ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ

| Published : Dec 16 2024, 12:48 AM IST

ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು. ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಕೊಠಡಿಯನ್ನು ಯಶ್ಪಾಲ್‌ ಉದ್ಘಾಟಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಪ್ರೌಢಶಾಲಾ ವಿದ್ಯಾರ್ಥಿನಿಯರಿಂದ ‘ಜಾಂಬವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ವಿದ್ಯಾರ್ಥಿಗಳು ಎಲ್ಲಾ ರಂಗಗಳಲ್ಲಿ ತೊಡಗಿಸಿಕೊಂಡಾಗ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ, ಸಾಧನೆ ಸುಲಭವಾಗುತ್ತದೆ. ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ವಿದ್ಯಾರ್ಥಿನಿಯರು ಅಧ್ಯಯನದಲ್ಲಿ ಮೇಲುಗೈ ಸಾಧಿಸಿದಂತೆಯೇ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ತೋರುತ್ತಿರುವುದು ಶ್ಲಾಘನೀಯ ಎಂದರು.

ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಕೊಠಡಿಯನ್ನು ಯಶ್ಪಾಲ್‌ ಉದ್ಘಾಟಿಸಿದರು.

ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಪ್ರೌಢಾವಸ್ಥೆಯಲ್ಲಿಯೇ ವಿದ್ಯಾರ್ಥಿಗಳು ಪೋಷಕರೊಂದಿಗೆ ಚರ್ಚಿಸಿ ಮುಂದಿನ ಗುರಿಯನ್ನು ನಿರ್ಧರಿಸಿಕೊಂಡು ಅಧ್ಯಯನದಲ್ಲಿ ತೊಡಗಬೇಕು. ಮನಸ್ಸನ್ನು ವಿಚಲಿತಗೊಳಿಸುವ ಸಮೂಹ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳನ್ನು ಅಗತ್ಯವಿದ್ದಷ್ಟು ಮಾತ್ರ ಬಳಸಿಕೊಂಡು ಮುಂದುವರಿಯಬೇಕು. ಗುರಿ ಮುಟ್ಟುವವರೆಗೆ ಸ್ಪರ್ಧಾತ್ಮಕತೆ ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ನಗರಸಭಾ ಸದಸ್ಯೆ ರಶ್ಮಿ ಸಿ. ಭಟ್, ಪ.ಪೂ. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಮಣಿಪಾಲ ಸೆಲ್ಕೋ ಸಂಸ್ಥೆಯ ನಿರ್ದೇಶಕ ರಘುನಾಥ್ ಶೆಟ್ಟಿ ಅತಿಥಿಗಳಾಗಿದ್ದರು.

ಪ್ರಾಂಶುಪಾಲ ಜಗದೀಶ್ ಕುಮಾರ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ಯೋಗೀಶ್ ಕೋಟ್ಯಾನ್, ಸದಸ್ಯರಾದ ವಿಶ್ವನಾಥ ಬಾಯರಿ, ಶೇಖರ್ ಕೋಟ್ಯಾನ್, ರತ್ನಾಕರ್, ಎಸ್ ಡಿ ಎಂ ಸಿ ಯ ಅಧ್ಯಕ್ಷೆ, ನವ್ಯ ನಾಯಕ್, ತಾರಾ ದೇವಿ, ನಾಗೇಶ್ ಮತ್ತಿತರರಿದ್ದರು.

ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಪ್ರೌಢಶಾಲಾ ವಿದ್ಯಾರ್ಥಿನಿಯರಿಂದ ‘ಜಾಂಬವತಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ ನಡೆಯಿತು.

ಪ್ರಾಂಶುಪಾಲ ಜಗದೀಶ್ ಕುಮಾರ್ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯಸ್ಥೆ ಇಂದಿರಾ ಬಿ ಮತ್ತು ಹಿರಿಯ ಉಪನ್ಯಾಸಕಿ ಡಾ. ಸುಮಾ ವರದಿ ವಾಚಿಸಿದರು.‌ ಶಿಕ್ಷಕ ರಾಮಚಂದ್ರ ಭಟ್ ನಿರೂಪಿಸಿ, ವಿಜ್ಞಾನ ಶಿಕ್ಷಕಿ ಜ್ಯೋತಿ ವಂದಿಸಿದರು.