ಚುನಾವಣೆ ಸಿಬ್ಬಂದಿಗೆ ಎರಡು ಹಂತದ ತರಬೇತಿ

| Published : Apr 08 2024, 01:06 AM IST

ಸಾರಾಂಶ

ದೇವರಹಿಪ್ಪರಗಿ: ಮೇ.7ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ರವಿವಾರ ಪ್ರಥಮ ಹಂತದ ತರಬೇತಿ ನೀಡಲಾಯಿತು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಮೇ.7ರಂದು ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಅಧಿಕಾರಿ ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ರವಿವಾರ ಪ್ರಥಮ ಹಂತದ ತರಬೇತಿ ನೀಡಲಾಯಿತು.

ಪಟ್ಟಣದ ಪಟ್ಟಣದ ಸಿದ್ದೇಶ್ವರ ಸ್ವಾಮೀಜಿ ಪ್ರೌಢಶಾಲೆಯಲ್ಲಿ ಭಾನುವಾರ ಪಿ.ಆರ್.ಒ ಮತ್ತು ಎ.ಪಿ.ಆರ್.ಒ.ಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಹಾಯಕ ಚುನಾವಣಾಧಿಕಾರಿ ಪ್ರವೀಣ್ ಜೈನ್ ಅವರು, ಮೇ.7ರಂದು ನಡೆಯುವ ಚುನಾವಣೆ ದಿನದಂದು ಮತಗಟ್ಟೆಗಳಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಬಗ್ಗೆ ಮೊದಲ ಹಂತದ ತರಬೇತಿ ನೀಡಲಾಗುತ್ತಿದೆ. ಕ್ಷೇತ್ರದಲ್ಲಿ ಒಟ್ಟು 252 ಮತಗಟ್ಟೆಗಳಿದ್ದು, ಒಟ್ಟು-12 ಕೋಣೆಗಳಲ್ಲಿ ಪ್ರತಿ 40 ಜನ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು. ತರಬೇತಿಯಲ್ಲಿ ಒಟ್ಟು 477 ಅಧಿಕಾರಿಗಳು ಭಾಗವಹಿಸಿದ್ದರು. ಮತದಾನ ನಡೆಯುವ ವೇಳೆ ಮತದಾರರಿಗೆ ಯಾವುದೇ ಅಡೆತಡೆಯಾಗದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಪೂರ್ವಭಾವಿಯಾಗಿ ಎರಡು ಹಂತದ ತರಬೇತಿ ನೀಡಲಾಗುವುದು. ಮೊದಲ ಹಂತದಲ್ಲಿ ಪಾಲ್ಗೊಂಡಿರುವ ಅಧಿಕಾರಿಗಳು ಮತಯಂತ್ರಗಳ ಮಾದರಿ ಬಳಕೆ ಮಾಡುವ ವಿಧಾನ ಕುರಿತು ನುರಿತ ತಜ್ಞರಿಂದ ತರಬೇತಿ ನೀಡಲಾಯಿತು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ತರಬೇತಿಯ ನೋಡಲ್ ಅಧಿಕಾರಿಗಳು ಹಾಗೂ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ, ತಹಸೀಲ್ದಾರ್ ಪ್ರಕಾಶ ಸಿಂದಗಿ, ತಾಳಿಕೋಟಿ ತಹಸೀಲ್ದಾರ್ ಕೀರ್ತಿ ಚಾಲಕ ಸೇರಿದಂತೆ ಸೆಕ್ಟರ್ ಅಧಿಕಾರಿಗಳು, ಕಂದಾಯ ಇಲಾಖೆಯ ಶಿರಸ್ತೇದಾರ ಸುರೇಶ ಮ್ಯಾಗೇರಿ, ಮಾಸ್ಟರ್ ಟ್ರೇನರಗಳು, ಚುನಾವಣಾ ಕಾರ್ಯಕ್ಕೆ ಆಗಮಿಸಿದ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, ಮತಗಟ್ಟೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಇದ್ದರು.