ಮತದಾನ ಪ್ರಮಾಣ ಹೆಚ್ಚಳಕ್ಕೆ ಪ್ರಯತ್ನಿಸಿ: ಪಿ.ಎಸ್‌.ವಸ್ತ್ರದ್‌

| Published : May 01 2024, 01:20 AM IST

ಮತದಾನ ಪ್ರಮಾಣ ಹೆಚ್ಚಳಕ್ಕೆ ಪ್ರಯತ್ನಿಸಿ: ಪಿ.ಎಸ್‌.ವಸ್ತ್ರದ್‌
Share this Article
  • FB
  • TW
  • Linkdin
  • Email

ಸಾರಾಂಶ

ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಎಂದು ರಾಯಚೂರಿನ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವೀಪ್ ಸಮಿತಿ ಸಭೆಯಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್‌ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಸಂಬಂಧಿಸಿದ ಅಧಿಕಾರಿಗಳು ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕು ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಸೂಚಿಸಿದರು.

ಸ್ಥಳೀಯ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ವೀಪ್ ಸಮಿತಿ ಸಭೆ ಉದ್ದೇಶಿಸಿ ಮಂಗಳವಾರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಲು ಜಾಗೃತಿ ಮೂಡಿಸಲು ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಮತದಾನದ ದಿನಂದಂದು ಮತಗಟ್ಟೆಗೆ ಆಗಮಿಸುವ ಮತದಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮೂಲಭೂತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ವಿಶೇಷಚೇತನ ಮತದಾರರಿಗೆ ಅನುಕೂಲವಾಗುವಂತೆ ರ್‍ಯಾಂಪ್ ವ್ಯವಸ್ಥೆ, ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ನೆರಳಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಸೌಲಭ್ಯಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆದು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.

ಜಿಲ್ಲೆಯ ಎಲ್ಲಾ ಮತದಾರರಿಗೆ ಮತದಾರರ ಮಾರ್ಗದರ್ಶಿ ಮಾಹಿತಿ ಚೀಟಿ ತಲುಪಿಸಬೇಕು. ಜಿಲ್ಲೆಯ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವಂತೆ ಜನರಲ್ಲಿ ಮತದಾನದ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಪಾಂಡ್ವೆ ರಾಹುಲ್ ತುಕಾರಾಮ, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಡಾ.ಬಿ.ವೈ ವಾಲ್ಮೀಕಿ, ರಾಯಚೂರು ತಹಶಿಲ್ದಾರ ಸುರೇಶ ವರ್ಮಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಂದ್ರ ಜಲ್ದಾರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಡಿ ಬಡಿಗೇರ, ರಾಯಚೂರು ತಾಪಂ ಇಒ ಮಾನಪ್ಪ ಕಟ್ಟಿಮನಿ, ನಗರಸಭೆ ಪೌರಾಯುಕ್ತ ಜಿ.ಎನ್ ಚಲಪತಿ, ಈರೇಶ ನಾಯಕ ಸೇರಿದಂತೆ ವಿವಿಧ ತಾಪಂಗಳ ಇಒಗಳು, ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.