ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರು
ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಹೊಸದಾಗಿ ಕೆಎಸ್ಆರ್‌ಟಿಸಿ ಬಸ್ ಸಂಚಾರ ಪ್ರಾರಂಭ ಮಾಡಿರುವುದಕ್ಕೆ ಗ್ರಾಪಂ ಅಧ್ಯಕ್ಷ ಇಗ್ನೇಶಿ ಮುತ್ತು ಹಾಗೂ ಮುಖಂಡರು ಸಿಹಿ ವಿತರಣೆ ಮಾಡಿ ಸಂಭ್ರಮಿಸಿದರು.ನಂತರ ಗ್ರಾಪಂ ಅಧ್ಯಕ್ಷ ಇಗ್ನೇಶಿ ಮುತ್ತು ಮಾತನಾಡಿ, ತಾಲೂಕಿನ ಅತಿ ದೊಡ್ಡ ಗ್ರಾಪಂ ಎಂದು ಹೆಸರು ಪಡೆದಿರುವ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯ ಬಹುತೇಕ ಗ್ರಾಮಗಳು ಗುಡ್ಡಗಾಡು ಪ್ರದೇಶಗಳಿಂದ ಕೂಡಿದೆ. ಗ್ರಾಪಂ ಕೇಂದ್ರ ಸ್ಥಾನದಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಶಿಕ್ಷಕರು ತಮ್ಮ ಕೆಲಸ ಕಾರ್ಯಗಳಿಗೆ ತೆರಳಲು ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಆ.21ರಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ಹೆಚ್ಚುವರಿ ಬಸ್ ಬಿಡುವಂತೆ ಮನವಿ ಸಲ್ಲಿಸಲಾಗಿತ್ತು. ನಮ್ಮ ಮನವಿಗೆ ಸ್ಪಂದಿಸಿ ಒಂದು ಬಸ್ ವ್ಯವಸ್ಥೆ ಮಾಡಿದ್ದಾರೆ. ಅವರಿಗೆ ನಮ್ಮ ಗ್ರಾಪಂ ವತಿಯಿಂದ ಅಭಿನಂದನೆ ಸಲ್ಲಿಸುತ್ತೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಸ್ ವ್ಯವಸ್ಥೆ ಕಲ್ಪಿಸುವ ಮೂಲಕ ನಮ್ಮ ಗ್ರಾಪಂ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದರು. ಈ ವೇಳೆ ಗ್ರಾಪಂ ಸದಸ್ಯ ರಾಮಲಿಂಗಂ, ಮಾಜಿ ಸದಸ್ಯ ಜಪಮಾಲೆ ಸೇರಿದಂತೆ ಗ್ರಾಮದ ಮುಖಂಡರು ಹಾಜರಿದ್ದರು.