ರಜತಾದ್ರಿಯ ಜಿಪಂ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ನಡೆದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಅಮರ ಶಿಲ್ಪಿ ಜಕಣಾಚಾರಿ ಅವರ ಶಿಲ್ಪಕಲಾ ಕುಶಲತೆ ಭಾರತ ಸೇರಿದಂತೆ ವಿಶ್ವದ ವಿವಿಧ ಭಾಗಗಳಲ್ಲಿ ಇಂದಿಗೂ ಜೀವಂತವಾಗಿರುವುದು ಶಿಲ್ಪಕಲೆಗೆ ಅವರು ನೀಡಿರುವ ಕೊಡುಗೆಗೆ ಸಾಕ್ಷಿಯಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಗುರುವಾರ ರಜತಾದ್ರಿಯ ಜಿಪಂ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ನಡೆದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಅಮರಶಿಲ್ಪಿ ಜಕಣಾಚಾರಿ ಹೊಯ್ಸಳ ಮತ್ತು ಕಲ್ಯಾಣಿ ಚಾಲುಕ್ಯ ಶೈಲಿಯ ಅದ್ಭುತ ದೇವಾಲಯಗಳನ್ನು ನಿರ್ಮಿಸಿದ ಪೌರಾಣಿಕ ಶಿಲ್ಪಿ. ಬೇಲೂರು ಮತ್ತು ಹಳೇಬೀಡಿನ ಕೆತ್ತನೆಗಳಿಗೆ ಹೆಸರುವಾಸಿಯಾದ ಇವರು, ಭಾರತೀಯ ಕಲೆಯ ಸುವರ್ಣಯುಗಕ್ಕೆ ಕೊಡುಗೆ ನೀಡಿದ್ದಾರೆ. ಜಕಣಾಚಾರಿಯವರನ್ನು ಸರಿದೂಗಿಸುವಂತಹ ಶಿಲ್ಪಿ ಮತ್ತೊಬ್ಬರಿಲ್ಲ ಎಂಬುದಕ್ಕೆ ಅವರ ಕೆತ್ತನೆಗಳೇ ನಿದರ್ಶನವಾಗಿದೆ ಎಂದರು.ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಅಮರಶಿಲ್ಪ ಜಕಣಾಚಾರಿ ಅವರು ಕೇವಲ ಶಿಲ್ಪಿಯಲ್ಲ, ಬದಲಾಗಿ ಭಾರತೀಯ ವಾಸ್ತುಶಿಲ್ಪದ ಸಂಕೇತವಾಗಿದ್ದಾರೆ. ಯಾವುದೇ ಸಮುದಾಯದ ಮನೆ ಅಥವಾ ಕಟ್ಟಡಗಳ ನಿರ್ಮಾಣಕ್ಕೆ ವಿಶ್ವಕರ್ಮರ ಅವಶ್ಯಕತೆ ಇದೆ. ನಶಿಸಿಹೋಗುತ್ತಿರುವ ವಿಶ್ವಕರ್ಮರ ಕುಲಕಸುಬುಗಳನ್ನು ಮುಂದಿನ ಪೀಳಿಗೆ ಉಳಿಸಿ ಬೆಳೆಸಿ, ಮುಂದುವರಿಸಲು ಪ್ರಯತ್ನಿಸಬೇಕು ಎಂದರು.ಕೋಟೇಶ್ವರ ರಥಶಿಲ್ಪಿ ರಾಜಗೋಪಾಲ ಆಚಾರ್ಯ ಅವರು ಅಮರಶಿಲ್ಪಿ ಜಕಣಾಚಾರಿ ಬಗ್ಗೆ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಶಿಲ್ಪಿ ಕಾರ್ಕಳದ ಕೆ.ಸತೀಶ್ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ಜಿಪಂ ಸಿಇಓ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿ. ಪಂ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ದ.ಕ ಮತ್ತು ಉಡುಪಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಮೂಲ್ಕಿ, ಕುಂಜಿಬೆಟ್ಟು ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ನಾಗರಾಜ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ವಿಶ್ರಾಂತ ತಹಶೀಲ್ದಾರ್ ಮುರುಳಿಧರ್ ಆಚಾರ್ಯ ನಿರೂಪಿಸಿ, ವಂದಿಸಿದರು.