ಉಡುಪಿ ಜಿಲ್ಲೆ: 269675 ಮಕ್ಕಳಿಗೆ ಜಂತುಹುಳು ನಿವಾರಣೆ ಮಾತ್ರ ವಿತರಣೆ

| Published : Dec 10 2024, 12:32 AM IST

ಸಾರಾಂಶ

ನಗರದ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಉದದ್ಘಾಟನೆ ನಡೆಯಿತು. ಈ ಕಾರ್ಯಕ್ರಮದಲ್ಲಿ 1-5 ವರ್ಷದ ಮಕ್ಕಳಿಗೆ ಅಂಗನವಾಡಿಗಳಲ್ಲಿ ಹಾಗೂ 6-19 ವರ್ಷದೊಳಗಿನವರಿಗೆ ಅವರವರ ಶಾಲೆ - ಕಾಲೇಜುಗಳಲ್ಲಿ ಮಾತ್ರೆಗಳನ್ನು ವಿತರಿಸಲಾಗುತ್ತದೆ.

ಕನ್ನಡಪ್ರಭ ವಾರ್ತೆ ಉಡುಪಿ

ಮಕ್ಕಳು ಪೌಷ್ಠಿಕ ಆಹಾರ ಸೇವಿಸಿದರೂ ಸಹ ಜಂತುಹುಳುಗಳಿಂದಾಗಿ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ, ಅವರ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಜಂತುಹುಳುಗಳಿಂದ ಮಕ್ಕಳ ಆರೋಗ್ಯ ಕಾಪಾಡುವುದಕ್ಕಾಗಿ 1-19 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಅಲ್ಬೆಂಡಾಝೋಲ್ ಮಾತ್ರೆಗಳನ್ನು ಉಚಿತವಾಗಿ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.

ಸೋಮವಾರ ನಗರದ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ 1-5 ವರ್ಷದ ಮಕ್ಕಳಿಗೆ ಅಂಗನವಾಡಿಗಳಲ್ಲಿ ಹಾಗೂ 6-19

ವರ್ಷದೊಳಗಿನವರಿಗೆ ಅವರವರ ಶಾಲೆ - ಕಾಲೇಜುಗಳಲ್ಲಿ ಮಾತ್ರೆಗಳನ್ನು ವಿತರಿಸಲಾಗುತ್ತದೆ. ಅಂಗನವಾಡಿಯಲ್ಲಿ ದಾಖಲಾದ, ಶಾಲೆಯಿಂದ ಹೊರಗುಳಿದ ಎಲ್ಲಾ ಮಕ್ಕಳಿಗೂ ಜಂತುಹುಳು ನಿವಾರಣಾ ಮಾತ್ರೆಗಳನ್ನು ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುವುದು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲೆಯಲ್ಲಿ ಒಟ್ಟು 26,9675 ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆ ನೀಡಲಾಗುವುದು, ಈ ಬಗ್ಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗಿದೆ ಎಂದರು.

ಜಂತು ಹುಳದ ನಿವಾರಣೆಗೆ ಮಕ್ಕಳು ಮಾತ್ರೆ ಸೇವನೆಯಿಂದ ಮಾತ್ರವಲ್ಲದೆ ಕಡ್ಡಾಯವಾಗಿ ಶೌಚಾಲಯಗಳನ್ನು ಉಪಯೋಗಿಸಿದ ನಂತರ ಕೈತೊಳೆಯುವುದು, ಪರಿಸರದ ಸ್ವಚ್ಛತೆ ಕಾಪಾಡುವುದು, ಮಲವಿಸರ್ಜನೆಗೆ ಶೌಚಾಲಯವನ್ನೇ ಬಳಸುವುದು ಸೇರಿದಂತೆ ಮತ್ತಿತರ ಸುರಕ್ಷತಾ ವಿಧಾನಗಳಿಂದ ಜಂತುಹುಳು ಬಾಧೆಯಿಂದ ರಕ್ಷಿಸಿಕೊಳ್ಳಬಹುದಾಗಿದೆ ಎಂದರು.

ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ್ ಹೆಗಡೆ ಅಧ್ಯಕ್ಷತೆ ವಹಿಸಿದ್ದರು ಮಕ್ಕಳಿಗೆ ಅಲ್ಬೆಂಡಾಝೋಲ್ ಮಾತ್ರೆಗಳನ್ನು ವಿತರಿಸಲಾಯಿತು.

ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮೈಸೂರು ವಿಭಾಗದ ವಿಭಾಗೀಯ ಆರೋಗ್ಯ ಮತ್ತು ಕು.ಕ ಸೇವೆಗಳ ಉಪನಿರ್ದೇಶಕಿ ಡಾ. ಮಲ್ಲಿಕಾ ಬಿ, ನಗರಸಭೆ ಸದಸ್ಯ ಹರೀಶ್ ಶೆಟ್ಟಿ, ವಿದ್ಯಾಂಗ ಉಪನಿರ್ದೇಶಕ ಗಣಪತಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ., ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತ ನಾಯಕ್, ಪ್ರಾಥಮಿಕ ಮುಖ್ಯೋಪಾಧ್ಯಾಯಿನಿ ಕುಸುಮಾ ಇದ್ದರು. ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್ ನಿರೂಪಿಸಿ, ಪ್ರೌಢಶಾಲಾ ಶಿಕ್ಷಕ ಗಣಪತಿ ಭಟ್ ವಂದಿಸಿದರು.