ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೊಂಡಿದ್ದರೂ, ಕಾಂಗ್ರೆಸ್ ಸರ್ಕಾರ ನಿಗಮಕ್ಕೆ ಚಿಕ್ಕಾಸು ಅನುದಾನ ನೀಡದೆ ಹಿಂದುಳಿದ ಸಮುದಾಯವನ್ನು ವಂಚಿಸಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.

ಉಡುಪಿ: ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೊಂಡಿದ್ದರೂ, ಕಾಂಗ್ರೆಸ್ ಸರ್ಕಾರ ನಿಗಮಕ್ಕೆ ಚಿಕ್ಕಾಸು ಅನುದಾನ ನೀಡದೆ ಹಿಂದುಳಿದ ಸಮುದಾಯವನ್ನು ವಂಚಿಸಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.

ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮನೆಮನೆಗೆ ತಲುಪಿಸುವ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವನ್ನು ಪ್ರಚುರಪಡಿಸುವ ಮೂಲಕ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಜಿಲ್ಲೆಯಾದ್ಯಂತ ಮಗದೊಮ್ಮೆ ಬಿಜೆಪಿ ವಿಜಯ ಪತಾಕೆಯನ್ನು ಬಾನೆತ್ತರಕ್ಕೇರಿಸಬೇಕು ಎಂದು ಕರೆ ನೀಡಿದರು.

ಪದಗ್ರಹಣ ನೆರವೇರಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕಾರ್ಯಕರ್ತರು ‘ಸರ್ವ ಸ್ಪರ್ಶಿ ಸರ್ವ ವ್ಯಾಪಿ’ ತತ್ವದೊಂದಿಗೆ ನೂತನ ಪದಾಧಿಕಾರಿಗಳು ತಮ್ಮ ಜವಾಬ್ದಾರಿಯನ್ನರಿತು ಮಂಡಲ ಮಟ್ಟದಲ್ಲಿಯೂ ಮೋರ್ಚಾದ ತಂಡಗಳನ್ನು ಸಕ್ರಿಯಗೊಳಿಸಿ ಮುಂದಿನ ಎಲ್ಲ ಚುನಾವಣೆಗಳಿಗೆ ಸನ್ನದ್ಧರಾಗುವ ಮೂಲಕ ಪಕ್ಷದ ಅಭ್ಯರ್ಥಿಗಳ ಭರ್ಜರಿ ಗೆಲುವಿಗೆ ಅತ್ಯಮೂಲ್ಯ ಕೊಡುಗೆ ನೀಡಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪಕ್ಷದ ಸಂಘಟನಾತ್ಮಕ ವಿಚಾರಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಶ್ಮಾ ಉದಯ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಐರೋಡಿ ವಿಠಲ ಪೂಜಾರಿ, ಮೋರ್ಚಾ ಪ್ರಭಾರಿ ಉಮೇಶ್ ನಾಯ್ಕ್ ಉಪಸ್ಥಿತರಿದ್ದರು.

ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಪಂದುಬೆಟ್ಟು ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರನ್ನು ಪರಿಚಯಿಸಿದರು. ಪ್ರಧಾನ ಕಾರ್ಯದರ್ಶಿ ರತ್ನಾಕರ ಇಂದ್ರಾಳಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಅನಿಲ್ ಕುಮಾರ್ ವಂದಿಸಿದರು.