ಸಾರಾಂಶ
- ಅರಿವಿನ ಅಂಗಳದಲ್ಲಿ ಸರ್ಕಾರಿ ಯೋಜನೆಗಳ ಅರಿವು ಕಾರ್ಯಕ್ರಮ, ಪಂಚಾಯಿತಿ ಕಟ್ಟೆ ಜನರ ಸಮಸ್ಯೆ ಆಲಿಸಿ ಪರಿಹರಿಸಲು ಕ್ರಮ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಪಂನಿಂದ ಅರಿವಿನ ಅಂಗಳ ಹಾಗೂ ಪಂಚಾಯಿತಿ ಕಟ್ಟೆ ಎಂಬ ಎರಡು ವಿನೂತನ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ ಎಂದು ಜಿಪಂ ಸಿಇಒ ಎಚ್.ಎಸ್.ಕೀರ್ತನಾ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಿವಿನ ಅಂಗಳ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಅರಿವು ಮೂಡಿಸಲಾಗುವುದು. ಪಂಚಾಯಿತಿ ಕಟ್ಟೆ ಕಾರ್ಯಕ್ರಮದಲ್ಲಿ ಪಂಚಾಯಿತಿ ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಅಲ್ಲಿಯೇ ಅವುಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.ಗ್ರಾಮ ಪಂಚಾಯಿತಿಗಳಿಗೆ ಆಯ್ಕೆಯಾಗಿರುವ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಹಾಗೂ ಪಿಡಿಒಗಳಿಗೆ ಅರಿವಿನ ಅಂಗಳ ಕಾರ್ಯಕ್ರಮದಡಿ ತಾಲೂಕು ಮಟ್ಟದಲ್ಲಿ ಕಾರ್ಯಾಗಾರ ಆಯೋಜಿಸಲಾಗುವುದು. ಈ ಕಾರ್ಯಾಗಾರದಲ್ಲಿ ಆರ್ ಡಿಪಿಆರ್, ನರೇಗಾ, ಇ ಸ್ವತ್ತು, ಎನ್ ಆರ್ ಎಲ್ಎಂ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುವುದು. ಎಲ್ಲ ತಾಲೂಕುಗಳಲ್ಲಿಯೂ ಈ ಕಾರ್ಯಕ್ರಮ ಆಯೋಜಿಸಲಾಗುವುದು. ಪ್ರಾಯೋಗಿಕವಾಗಿ ಮೂಡಿಗೆರೆ ತಾಲೂಕಿನಲ್ಲಿ ಈ ಕಾರ್ಯಕ್ರಮ ನಡೆಸಿ ಅದರಲ್ಲಿ ಯಶಸ್ವಿಯಾಗಿದ್ದು, ಇದೀಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯೂ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಜನ ತಮ್ಮ ಗ್ರಾಮದ ಸಮಸ್ಯೆಗಳನ್ನು ಪರಿಹರಿಸುವಂತೆ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಅಲೆಯುವುದನ್ನು ತಪ್ಪಿಸುವ ಉದ್ದೇಶದಿಂದ ಪಂಚಾಯಿತಿ ಕಟ್ಟೆ ಕಾರ್ಯಕ್ರಮ ಆಯೋಜಿಸಲಾಗಿದೆ. ತಿಂಗಳಲ್ಲಿ ಒಂದು ದಿನ ಪ್ರತಿ ಪಂಚಾಯತಿ ಮಟ್ಟದಲ್ಲಿ ಪಂಚಾಯತಿ ಕಟ್ಟೆ ನಡೆಸಿ ಜನರ ಸಮಸ್ಯೆ ಆಲಿಸುವ ಜೊತೆಗೆ ಅಲ್ಲಿಯೇ ಅವುಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಪಂಚಾಯಿತಿ ಕಟ್ಟೆಯಲ್ಲಿ ಗ್ರಾಪಂ ಸಿಬ್ಬಂದಿ, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಯಶಸ್ಸಿಗಾಗಿ ಪ್ರತಿ ಗ್ರಾಪಂಗೂ ಒಬ್ಬರು ನೋಡಲ್ ಅಧಿಕಾರಿ ನೇಮಿಸಲಾಗುವುದು ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಡಿಸಿ ಮೀನಾ ನಾಗರಾಜ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು.--- ಬಾಕ್ಸ್ ----ಒಂಬತ್ತು ದಿನದಲ್ಲಿ 7.29 ಕೋಟಿ ತೆರಿಗೆ ವಸೂಲಿ
ಜಿಲ್ಲೆಯಲ್ಲಿ ತೆರಿಗೆ ವಸೂಲಿಗಾಗಿ ವಿಶೇಷ ಅಭಿಯಾನ ನಡೆಸಿ ಕೇವಲ ಒಂಬತ್ತು ದಿನಗಳಲ್ಲಿ 7.29 ಕೋಟಿ ರುಪಾಯಿ ತೆರಿಗೆ ಸಂಗ್ರಹಿಸಲಾಗಿದೆ ಎಂದು ಜಿಪಂ ಸಿಇಒ ಎಚ್.ಎಸ್. ಕೀರ್ತನಾ ತಿಳಿಸಿದರು.ಡಿ. 1ರಿಂದ 9ರವರೆಗೆ ಜಿಲ್ಲೆಯ ಜನತಾ ವಿಶೇಷ ಅಭಿಯಾನ ಕೈಗೊಳ್ಳಲಾಗಿತ್ತು. ಇದರಲ್ಲಿ ಕಡೂರು ತಾಲೂಕಿನಲ್ಲಿ ಅತಿ ಹೆಚ್ಚು ಅಂದರೆ 1.81 ಕೋಟಿ ರು. ತೆರಿಗೆ ಸಂಗ್ರಹವಾದರೆ, ಚಿಕ್ಕಮಗಳೂರು ತಾಲೂಕಿನಲ್ಲಿ 1.68 ಕೋಟಿ ರು. ತೆರಿಗೆ ಸಂಗ್ರಹವಾಗಿದೆ. ಅಜ್ಜಂಪುರ ತಾಲೂಕಿನ ಬುಕ್ಕಾಂಬುದಿ ಗ್ರಾಪಂ ವ್ಯಾಪ್ತಿಯಲ್ಲಿ ಬರೋಬ್ಬರಿ 20.25ಲಕ್ಷ ರು. ತೆರಿಗೆ ಸಂಗ್ರಹವಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಇದುವರೆಗೂ ಶೇ. 67ರಷ್ಟು ತೆರಿಗೆ ಸಂಗ್ರಹಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳನ್ನು ಹೊರತುಪಡಿಸಿದರೆ ಅತಿ ಹೆಚ್ಚು ತೆರಿಗೆ ಸಂಗ್ರಹ ಮಾಡಿದ ಜಿಲ್ಲೆಗಳ ಪಟ್ಟಿಯಲ್ಲಿ ಚಿಕ್ಕಮಗಳೂರು ಮೂರನೇ ಸ್ಥಾನದಲ್ಲಿದೆ ಎಂದು ವಿವರಿಸಿದರು.----------ನರೇಗಾದಲ್ಲಿ ಪ್ರಗತಿ
ಈ ಬಾರಿ ಮಳೆಗಾಲದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದರಿಂದ ಕೆಲ ತಿಂಗಳ ಕಾಲ ನರೇಗಾ ಯೋಜನೆಯಡಿ ನಿರೀಕ್ಷಿತ ಪ್ರಮಾಣದಲ್ಲಿ ಕಾಮಗಾರಿ ನಡೆಸಲು ಸಾಧ್ಯವಾಗಿರಲಿಲ್ಲ. ಮಳೆಗಾಲ ಮುಗಿಯುತ್ತಿದ್ದಂತೆ ಎನ್ಎಂಆರ್ ಅಭಿಯಾನ ನಡೆಸುವ ಮೂಲಕ ಕೇವಲ ಒಂದು ವಾರದಲ್ಲಿ 1.94 ಲಕ್ಷ ಮಾನವ ದಿನಗಳ ಕೆಲಸ ಮಾಡಲಾಗಿದೆ ಎಂದು ಜಿಪಂ ಸಿಇಒ ಎಚ್.ಎಸ್.ಕೀರ್ತನಾ ತಿಳಿಸಿದರು.ಮುಂದಿನ ದಿನಗಳಲ್ಲಿಯೂ ಇದೇ ರೀತಿ ಅಭಿಯಾನದ ಮೂಲಕ ನರೇಗಾ ಯೋಜನೆ ಅಡಿ ಹೆಚ್ಚಿನ ಕಾಮಗಾರಿ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
-ಪೋಟೋ ಫೈಲ್ ನೇಮ್ 6 ಕೆಸಿಕೆಎಂ 1