ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರು
ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ 12 ಸಾವಿರ ರು. ಹಾಗೂ ರಾಜ್ಯ ಸರ್ಕಾರದ 1,500 ರು. ಸೇರಿದಂತೆ ಒಟ್ಟು 13,500 ರು.ಗಳ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ ನಿಗದಿ ಪಡಿಸಲಾಗಿದ್ದು, ಖರೀದಿ ಕೇಂದ್ರ ತೆರೆಯಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಕೇಂದ್ರ ಸರ್ಕಾರವು ರಾಜ್ಯದಿಂದ 69,250 ಮೆಟ್ರಿಕ್ ಟನ್ ಖರೀದಿಸಲು ಆದೇಶ ನೀಡಿದ್ದು, ಪ್ರತಿ ಎಕರೆಗೆ ಗರಿಷ್ಠ 6 ಕ್ವಿಂಟಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 15 ಕ್ವಿಂಟಲ್ ಕೊಬ್ಬರಿ ಖರೀದಿ ಪ್ರಮಾಣವನ್ನು ನಿಗದಿಪಡಿಸಲಾಗಿದೆ ಎಂದು ಸೂಚನೆ ನೀಡಿದರು.
ಕೊಬ್ಬರಿ ಖರೀದಿ ಪ್ರಕ್ರಿಯೆಯಲ್ಲಿ ರೈತರ ನೋಂದಣಿಯನ್ನು ಆಧಾರ್ ಸಂಖ್ಯೆ ಆಧಾರದ ಮೇಲೆ ಬಯೋಮೆಟ್ರಿಕ್ ಮೂಲಕವೇ ಮಾಡತಕ್ಕದ್ದು. ಬಯೋಮೆಟ್ರಿಕ್ ಸಾಧ್ಯವಾಗದಿದ್ದಲ್ಲಿ ಐರಿಸ್(ಕಣ್ಣಿನ ಸ್ಕ್ಯಾನ್) ಮೂಲಕ ನೋಂದಣಿ ಮಾಡಬೇಕು. ನೋಂದಣಿ ಕೇಂದ್ರದಲ್ಲಿ ರೈತರಿಗೆ ಅನುಕೂಲವಾಗುವಂತೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ನಿರ್ದೇಶನ ನೀಡಿದರು.ರೈತರಿಂದ ಯಾವುದೇ ರೀತಿಯ ದೂರು ಬಾರದಂತೆ ಹಾಗೂ ಗೊಂದಲ ಉಂಟಾಗದಂತೆ ಅಧಿಕಾರಿಗಳು ಕೊಬ್ಬರಿ ಖರೀದಿ ಪ್ರಕ್ರಿಯೆಯನ್ನು ನಡೆಸಬೇಕು ಎಂದು ಎಚ್ಚರಿಕೆ ನೀಡಿದರಲ್ಲದೆ, ಖರೀದಿ ಕೇಂದ್ರಗಳಲ್ಲಿ ರೈತರಿಂದ ಮಾತ್ರ ಉಂಡೆ ಕೊಬ್ಬರಿಯನ್ನು ಖರೀದಿಸಬೇಕು. ರೈತರ ಹೆಸರಿನಲ್ಲಿ ವರ್ತಕರು ತರುವ ಉಂಡೆ ಕೊಬ್ಬರಿಯನ್ನು ಖರೀದಿಸಬಾರದು. ಖರೀದಿ ಕೇಂದ್ರ ತೆರೆಯುವ ಮುನ್ನ ತಹಸೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳ ಹಂತದಲ್ಲಿ ಸಭೆ ನಡೆಸಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.
ಉಂಡೆ ಕೊಬ್ಬರಿಯನ್ನು ಖರೀದಿಸಲು ನಫೆಡ್ ಸಂಸ್ಥೆಯನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ಜಿಲ್ಲೆಯಲ್ಲಿ ಕೊಬ್ಬರಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ರಾಜ್ಯ ಸರ್ಕಾರದ ಖರೀದಿ ಸಂಸ್ಥೆಯನ್ನಾಗಿ ನೇಮಿಸಲಾಗಿದೆ. ಖರೀದಿ ಪ್ರಕ್ರಿಯೆಗೆ ನಿಯಮಾನುಸಾರ ಅವಶ್ಯವಿರುವ ಪೂರ್ವ ಸಿದ್ಧತೆಗಳನ್ನು ಖರೀದಿ ಸಂಸ್ಥೆಗಳು ಕೈಗೊಳ್ಳಬೇಕು ಎಂದು ಸೂಚಿಸಿದರು.ರಾಜ್ಯ ಕೃಷಿ ಮಾರಾಟ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕ ಸಿ. ಸಿದ್ಧುನಾಯಕ್ ಮಾತನಾಡಿ, 2022-23ನೇ ಸಾಲಿನಲ್ಲಿ ರಾಜ್ಯದಲ್ಲಿ ಒಟ್ಟು 645664 ಹೆಕ್ಟೇರ್ ಹಾಗೂ ಜಿಲ್ಲೆಯಲ್ಲಿ 224507 ಹೆಕ್ಟೇರ್ ವಿಸ್ತೀರ್ಣದಲ್ಲಿ ತೆಂಗನ್ನು ಬೆಳೆಯಲಾಗಿದೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಹುಳಿಯಾರು, ಗುಬ್ಬಿ, ಕರಡಾಳು, ಕೊನೆಹಳ್ಳಿ, ತಿಪಟೂರು, ಮಾಯಸಂದ್ರ, ತುರುವೇಕೆರೆಯಲ್ಲಿ ತಲಾ 2 ಹಾಗೂ ಚೇಳೂರು, ಕುಣಿಗಲ್, ಶಿರಾ, ಕೆ.ಬಿ. ಕ್ರಾಸ್, ತುಮಕೂರು, ಮುನಿಯೂರು, ದಬ್ಬೆಘಟ್ಟದಲ್ಲಿ ತಲಾ 1ರಂತೆ ಒಟ್ಟು 23 ಖರೀದಿ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.ಪ್ರಕ್ರಿಯೆ ಪ್ರಾರಂಭವಾದ ಮೇಲೆ ಖರೀದಿ ಕೇಂದ್ರಗಳ ಬಳಿ ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕ ರಾಜಣ್ಣ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ, ಜಂಟಿ ಕೃಷಿ ನಿರ್ದೇಶಕ ರಮೇಶ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.BOXಬೆಳೆ ತಂತ್ರಾಂಶ ಪರಿಶೀಲಿಸಲು ಮನವಿ
ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿಯನ್ನು ಶೀಘ್ರದಲ್ಲೇ ಪ್ರಾರಂಭಿಸಲು ಉದ್ದೇಶಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ರೈತರು ಬೆಳೆ ಸಮೀಕ್ಷೆಯಲ್ಲಿ ತಮ್ಮ ಜಮೀನಿನ ಸರ್ವೇ ನಂಬರ್‌ನಲ್ಲಿ ಯಾವ ಬೆಳೆ ನಮೂದಿಸಲಾಗಿದೆ ಎಂದು ಬೆಳೆ ದರ್ಶಕ್ ಮೊಬೈಲ್ ಆಪ್ ಬಳಸಿ ಅಥವಾ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ. ಬೆಳೆ ದರ್ಶಕ್ ತಂತ್ರಾಂಶದಲ್ಲಿ ತಿದ್ದುಪಡಿಗಳಿದ್ದಲ್ಲಿ ಸರಿಪಡಿಸಿಕೊಳ್ಳಲು ಅವಕಾಶವಿದ್ದು, ರೈತರು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.