ಕಾರಿ ಬಾಲಕಿಯರ ಪಪೂ ಕಾಲೇಜಿನ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಸ್ವೀಪ್ ಸಹಯೋಗದಲ್ಲಿ ಹಮ್ಮಿಕೊಂಡ ನವ ಮತದಾರರ ವಿಶೇಷ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು. ದೇಶದ ಭವಿಷ್ಯ ರೂಪಿಸುವಲ್ಲಿ ನವ ಮತದಾರರ ಪಾತ್ರ ಮಹತ್ವದ್ದಾಗಿದೆ. 18 ವರ್ಷ ಪೂರೈಸುವ ಪ್ರತಿಯೊಬ್ಬ ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಬೇಕು. ಯಾವುದೇ ಅರ್ಹ ಯುವ ಮತದಾರರು ನೋಂದಣಿಯಿಂದ ಹೊರಗುಳಿಯದಂತೆ ವಿಶೇಷ ಅಭಿಯಾನದ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದರು.

ನವ ಮತದಾರರ ನೋಂದಣಿಗೆ ಅನುಕೂಲವಾಗುವಂತೆ ಸೆ.19 ಮತ್ತು 20ರಂದು ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಅರ್ಹ ಯುವ ಮತದಾರರು ತಮ್ಮ ಸಮೀಪದ ಮತಗಟ್ಟೆಗಳಲ್ಲಿ ನಡೆಯುವ ನೋಂದಣಿ ಅಭಿಯಾನದ ಸದುಪಯೋಗ ಪಡೆದುಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸುವಂತೆ ಅವರು ಮನವಿ ಮಾಡಿದರು.

ಜಿಲ್ಲಾಧಿಕಾರಿ ಸಂಗಪ್ಪ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಂಡಲೀಕ ಕಾಂಬಳೆ, ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಜಿ.ಡಿ.ಲಮಾಣಿ, ಜಿ.ಪಂ ಸಹಾಯಕ ಯೋಜನಾ ನಿರ್ದೇಶಕ ಭೀಮಪ್ಪ ತಳವಾರ, ತಾಪಂ ಇಒ ಸುಭಾಷ ಸಂಪಗಾಂವಿ ಸೇರಿದಂತೆ ಇತರರು ಉಪಸ್ಥಿತರಿದ್ದರು, ಸಂಗಮೇಶ ಸಣ್ಣತಂಗಿ ಕಾರ್ಯಕ್ರಮ ನಿರೂಪಿಸಿದರು.

ಪ್ರತಿವರ್ಷ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಅ.1ಕ್ಕೆ 18 ವರ್ಷ ಪೂರೈಸುವ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 17 ವರ್ಷ ಮೇಲ್ಪಟ್ಟವರು ಹಾಗೂ ಅ.1ಕ್ಕೆ 18 ವರ್ಷ ಪೂರೈಸುವವರು ನಮೂನೆ-6 ಅನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಮಾಡಿಕೊಳ್ಳಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಇರುವ ಅರ್ಹತೆಗಳು, ನೋಂದಣಿ ಪ್ರಕ್ರಿಯೆ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ. - ಪಿ.ಎಸ್.ವಸ್ತ್ರದ, ನೋಡಲ್ ಅಧಿಕಾರಿ, ರಾಜ್ಯ ಸ್ವೀಪ್