ಸಾರಾಂಶ
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಮೀರಾಸಾಬಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯರೋಗದ ಕುರಿತು ಜಾಗೃತಿ ಮೂಡಿಸಲಾಯಿತು. ಆಡಳಿತ ವೈದ್ಯಾಧಿಕಾರಿ ಡಾ.ಹೆಚ್.ಸಿ.ಗುರುಪ್ರಸಾದ್ ಮಾತನಾಡಿ, ಕ್ಷಯರೋಗ ನಿರ್ಮೂಲನೆಗಾಗಿ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದೆ. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಕ್ಷಯರೋಗ ಪರೀಕ್ಷೆ ಹಾಗೂ ಚಿಕಿತ್ಸೆ ಉಚಿತವಾಗಿ ಲಭ್ಯವಿದೆ. ಕ್ಷಯರೋಗ ಪಾಸಿಟಿವ್ ರೋಗಿಗಳಿಗೆ ಸರ್ಕಾರದಿಂದ ಪ್ರತಿ ತಿಂಗಳು ರು.1000 ಪೋಷಣಾ ಸಹಾಯಧನ ನೀಡಲಾಗುತ್ತಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಜನರಲ್ಲಿ ಕ್ಷಯರೋಗದ ಬಗ್ಗೆ ಜಾಗೃತಿ ಮೂಡಿಸಲು ಬೃಹತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಮೂರು ವಾರಕ್ಕಿಂತ ಹೆಚ್ಚು ಕಾಲ ಕೆಮ್ಮು ಕಾಣಿಸಿಕೊಳ್ಳುವುದು, ರಾತ್ರಿ ವೇಳೆ ಜ್ವರ ಅಥವಾ ಬೆವರು, ತೂಕ ಇಳಿಯುವುದು ಮತ್ತು ಆಹಾರಾಸಕ್ತಿ ಕಡಿಮೆಯಾಗುವುದು, ಕಫದಲ್ಲಿ ರಕ್ತ ಕಾಣಿಸಿಕೊಳ್ಳುವುದು ಇವು ಕ್ಷಯ ರೋಗದ ಲಕ್ಷಣಗಳಾಗಿದ್ದು, ಈ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತವಾಗಿ ಕ್ಷಯರೋಗ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು.ಕ್ಷಯರೋಗವನ್ನು ಸಮಯಕ್ಕೆ ಪತ್ತೆಹಚ್ಚಿ ಸರಿಯಾದ ಚಿಕಿತ್ಸೆ ಪಡೆಯುವುದರಿಂದ ಸಂಪೂರ್ಣ ಗುಣಮುಖವಾಗಲು ಸಾಧ್ಯವಿದೆ. ಹೆಚ್ಚಿನ ಮಾಹಿತಿಗಾಗಿ 24x7 ಆರೋಗ್ಯ ಸಹಾಯವಾಣಿ 104 ಅಥವಾ ರಾಷ್ಟ್ರೀಯ ಕ್ಷಯರೋಗ ಸಹಾಯವಾಣಿ ಸಂಖ್ಯೆ 1800 116 666 ಅನ್ನು ಸಂಪರ್ಕಿಸಬಹುದು ಎಂದು ಹೇಳಿದರು. ಆರೋಗ್ಯ ನಿರೀಕ್ಷಣಾಧಿಕಾರಿ ನವೀನ್ ಕುಮಾರ್, ಫಾರ್ಮಸಿ ಅಧಿಕಾರಿ ಶಂಕರ್, ಆರೋಗ್ಯ ಸಿಬ್ಬಂದಿ ಪೂರ್ಣಸಾಗರ್, ಊರಿನ ಗ್ರಾಮಸ್ಥರು ಹಾಗೂ ಮುಖಂಡರು ಇದ್ದರು.
;Resize=(128,128))
;Resize=(128,128))
;Resize=(128,128))