ಜಿಲ್ಲೆಯ ಬುಡಕಟ್ಟು ಜನರು ದುಶ್ಚಟಗಳನ್ನು ತ್ಯಜಿಸಿ ಶಿಕ್ಷಣ ಹಾಗೂ ಕ್ರೀಡೆಗೆ ಹೆಚ್ಚಿನ ಒತ್ತು ನೀಡುವಂತೆ ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.
ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರದಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ ಸಲಹೆ । ಆದಿವಾಸಿಗಳು ದುಶ್ಚಟಗಳನ್ನು ತ್ಯಜಿಸಿ ಸಮಾಜ ತಿದ್ದುವ ಕೆಲಸ ಮಾಡಿ
ಕನ್ನಡಪ್ರಭ ವಾರ್ತೆ, ಚಾಮರಾಜನಗರಜಿಲ್ಲೆಯ ಬುಡಕಟ್ಟು ಜನರು ದುಶ್ಚಟಗಳನ್ನು ತ್ಯಜಿಸಿ ಶಿಕ್ಷಣ ಹಾಗೂ ಕ್ರೀಡೆಗೆ ಹೆಚ್ಚಿನ ಒತ್ತು ನೀಡುವಂತೆ ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಸಲಹೆ ನೀಡಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿರುವ ಜಿಲ್ಲಾಮಟ್ಟದ ಅತೀ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ಜನಾಂಗದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕ್ರೀಡಾಕೂಟದಲ್ಲಿ ಬೆಟ್ಟ ಹಾಗೂ ಮರ ಹತ್ತುವುದು ಸೇರಿದಂತೆ ಸಾಕಷ್ಟು ಸ್ಪರ್ಧೆಗಳಿವೆ. ಸ್ಪರ್ಧೆಗಳಲ್ಲಿ ಭಾಗವಹಿಸಲು ಶರೀರ ದೃಢಕಾಯವಾಗಿರಬೇಕು. ಹಿಂದೆ ಬುಡಕಟ್ಟು ಜನರು ದೃಢಕಾಯತೆ ಹೊಂದಿದ್ದರು. ಬದಲಾದ ಕಾಲಘಟ್ಟದಲ್ಲಿ ದುಶ್ವಟಗಳಿಗೆ ಬಲಿಯಾಗಿ ದೃಢಕಾಯ ಕಳೆದುಕೊಳ್ಳುತ್ತಿದ್ದಾರೆ. ಆದಿವಾಸಿಗಳು ದುಶ್ಚಟಗಳನ್ನು ತ್ಯಜಿಸಿ ಸಮಾಜ ತಿದ್ದುವ ಕೆಲಸ ಮಾಡಬೇಕು. ಶಿಕ್ಷಣ, ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಬುಡಕಟ್ಟು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರವು ಆಶ್ರಮ ಶಾಲೆಗಳು, ಮೊರಾರ್ಜಿ ಶಾಲೆಗಳನ್ನು ತೆರೆದಿದೆ ಎಂದರು.
ಮಾಜಿ ಪ್ರಧಾನಿ ದಿ. ಮನಮೋಹನ್ ಸಿಂಗ್ ಅರಣ್ಯ ಹಕ್ಕು ಕಾಯ್ದೆಯನ್ನು ಜಾರಿಗೆ ತಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಬಡವರು, ಶೋಷಿತರು, ಅಲ್ಪಸಂಖ್ಯಾತರು ಹಾಗೂ ಆದಿವಾಸಿಗಳ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದಾರೆ ಎಂದು ತಿಳಿಸಿದರು.ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಮಾತನಾಡಿ, ಸ್ವಾತಂತ್ರ್ಯ ನಂತರ ಸರ್ಕಾರವು ಶೈಕ್ಷಣಿಕವಾಗಿ ಬುಡಕಟ್ಟು ಜನರಿಗೆ ಸಾಕಷ್ಟು ಅವಕಾಶಗಳನ್ನು ಕಲ್ಪಿಸಿದೆ. ಬುಡಕಟ್ಟು ಜನರನ್ನು ಸಮಾಜದ ಮುಖ್ಯವಾಹಿನಿಗೆ ತರಲು 2025-26ನೇ ಸಾಲಿನ ಆಯವ್ಯಯ ಮಂಡನೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಅತೀ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ಜನರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ರಾಜ್ಯದ 5 ಜಿಲ್ಲೆಗಳಲ್ಲಿ ಕ್ರೀಡೆ, ಸ್ಪರ್ಧೆಗಳು ನಡೆಯಲಿದ್ದು, ಈ ಪೈಕಿ ಚಾಮರಾಜನಗರ ಜಿಲ್ಲೆಯು ಒಂದಾಗಿದೆ. ದೇಶದಲ್ಲಿಯೇ ಇದು ಪ್ರಥಮವಾಗಿದೆ ಎಂದರು.
ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಹಾಗೂ ಜಿಲ್ಲಾಧಿಕಾರಿ ಶ್ರೀರೂಪ ಅವರು ಬುಡಕಟ್ಟು ಜನರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳ ಮಹತ್ವ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದರು.ಆರಂಭದಲ್ಲಿ ಬುಡಕಟ್ಟು ಜನರ ನಾಯಕ ಭಗವಾನ್ ಬಿರ್ಸಾಮುಂಡಾ ಪ್ರತಿಮೆಯನ್ನು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಅನಾವರಣಗೊಳಿಸಿದರು.
ಇದೇ ವೇಳೆ ಜಿಲ್ಲೆಯಲ್ಲಿ ಅತೀ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ಜನರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಆಯೋಜನೆಗೆ ಶ್ರಮಿಸಿದ ಬುಡಕಟ್ಟು ಮುಖಂಡರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಅಲ್ಲದೇ ಬಿರ್ಸಾಮುಂಡಾ ಪ್ರತಿಮೆಯ ಶಿಲ್ಪಿ ಚಾಮರಾಜನಗರದ ಮಧುಸೂಧನ್ ಅವರನ್ನು ಗೌರವಿಸಲಾಯಿತು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಸುರೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್. ಬಿಂದ್ಯಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಕ್ರೀಡಾಂಗಣ ಸಲಹಾ ಸಮಿತಿ ಸದಸ್ಯರಾದ ಶ್ರೀನಿವಾಸ ಪ್ರಸಾದ್, ಗಿರಿಜನರ ಮುಖಂಡರಾದ ಡಾ. ಸಿ. ಮಾದೇಗೌಡ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
-------------8ಸಿಎಚ್ಎನ್51
ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ 2 ದಿನಗಳ ಕಾಲ ಆಯೋಜಿಸಲಾಗಿರುವ ಜಿಲ್ಲಾಮಟ್ಟದ ಅತೀ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ಜನಾಂಗದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಉದ್ಘಾಟಿಸಿದರು.-------------------