ಸಾರಾಂಶ
ವಿಧಾನ ಸೌಧದಲ್ಲಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಆಯೋಜಿಸಿದ್ದ ಎಲ್ಲ ಅಕಾಡೆಮಿ ಹಾಗೂ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರ ಸಭೆಯಲ್ಲಿ ಭಾಗವಹಿಸಿದ್ದ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ವಿಧಾನ ಸೌಧದಲ್ಲಿ ಆಯೋಜಿಸಿದ್ದ ಎಲ್ಲ ಅಕಾಡೆಮಿ ಹಾಗೂ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರ ಸಭೆಯಲ್ಲಿ ಭಾಗವಹಿಸಿದ್ದ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಸಚಿವ ಶಿವರಾಜ್ ತಂಗಡಗಿ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ನೂತನವಾಗಿ ನೇಮಕಗೊಂಡ ಎಲ್ಲ 14 ಅಕಾಡೆಮಿ ಹಾಗೂ 4 ಪ್ರಾಧಿಕಾರದ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು.ತುಳು ಭಾಷೆಯನ್ನು ರಾಜ್ಯದ ಅಧಿಕೃತ ಆಡಳಿತ ಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಕಳೆದ ವಿಧಾನಸಭಾ ಅಧಿವೇಶನದಲ್ಲಿ ಒಂದಕ್ಕಿಂತ ಹೆಚ್ಚು ಅಧಿಕೃತ ಭಾಷೆಗಳನ್ನು ಹೊಂದಿರುವ ರಾಜ್ಯಗಳ ಮಾಹಿತಿಯನ್ನು ಪಡೆಯಲು ನಿರ್ಧರಿಸಲಾಗಿತ್ತು. ಈಗಾಗಲೇ ಒಂದೆರೆಡು ರಾಜ್ಯಗಳಿಂದ ಪೂರಕ ಮಾಹಿತಿಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಬಂದಿದ್ದು, ಮುಂದಿನ ಅಧಿವೇಶನದಲ್ಲಿ ಈ ವಿಚಾರವನ್ನು ಆದ್ಯತೆಯಯಲ್ಲಿ ಕೈಗೆತ್ತಿಕೊಳ್ಳಬೇಕೆಂದು ಸಚಿವರನ್ನು ತಾರಾನಾಥ್ ಗಟ್ಟಿ ಕಾಪಿಕಾಡ್ ಆಗ್ರಹಿಸಿದರು.
ರಾಜ್ಯ ಸರ್ಕಾರವು ಸಮಗ್ರ ಸಾಂಸ್ಕೃತಿಕ ನೀತಿಯನ್ನು ಜಾರಿಗೆ ತರಬೇಕೆಂದು ಅವರು ಇದೇ ವೇಳೆ ಒತ್ತಾಯಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.