ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ) ರದ್ದುಗೊಳಿಸುವುದರೊಂದಿಗೆ, ಧಾರ್ಮಿಕ ಅಲ್ಪಸಂಖ್ಯಾತರು ಹಾಗೂ ದುರ್ಬಲ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದ್ವೇಷಪೂರಿತ ಭಾಷಣಗಳು, ಕೋಮುವಾದಿ ಪ್ರಚೋದನೆ ಮತ್ತು ಹಿಂಸಾಚಾರದ ವಿರುದ್ಧ ಸಮಗ್ರ ರಕ್ಷಣಾ ನೀತಿಯನ್ನು ರೂಪಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯ ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಉಡುಪಿ: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ) ರದ್ದುಗೊಳಿಸುವುದರೊಂದಿಗೆ, ಧಾರ್ಮಿಕ ಅಲ್ಪಸಂಖ್ಯಾತರು ಹಾಗೂ ದುರ್ಬಲ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದ್ವೇಷಪೂರಿತ ಭಾಷಣಗಳು, ಕೋಮುವಾದಿ ಪ್ರಚೋದನೆ ಮತ್ತು ಹಿಂಸಾಚಾರದ ವಿರುದ್ಧ ಸಮಗ್ರ ರಕ್ಷಣಾ ನೀತಿಯನ್ನು ರೂಪಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯ ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 ಧಾರ್ಮಿಕ ಅಲ್ಪಸಂಖ್ಯಾತರ ಮೂಲಭೂತ ಹಕ್ಕುಗಳು, ಧಾರ್ಮಿಕ ಗುರುತು ಮತ್ತು ನಂಬಿಕೆಯ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮತಾಂತರ ನಿಷೇಧ ಕಾಯ್ದೆಯು ಧಾರ್ಮಿಕ ಅಲ್ಪಸಂಖ್ಯಾತರ ಅಸ್ತಿತ್ವವನ್ನೇ ಅಪರಾಧೀಕರಿಸುವ ಅಪಾಯ ಹೊಂದಿದ್ದು, ಸಂವಿಧಾನವು ಖಾತರಿಪಡಿಸಿರುವ ಆತ್ಮಸಾಕ್ಷಿಯ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುತ್ತದೆ. ವಿಶೇಷವಾಗಿ ಕ್ರೈಸ್ತ ಸಮುದಾಯ ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರಿಗೆ ಈ ಕಾಯ್ದೆಯ ಜಾರಿ ಮತ್ತು ಪರಿಣಾಮಗಳು ತಮ್ಮ ಧಾರ್ಮಿಕ ಆಚರಣೆಗಳನ್ನು ಸ್ವತಂತ್ರವಾಗಿ ಅಭಿವ್ಯಕ್ತಪಡಿಸುವ ಹಕ್ಕಿನ ಮೇಲೆ ನಿರ್ಬಂಧ ಹೇರುವಂತಿವೆ ಎಂದು ತಿಳಿಸಲಾಗಿದೆ

ದ್ವೇಷ ಭಾಷಣ ತಡೆಯಬೇಕು: ಇದೇ ವೇಳೆ, ಧಾರ್ಮಿಕ ಅಲ್ಪಸಂಖ್ಯಾತರು ಹಾಗೂ ಇತರ ದುರ್ಬಲ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದ್ವೇಷಪೂರಿತ ಭಾಷಣಗಳು, ಕೋಮುವಾದಿ ಪ್ರಚೋದನೆ ತಡೆಯಲು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಬಲಪಡಿಸಿ, ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಆಗ್ರಹಿಸಲಾಗಿದೆ.

ಈ ವೇಳೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಮೆಲ್ವಿನ್ ಆರಾನ್ಹಾ, ಕಾರ್ಯದರ್ಶಿ ಜುಲಿಯೆಟ್ ಡಿಸೋಜಾ, ಕೋಶಾಧಿಕಾರಿ ಗ್ಯಾರಿಫಿಲ್ಡ್ ಉರ್ಬಾನ್ ಲೂವಿಸ್, ನಿಯೋಜಿತ ಅಧ್ಯಕ್ಷ ಲೂಯಿಸ್ ಡಿಸೋಜಾ, ಮಾಜಿ ಅಧ್ಯಕ್ಷರುಗಳಾದ ವಲೇರಿಯನ್ ಫೆರ್ನಾಂಡಿಸ್, ಡಾ. ಜೆರಾಲ್ಡ್ ಪಿಂಟೊ, ಸಹಬಾಳ್ವೆ ಸಂಸ್ಥೆಯ ಪ್ರೋ. ಫಣಿರಾಜ್ ಉಪಸ್ಥಿತರಿದ್ದರು