ಸಾರಾಂಶ
ಅಂತಾರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಅಂತಾರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 3.542 ಕೆ.ಜಿ. ಮಾದಕ ವಸ್ತುಗಳನ್ನು ಪಡುಬಿದ್ರಿಯ ಮೆ. ಆಯುಷ್ ಎನ್ವಿರೋಟೆಕ್ ಘಟಕದಲ್ಲಿ ನಾಶಪಡಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಪಿ ಹರಿರಾಮ್ ಶಂಕರ್, ಎಎಸ್ಪಿ ಹರ್ಷಾ ಪ್ರಿಯಂವದಾ, ಸಂಬಂಧಪಟ್ಟ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಉಪ ನಿರೀಕ್ಷಕರು ಹಾಜರಿದ್ದರು. ಮಣಿಪಾಲದ ಮಾಹೆ, ಕಮಲ ಎ ಬಾಳಿಗ ಚಾರಿಟೇಬಲ್ ಟ್ರಸ್ಟ್, ಡಾ. ಎ.ವಿ. ಬಾಳಿಗಾ ಆಸ್ಪತ್ರೆ, ಜಿಲ್ಲಾ ಶಿಕ್ಷಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಮಣಿಪಾಲ ಜಾಗೃತಿ ಹಮ್ಮಿಕೊಳ್ಳಲಾಗಿದ್ದು, ಎಸ್ಪಿ ಅವರು ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ನಿಟ್ಟೆ ವಿದ್ಯಾ ಸಂಸ್ಥೆಯ ಸಹಯೋಗದಲ್ಲಿ ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯದ ಬಗ್ಗೆ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಡ್ರಾಯಿಂಗ್ ಮತ್ತು ಪ್ರಬಂಧ ಸ್ಫರ್ದೇ ಏರ್ಪಡಿಸಲಾಗಿದ್ದು, ಸುಮಾರು 600 ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಅಧ್ಯಾಪಕರು ಮತ್ತು ಸಿಬ್ಬಂದಿ ಭಾಗವಹಿಸಿದರು. ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರು ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ಜಾಗೃತಿ ಬಗ್ಗೆ ಮಾಹಿತಿ ನೀಡಿದರು.ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಪೆ ಬೀಚ್‌ನಲ್ಲಿ ಮರಳು ಶಿಲ್ಪ ಕಲಾಕಾರ ರವಿ ಮತ್ತು ಲೊಕೇಶ್ ಅವರು ಮರಳಿನಲ್ಲಿ ಶಿಲ್ಪಕಲೆ ಅರಳಿಸಿ ‘ನಶಾ ಮುಕ್ತ ಉಡುಪಿ’ ಎನ್ನುವ ಘೋಷವಾಕ್ಯ ಬಿಡಿಸಿ ಮಾದಕ ದ್ರವ್ಯಗಳ ಬಗ್ಗೆ ಜನಜಾಗೃತಿ ಮೂಡಿಸಿದರು.
ಜಿಲ್ಲೆಯ ಇತರ ಪೊಲೀಸ್ ಠಾಣೆಗಳಲ್ಲಿ ವಿವಿಧ ಜಾಗೃತ್ತಿ ಕಾರ್ಯುಕ್ರಮಗಳನ್ನು ಹಮ್ಮಿಕೊಂಡು, ಅಯಾ ಠಾಣಾ ವ್ಯಾಪ್ತಿ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಲಾಗಿತ್ತು.