ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯ ವತಿಯಿಂದ ಸರಕಾರದ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತಂತೆ ಕಲಾಜಾಥಾ ಪ್ರಚಾರ ಆಂದೋಲನ ವಾಹನಕ್ಕೆ ಚಾಲನೆ ನೀಡಲಾಯಿತು.
ಉಡುಪಿ: ಸರ್ಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ತಲುಪಿದಾಗ ಮಾತ್ರ ಅವು ಫಲಪ್ರದವಾಗುತ್ತವೆ. ಆದ್ದರಿಂದ ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಗ್ಯಾರಂಟಿ ಯೋಜನೆಗಳು ರಾಜ್ಯದ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ಬೆಂಬಲ ನೀಡಿದೆ ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.
ಬುಧವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆಯ ವತಿಯಿಂದ ಸರಕಾರದ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತಂತೆ ಕಲಾಜಾಥಾ ಪ್ರಚಾರ ಆಂದೋಲನ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ 7 ಕೋಟಿ ಜನರ ಬದುಕಿಗೆ ಆಸರೆಯಾಗಿ, ಸ್ವಾವಲಂಭಿ ಜೀವನ ನಡೆಸುವಂತಾಗಿದೆ. ಈ ಯೋಜನೆಯು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪುವುದಕ್ಕಾಗಿ ಈ ಕಲಾಜಾಥಾ ಪ್ರಚಾರ ಆಯೋಜಿಸಲಾಗಿದೆ ಎಂದರು.ಇದೇ ಸಂದರ್ಭದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ,ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಶ್ರೀ ಮಾರುತಿ ತೊಗಲು ಗೊಂಬೆ ಕಲಾ ತಂಡದವರು ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದತೆ ತೊಗಲು ಗೊಂಬೆಯಾಟ ಪ್ರದರ್ಶಿಸಿದರು.
ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಡಾ.ಸುನೀತಾ ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷ ಪ್ರಶಾಂತ್ ಜತ್ತನ್, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ರಮೇಶ್ ಕಾಂಚನ್, ಸದಸ್ಯರಾದ ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ, ವಕ್ತಾರ ಭಾಸ್ಕರ ರಾವ್ ಕಿದಿಯೂರು, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ, ಜಿ. ಶಂಕರ್ ಕಾಲೇಜಿನ ಪ್ರಾಂಶುಪಾಲ ಡಾ. ಸೋಜನ್ ಕೆ.ಜಿ., ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕಿ ಡಾ. ನಿಕೇತನ, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಕಲಾಜಾಥಾ ಅಂಗವಾಗಿ ಜಿಲ್ಲೆಯ ವಿವಿಧ ಭಾಗಗಳಿಗೆ ಪ್ರಚಾರ ವಾಹನ ಹಾಗೂ ಕ್ಷೇತ್ರ ಪ್ರಚಾರ ಕಲಾ ತಂಡಗಳು ತೆರಳಿ ಗ್ಯಾರಂಟಿ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಿದೆ.