ರಾಜಧಾನಿ ಬೆಂಗಳೂರಿನಲ್ಲಿ ಗಣೇಶ ಪ್ರತಿಷ್ಠಾಪನೆ ಅನುಮತಿಗೆ ಏಕಗವಾಕ್ಷಿ ಸಮಿತಿ: ತುಷಾರ್‌

| Published : Aug 22 2024, 12:59 AM IST / Updated: Aug 22 2024, 07:23 AM IST

ರಾಜಧಾನಿ ಬೆಂಗಳೂರಿನಲ್ಲಿ ಗಣೇಶ ಪ್ರತಿಷ್ಠಾಪನೆ ಅನುಮತಿಗೆ ಏಕಗವಾಕ್ಷಿ ಸಮಿತಿ: ತುಷಾರ್‌
Share this Article
  • FB
  • TW
  • Linkdin
  • Email

ಸಾರಾಂಶ

ರಾಜಧಾನಿ ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಸಾರ್ವಜನಿಕವಾಗಿ ಪ್ರತಿಷ್ಠಾಪಿಸುವ ಗಣೇಶೋತ್ಸವಕ್ಕೆ ಬಿಬಿಎಂಪಿಯ 63 ಉಪ ವಿಭಾಗದ ಕಚೇರಿಗಳಲ್ಲಿ ಏಕಗವಾಕ್ಷಿ ಪದ್ಧತಿಯಲ್ಲಿ ಒಂದೇ ಸೂರಿನಡಿ ಅನುಮತಿ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.

 ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಸಾರ್ವಜನಿಕವಾಗಿ ಪ್ರತಿಷ್ಠಾಪಿಸುವ ಗಣೇಶೋತ್ಸವಕ್ಕೆ ಬಿಬಿಎಂಪಿಯ 63 ಉಪ ವಿಭಾಗದ ಕಚೇರಿಗಳಲ್ಲಿ ಏಕಗವಾಕ್ಷಿ ಪದ್ಧತಿಯಲ್ಲಿ ಒಂದೇ ಸೂರಿನಡಿ ಅನುಮತಿ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದರು.

ಬಿಬಿಎಂಪಿ ಮತ್ತು ನಗರ ಪೊಲೀಸ್‌ ವಿಭಾಗದಿಂದ ಆಯೋಜಿಸಿದ್ದ ಶಾಂತಿಸಭೆಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುಗುವುದು. 63 ಏಕಗವಾಕ್ಷಿ ಕೇಂದ್ರದ ವಿಳಾಸ ಹಾಗೂ ನಾಲ್ಕೂ ಇಲಾಖೆಯ ನೋಡಲ್ ಅಧಿಕಾರಿಗಳ ವಿವರವನ್ನು ಶೀಘ್ರದಲ್ಲಿ ಬಿಡುಗಡೆ ಮಾಡುತ್ತೇವೆ ಎಂದರು.

ಪಿಒಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಲಾಗಿದ್ದು, ಪಿಒಪಿ ಮೂರ್ತಿಗಳನ್ನು ಖರೀದಿಸದೆ ಪರಿಸರ ಸ್ಹೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಲು ಮನವಿ ಮಾಡಿದ ಅವರು, ಬಿಬಿಎಂಪಿಯಿಂದ ಗಣೇಶ ಮೂರ್ತಿ ವಿಸರ್ಜನೆಗೆ ವಿವಿಧ ಕಲ್ಯಾಣಿಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಪ್ರಮುಖ ಸ್ಥಳ, ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್‌ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕಗಳ (ಮೊಬೈಲ್ ಟ್ಯಾಂಕ್) ವ್ಯವಸ್ಥೆ ಮಾಡಲಾಗುತ್ತದೆ. ಗಣೇಶ ಮೂರ್ತಿಗಳ ವಿಸರ್ಜನಾ ಸ್ಥಳದಲ್ಲಿ ಪೊಲೀಸ್ ಭದ್ರತೆ, ಬ್ಯಾರಿಕೇಡ್‌, ಸಿಸಿಟಿವಿ, ವಿದ್ಯುತ್ ದೀಪ, ನುರಿತ ಈಜುಗಾರರ ವ್ಯವಸ್ಥೆ, ಕ್ರೇನ್ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾತನಾಡಿ, ಶಾಂತಿ ಸೌಹಾರ್ದತೆಯಿಂದ ಗಣೇಶ ಹಬ್ಬ ಆಚರಿಸಬೇಕು. ಈಗಾಗಲೇ ಎಲ್ಲ ಕಡೆ ಶಾಂತಿ ಸಭೆಗಳನ್ನು ನಡೆಸಲಾಗಿದೆ. ಬಿಬಿಎಂಪಿ, ಪೊಲೀಸ್ ಇಲಾಖೆಯ ಸಲಹೆ, ಸೂಚನೆಗಳನ್ನು ತಪ್ಪದೆ ಪಾಲಿಸಬೇಕು. ಮೆರವಣಿಗೆ, ಮೆರವಣಿಗೆಯ ಮಾರ್ಗಕ್ಕೆ ಎಲ್ಲರೂ ಸಹಕಾರ ನೀಡಬೇಕು. ಸಂಚಾರ ದಟ್ಟಣೆಯಾಗದಂತೆ ಪೊಲೀಸ್ ಅಧಿಕಾರಿಗಳು ಸೂಕ್ರ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ರಸ್ತೆ ನಡುವೆ ಗಣೇಶ ಮೂರ್ತಿ ಪ್ರತಿಷ್ಠಾಪಿಸದೇ ಸೂಕ್ತ ಸ್ಥಳದಲ್ಲಿ ಪ್ರತಿಷ್ಠಾಪಿಸಬೇಕು. ಇದರಿಂದ ಜನರಿಗೆ ಅನುಕೂಲವಾಗಲಿದೆ. ಕಾನೂನು ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಧಕ್ಕೆ ಯಾಗದಂತೆ ಹಬ್ಬವನ್ನು ಆಚರಿಸಬೇಕು ಎಂದು‌ ಹೇಳಿದರು.

ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮಣ ಗುಪ್ತಾ, ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅನುಚೇತ್, ಬೆಸ್ಕಾಂ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ದಳ ಅಧಿಕಾರಿಗಳು ಹಾಗೂ ಗಣೇಶ ಪ್ರತಿಷ್ಠಾನದ ಆಯೋಜಕರು, ವಿವಿಧ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಆಯೋಜಕ ಸಲಹೆಗಳು

ಗಣೇಶ ಮೂರ್ತಿ ವಿಸರ್ಜನೆಗೆ ಸೂಕ್ತ ಸ್ಥಳ ನಿಗದಿಪಡಿಸಬೇಕು.

ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಬೇಕು.

ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಕ್ರಮವಹಿಸಬೇಕು

ಪಿಒಪಿ ಮೂರ್ತಿ ನಿಷೇಧ ಕಟ್ಟುನಿಟ್ಟಾಗಿ ಜಾರಿಗೊಳಿಸಿ

ಏಕ ಗವಾಕ್ಷಿ ಪದ್ದತಿ ಸರಿಯಾಗಿ ಜಾರಿಗೊಳಿಸಿ.

ಗಣೇಶ ಮೆರವಣಿಗೆ ವೇಳೆ ಸಂಚಾರ ದಟ್ಟಣೆಯಾಗದಂತೆ ಕ್ರಮವಹಿಸಿ

ಗಣೇಶ ಪ್ರತಿಷ್ಠಾಪನೆಯ ಸ್ಥಳದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಕೆಗೆ ಅನುಮತಿ ಕೊಡಿ

ಮೊಬೈಲ್ ಟ್ಯಾಂಕರ್‌ಗಳನ್ನು ಹೆಚ್ಚಾಗಿ ನಿಯೋಜಿಸಬೇಕು.