ಸಾರಾಂಶ
ಬೆಂಗಳೂರು : ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಕಟ್ಟಡದ 13ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಶ್ಚಿಮ ಬಂಗಾಳ ರಾಜ್ಯದ ಅಮಿರ್ ಹುಸೇನ್ ಹಾಗೂ ಮುಮ್ತಾಜ್ ಆಲಿ ಮೊಲ್ಲಾ (28) ಮೃತ ದುರ್ದೈವಿಗಳು. ಖಾಸಗಿ ಕಂಪನಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಶುಕ್ರವಾರ ಮಧ್ಯಾಹ್ನ ಕೆಲಸದಲ್ಲಿ ಕಾರ್ಮಿಕರು ನಿರತರಾಗಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳ್ಳಂದೂರು ಸಮೀಪ ಖಾಸಗಿ ರಿಯಲ್ ಎಸ್ಟೇಟ್ ಸಂಸ್ಥೆಯು 13 ಅಂತಸ್ತಿನ ಅಪಾರ್ಟ್‌ಮೆಂಟ್ ಕಟ್ಟಡ ನಿರ್ಮಿಸುತ್ತಿದ್ದು, ಇಲ್ಲಿ ಕಳೆದ ನಾಲ್ಕು ತಿಂಗಳಿಂದ ಅಮಿರ್ ಹಾಗೂ ಮುಮ್ತಾಜ್ ಕೆಲಸ ಮಾಡುತ್ತಿದ್ದರು. ಅದೇ ಅಪಾರ್ಟ್‌ಮೆಂಟ್‌ನ ಆವರಣದ ತಾತ್ಕಾಲಿಕ ಶೆಡ್‌ನಲ್ಲಿ ಅವರು ನೆಲೆಸಿದ್ದರು. ಶುಕ್ರವಾರ ಕೆಲಸದಲ್ಲಿ ನಿರತರಾಗಿದ್ದ ವೇಳೆ 13ನೇ ಮಹಡಿಯ ಬಾಲ್ಕನಿಯ ಸಜ್ಜಾ ಕಟ್ಟುವಾಗ ಆಯ ತಪ್ಪಿ ಅಮಿರ್ ಹಾಗೂ ಮುಮ್ತಾಜ್ ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ರಿಯಲ್ ಎಸ್ಟೇಟ್ ಸಂಸ್ಥೆಯ ಆರು ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ವಿಚಾರಣೆ ಬಳಿಕ ಮುಂದಿನ ಕ್ರಮ ಜರುಗಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.