ಸಾರಾಂಶ
ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಅಧಿಕಾರಿಗಳು ಹಿಂದೂ ಸಮಾಜಕ್ಕೆ ಅಪಮಾನ ಮಾಡುವ ಕೆಲಸ ಮಾಡುತ್ತಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬಳ್ಳಾರಿ: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಸರ್ಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ಹನುಮ ಧ್ವಜವನ್ನು ಕೆಳಗಿಳಿಸಿದ ಪ್ರಕರಣ ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಹನುಮ ಧ್ವಜವನ್ನು ತೆರವುಗೊಳಿಸುವ ಮೂಲಕ ಅಧಿಕಾರಿಗಳು ವಿನಾಕಾರಣ ಸಂಘರ್ಷಕ್ಕೆ ಹಾದಿ ಮಾಡಿಕೊಟ್ಟಿದ್ದಾರೆ. ಇದನ್ನು ಪ್ರಶ್ನಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿ, ಲಾಠಿ ಚಾರ್ಜ್ ಮಾಡಲಾಗಿದೆ. ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಅಧಿಕಾರಿಗಳು ಹಿಂದೂ ಸಮಾಜಕ್ಕೆ ಅಪಮಾನ ಮಾಡುವ ಕೆಲಸ ಮಾಡುತ್ತಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕ, ರಾಜ್ಯದಲ್ಲಿ ತುಘಲಕ್ ಸರ್ಕಾರ ಅಧಿಕಾರದಲ್ಲಿದೆ. ನಿರ್ದಿಷ್ಟ ಸಮುದಾಯದ ಓಲೈಕೆಗಾಗಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಹಿಂದೂ ಸಮಾಜವನ್ನು ಅವಮಾನಿಸುವ ಕೃತ್ಯಕ್ಕೆ ಕೈ ಹಾಕಲಾಗಿದೆ. ಸರ್ಕಾರ ಧೋರಣೆ ಹೀಗೆಯೇ ಮುಂದುವರಿದರೆ ಹೋರಾಟ ತೀವ್ರಗೊಳಿಸಲಾಗುವುದು. ಈ ಮೂಲಕ ಕಾಂಗ್ರೆಸ್ ಸರ್ಕಾರದ ನೀತಿಯ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.
ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಕೆಲ ಹೊತ್ತು ರಸ್ತೆ ತಡೆ ನಡೆಸಿ, ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಾಲಿಕೆ ಸದಸ್ಯ ಶ್ರೀನಿವಾಸ ಮೋತ್ಕರ್, ಗಣಪಾಲ್ ಐನಾಥರೆಡ್ಡಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಗುಣಾ ಸೇರಿದಂತೆ ಪಕ್ಷದ ಜಿಲ್ಲಾ ಸಮಿತಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.