ಕುಶಾಲನಗರ: ಕುಶಾಲನಗರದಿಂದ ಕೆಲವು ದಿನಗಳ ಕಾಲ ನಾಪತ್ತೆಯಾಗಿದ್ದ ಮಹಿಳೆ ಮತ್ತು ಆಕೆಯ ಅಪ್ರಾಪ್ತ ಬಾಲಕನನ್ನು ಮತಾಂತರ ಮಾಡಿರುವ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕುಶಾಲನಗರ ಹಿಂದೂ ಹಿತರಕ್ಷಣಾ ಸಮಿತಿ ಪ್ರಮುಖರು ಆಗ್ರಹಿಸಿದ್ದಾರೆ.ಕುಶಾಲನಗರ ಪಟ್ಟಣ ಸುತ್ತಮುತ್ತ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಲವ್ ಜಿಹಾದ್ ಹೆಸರಿನಲ್ಲಿ ಮಹಿಳೆಯರನ್ನು ಮತಾಂತರ ಮಾಡುವ ಪ್ರಕರಣಗಳು ಬೆಳಕಿಗೆ ಬಂದಿದ್ದು ಈ ಹಿನ್ನೆಲೆಯಲ್ಲಿ ಕುಶಾಲನಗರ ಪೊಲೀಸರು ಇಬ್ಬರು ಯುವಕರನ್ನು ಪತ್ತೆ ಹಚ್ಚಿ ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ಗಂಭೀರತೆ ಪರಿಗಣಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಸಮಿತಿಯ ಪ್ರಮುಖ ಭರತ್ ಮಾಚಯ್ಯ ಆಗ್ರಹಿಸಿದ್ದಾರೆ.
ಕುಶಾಲನಗರ ಪತ್ರಕರ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು ಕುಶಾಲನಗರ ಸಮೀಪದ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ಆವರಣದ ಅಂಗಡಿ ಮಳಿಗೆಯಲ್ಲಿ ಕೆಲಸಕ್ಕಿದ್ದ ಮಹಿಳೆಯೊಬ್ಬಳನ್ನು ಮತಾಂತರ ಮಾಡಿರುವುದು ಹಾಗೂ ಆಕೆಯ ಅಪ್ರಾಪ್ತ ಬಾಲಕನನ್ನು ಶಸ್ತ್ರ ಚಿಕಿತ್ಸೆ ಮೂಲಕ ಸುನ್ನತ್ ಮಾಡಿರುವುದು ಕಾನೂನು ಬಾಹಿರ ಕೃತ್ಯವಾಗಿದೆ ಎಂದು ತಿಳಿಸಿದ್ದಾರೆ.
ಈ ಕೃತ್ಯದಲ್ಲಿ ಪಾಲ್ಗೊಂಡಿರುವ ಆರೋಪಿಯನ್ನು ತಕ್ಷಣ ಗಡಿಪಾರು ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.ಸಮಿತಿಯ ಪ್ರಮುಖರಾದ ಅಮೃತರಾಜ್ ಮಾತನಾಡಿ, ಪೊಲೀಸರು ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಕೇರಳ ಸಮಾಜದ ಪ್ರಮುಖರಾದ ವರದ ಮಾತನಾಡಿ ತಮ್ಮ ಸಮುದಾಯದ ಮಹಿಳೆ ಮತ್ತು ಅಪ್ರಾಪ್ತ ಬಾಲಕನಿಗೆ ಆಗಿರುವ ಅನ್ಯಾಯದ ಬಗ್ಗೆ ಖಂಡಿಸಿ ಈ ಬಗ್ಗೆ ಪೊಲೀಸರು ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಕುಶಾಲನಗರ ಗೌಡ ಸಮಾಜದ ಅಧ್ಯಕ್ಷರಾದ ಚಿಲ್ಲನ ಗಣಿ ಪ್ರಸಾದ್ ಇದ್ದರು.
ಇಬ್ಬರ ಬಂಧನ: ಕುಶಾಲನಗರದಲ್ಲಿ ನಡೆದ ಮತಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.ಆರೋಪಿಗಳಾದ ಕುಶಾಲನಗರ ಸಮೀಪದ ಕಾವೇರಿ ನಿಸರ್ಗಧಾಮ ಬಳಿಯ ವ್ಯಾಪಾರಿ ಸಲೀಂ ಮತ್ತು ಜಲೀಲ್ ಎಂಬುವರನ್ನು ಕುಶಾಲನಗರದ ನಿವಾಸಿ ರಾಜೀವ್ ಎಂಬುವವರ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ರಾಜೀವ್ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಸಂತ್ರಸ್ತ ಬಾಲಕನನ್ನು ಸಾಂತ್ವನ ಕೇಂದ್ರಕ್ಕೆ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಕುಶಾಲನಗರ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಪ್ರದೀಪ್ ಕುಮಾರ್ ತಿಳಿಸಿದ್ದಾರೆ.