ಹಾಸನ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ, ಮೌಲ್ಯಮಾಪನ ಅಕ್ರಮ ಹಾಗೂ ಪರೀಕ್ಷಾ ಪ್ರಕ್ರಿಯೆಯಲ್ಲಿನ ಅವ್ಯವಸ್ಥೆಗಳ ಪರಿಣಾಮವಾಗಿ ಮನನೊಂದು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಸ್ಮರಣಾರ್ಥ ಭಾರತೀಯ ವಿದ್ಯಾರ್ಥಿ ಫೆಡರೇಶನ್ ವತಿಯಿಂದ ಮಂಗಳವಾರ ಹಾಸನ ನಗರದ ಬಾಲಕರ ವಿದ್ಯಾರ್ಥಿ ವಸತಿ ನಿಲಯದಲ್ಲಿ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ವಿದ್ಯಾರ್ಥಿಗಳು, ಯುವಜನರು ಹಾಗೂ ಶಿಕ್ಷಣ ಪ್ರೇಮಿಗಳು ಮೃತ ವಿದ್ಯಾರ್ಥಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೌನಾಚರಣೆ ಮೂಲಕ ಗೌರವ ಅರ್ಪಿಸಿದರು. ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ವಿಶ್ವಾಸವನ್ನು ಮರುಸ್ಥಾಪಿಸಲು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್‍ಎಫ್‍ಐ ಜಿಲ್ಲಾ ಕಾರ್ಯದರ್ಶಿ ರಮೇಶ್ ಹಾಸನ್, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಅನಿಶ್ಚಿತತೆಯತ್ತ ತಳ್ಳಿವೆ ಎಂದು ಆರೋಪಿಸಿದರು. ವಿದ್ಯಾರ್ಥಿಗಳು ವರ್ಷಗಳ ಕಾಲ ಕಠಿಣ ಪರಿಶ್ರಮ ಪಟ್ಟು, ಪೋಷಕರು ತಮ್ಮ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಅಪಾರ ತ್ಯಾಗ ಮಾಡುತ್ತಾರೆ. ಆದರೆ ಪರೀಕ್ಷಾ ಪ್ರಕ್ರಿಯೆಯಲ್ಲಿನ ಅಕ್ರಮಗಳು ಆ ಪರಿಶ್ರಮಕ್ಕೆ ದೊಡ್ಡ ಹೊಡೆತ ನೀಡಿದ್ದು, ಅನೇಕ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಇಲ್ಲದಿದ್ದರೆ ಪ್ರತಿಭಾವಂತ ವಿದ್ಯಾರ್ಥಿಗಳ ಕನಸುಗಳು ಭಗ್ನಗೊಳ್ಳುತ್ತವೆ. ಶಿಕ್ಷಣ ಕ್ಷೇತ್ರದಲ್ಲಿ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಕಾಪಾಡುವುದು ಸರ್ಕಾರ ಹಾಗೂ ಸಂಬಂಧಪಟ್ಟ ಸಂಸ್ಥೆಗಳ ಜವಾಬ್ದಾರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಈ ವೇಳೆ ಸಂಘಟನೆ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿತು.
ಅನ್ಯಾಯಕ್ಕೊಳಗಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ನ್ಯಾಯ ದೊರೆಯುವವರೆಗೆ, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವವನ್ನು ಖಚಿತಪಡಿಸುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಸ್‍ಎಫ್‍ಐ ಮುಖಂಡರು ತಿಳಿಸಿದರು. ಸಭೆಯಲ್ಲಿ ರೈತ ಮುಖಂಡ ನವೀನ್ ಕುಮಾರ್, ವಿವೇಕ್, ಗಿರೀಶ್ ಪ್ರೇಮ್ ದೇಶ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ನೂರಾರು ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಪ್ರೇಮಿಗಳು ಭಾಗವಹಿಸಿ, ಮೃತ ವಿದ್ಯಾರ್ಥಿಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.