ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ
ಪೋಲಿಯೋ ಎಂಬುದು ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯ ಉಂಟು ಮಾಡುವ ಗಂಭೀರ ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ತಡೆಗಟ್ಟುವ ಅತ್ಯಂತ ಪರಿಣಾಮಕಾರಿ ಮಾರ್ಗ ಪೋಲಿಯೋ ಲಸಿಕೆ ಎಂದು ಜಿಲ್ಲಾಧಿಕಾರಿ ಜಿ. ಪ್ರಭು ತಿಳಿಸಿದರು.ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯಾದ್ಯಂತ ಆರಂಭವಾದ ಅಭಿಯಾನಕ್ಕೆ ನಗರದ ವಾಪಸಂದ್ರ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿ, ಪೋಲಿಯೋ ನಿರ್ಮೂಲನೆಗೆ ಸರ್ಕಾರ ನಿರಂತರವಾಗಿ ಕೈಗೊಳ್ಳುತ್ತಿರುವ ಲಸಿಕಾ ಅಭಿಯಾನದಲ್ಲಿ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದೆ. ಜಿಲ್ಲೆಯ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಕೇಂದ್ರ ಸರ್ಕಾರ ಜೂ. 28ರಂದು ರಾಷ್ಟ್ರೀಯ ಲಸಿಕಾ ದಿನ (ಪೋಲಿಯೋ ಭಾನುವಾರ)ವನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಬೂತ್‌ಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 5 ರವರೆಗೆ ಎರಡು ಹನಿ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು.ಈ ವರ್ಷದ ಅಭಿಯಾನಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 647 ಪೋಲಿಯೋ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 2,668 ವ್ಯಾಕ್ಸಿನೇಟರ್‌ಗಳು ಸೇವೆಯಲ್ಲಿ ತೊಡಗಿದ್ದಾರೆ. ಸುಮಾರು 1,23,545 ಮಕ್ಕಳಿಗೆ ಪೋಲಿಯೋ ಹನಿ ನೀಡುವ ಗುರಿ ಹೊಂದಲಾಗಿದೆ. ಕಾರ್ಯಕ್ರಮದ ಸುಸೂತ್ರ ಅನುಷ್ಠಾನ ಹಾಗೂ ಮೇಲ್ವಿಚಾರಣೆಗಾಗಿ 141 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಮನೆಮನೆಗೆ ಲಸಿಕೆ:
ಪೋಷಕರು ಅನಿವಾರ್ಯ ಕಾರಣಗಳಿಂದ ಬೂತ್‌ಗೆ ಮಕ್ಕಳನ್ನು ಕರೆತರಲು ಸಾಧ್ಯವಾಗದಿದ್ದರೆ, ಬೂತ್ ದಿನದ ನಂತರ ಗ್ರಾಮೀಣ ಪ್ರದೇಶಗಳಲ್ಲಿ ಎರಡು ದಿನ ಹಾಗೂ ನಗರ ಪ್ರದೇಶಗಳಲ್ಲಿ ಮೂರು ದಿನ ಮನೆ-ಮನೆಗೆ ತೆರಳಿ ಮಕ್ಕಳಿಗೆ ಪೋಲಿಯೋ ಹನಿ ನೀಡುವ ವ್ಯವಸ್ಥೆ ಮಾಡಲಾಗಿದೆ. ಜೂ. 29ರಿಂದ ಜುಲೈ 1ರವರೆಗೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಮನೆಗಳಿಗೆ ಭೇಟಿ ನೀಡಿ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಪ್ರಯಾಣದಲ್ಲಿರುವ ಅಥವಾ ಸ್ಥಳಾಂತರಗೊಳ್ಳುವ ಕುಟುಂಬಗಳ ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಪ್ರಮುಖ ಬಸ್ ನಿಲ್ದಾಣಗಳು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ 36 ಟ್ರಾನ್ಸಿಟ್ ಬೂತ್‌ಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳ ಮೂಲಕ ಸಂಚರಿಸುವ 0 ರಿಂದ 5 ವರ್ಷದ ಎಲ್ಲ ಮಕ್ಕಳಿಗೂ ಪೋಲಿಯೋ ಹನಿ ನೀಡಲಾಗುವುದು ಎಂದು ತಿಳಿಸಿದರು.ಈ ಹಿಂದೆ ಮಕ್ಕಳಿಗೆ ಪೋಲಿಯೋ ಹನಿ ಎಷ್ಟೇ ಬಾರಿ ನೀಡಿದ್ದರೂ, ಪ್ರತಿಯೊಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಸುತ್ತಿನಲ್ಲೂ ಮತ್ತೆ ಎರಡು ಹನಿ ನೀಡುವುದು ಅಗತ್ಯ. ಇದರಿಂದ ಮಕ್ಕಳ ರೋಗನಿರೋಧಕ ಶಕ್ತಿ ಮತ್ತಷ್ಟು ಬಲಗೊಳ್ಳುತ್ತದೆ. ಆದ್ದರಿಂದ ಯಾವುದೇ ಮಗು ಈ ಅವಕಾಶದಿಂದ ವಂಚಿತವಾಗಬಾರದು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಪ್ರತಿ ಬಾರಿ ಎರಡು ಹನಿಗಳು – ಪೋಲಿಯೋ ವಿರುದ್ಧ ನಿರಂತರ ಗೆಲುವು ಹಾಗೂ ಪೋಲಿಯೋ ಕೊನೆಗಾಣಿಸಿ – ಪೋಲಿಯೋ ರಹಿತ ವಿಶ್ವದ ಕನಸು ನನಸಾಗಲಿ " ಎಂಬ ಘೋಷವಾಕ್ಯಗಳೊಂದಿಗೆ ನಡೆಯುತ್ತಿರುವ ಈ ಅಭಿಯಾನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಸಾರ್ವಜನಿಕರು ಸಹಕರಿಸಬೇಕು. ತಮ್ಮ ಸಮೀಪದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಿ ಸಮೀಪದ ಪೋಲಿಯೋ ಬೂತ್‌ಗಳ ಮಾಹಿತಿ ಪಡೆದು, ತಮ್ಮ 0-5 ವರ್ಷದ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಡಾ. ವೈ. ನವೀನ್ ಭಟ್, ಡಿಎಚ್‌ಒ ಡಾ. ಮಹೇಶ್ ಕುಮಾರ್ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.
ಸಿಕೆಬಿ-1 ನಗರದ ವಾಪಸಂದ್ರ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾಧಿಕಾರಿ ಜಿ. ಪ್ರಭು ಚಾಲನೆ ನೀಡಿದರು.