ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋಜನೂರು ಗ್ರಾಮದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಆಯೋಜಿಸಿದ್ದ ಗಡಿಗೆ ಒಡೆಯುವ ಸಂಭ್ರಮ ಹಾಗೂ ಆರ್ಕೆಸ್ಟ್ರಾ ಕಾರ್ಯಕ್ರಮ ಮುಗಿಸಿಕೊಂಡು ಗೂಡ್ಸ್‌ ವಾಹನದಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಹರ್ತಿ ಗ್ರಾಮದ ಬಳಿ ನಡೆದಿದೆ.

ಹೋಳಿ ಹಬ್ಬದ ಸಂಭ್ರಮವನ್ನು ಕಣ್ಣು ತುಂಬಿಕೊಂಡು ವಾಪಸ್ ಬರುತ್ತಿದ್ದ ಈ ವಾಹನವು ಬುಧವಾರ ತಡರಾತ್ರಿ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಾಹನದಲ್ಲಿದ್ದ ಒಟ್ಟು 10 ಪ್ರಯಾಣಿಕರಲ್ಲಿ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಮೃತರನ್ನು ನಿಂಗಪ್ಪ ಹನುಮಂತ ಯಳವತ್ತಿ 36) ಹಾಗೂ ಮುತ್ತಪ್ಪ ಶಂಕ್ರಪ್ಪ ಸತ್ತಿಗೇರಿ(35) ಎಂದು ಗುರುತಿಸಲಾಗಿದ್ದು, ಇಬ್ಬರೂ ಗದಗ ತಾಲೂಕಿನ ಹಿರೇಕೊಪ್ಪ ಗ್ರಾಮದ ನಿವಾಸಿಗಳಾಗಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಉಳಿದ ಎಂಟು ಮಂದಿಯನ್ನು ಆ್ಯಂಬುಲೆನ್ಸ್ ಮೂಲಕ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಗದಗ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದು, ಅಪಘಾತಕ್ಕೆ ಅತಿವೇಗ ಅಥವಾ ನಿದ್ದೆ‌ ಮಂಪರಿನಲ್ಲಿ ಚಾಲನೆಯೇ ಕಾರಣ ಎಂದು ಶಂಕಿಸಲಾಗಿದೆ.

ಹೋಳಿ ಹಬ್ಬದ ಸಂಭ್ರಮದಲ್ಲಿ ಭಾಗವಹಿಸಿದ್ದ ಯುವಕರ ಈ ಅಕಾಲಿಕ ಮರಣದಿಂದ ಹಿರೇಕೊಪ್ಪ ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಕಾರು- ಬೈಕ್ ನಡುವೆ ಅಪಘಾತ: ಇಬ್ಬರು ಸಾವು


ಡಂಬಳ: ಕಾರು ಮತ್ತು ಬೈಕ್ ನಡುವೆ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೇವುಂಡಿ ಮತ್ತು ಬರದೂರ ಗ್ರಾಮದ ಮಧ್ಯೆ ನಡೆದಿದೆ.ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಜಂತ್ಲಿ‌ ಶಿರೂರ ಗ್ರಾಮದ ಶಿವಪ್ಪ ಸೋಮಪ್ಪ ಪಾಟಲಿ(27), ಹುಲಕೋಟಿಯ ರೇವಣಸಿದ್ದಯ್ಯ. ಲಕ್ಷ್ಮೇಶ್ವರಮಠ(35) ಮೃತಪಟ್ಟವರು. ಇನ್ನೊಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅಪಘಾತ ಸಂಭವಿಸಿದ ವೇಳೆ ಡೋಣಿ ಹಾಲೇಶ್ವರ ಮಠದ ಕಾರಿನಲ್ಲಿ ಶ್ರೀಗಳು ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಇರುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರಿಗೂ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಮೇವುಂಡಿ ಗ್ರಾಮದ ಸ್ಥಳೀಯರು ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡರು. ಈ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.