ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಆಯೋಜನೆಯಲ್ಲಿ ರಾಜ್ಯಮಟ್ಟದ ‘ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ’ 30ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸ್ಕೌಟ್ಸ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ. ಆರ್ ಸಿಂಧ್ಯಾ ಸಭಾಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 1200 ಪ್ರತಿಭಾನ್ವಿತ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ಬಾರಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು ಎಂದರು. ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತ ಡಾ. ಮೋಹನ್ ಆಳ್ಳ, ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ರಾಜ್ಯದ ವಿಧಾನ ಸಭೆಯ ಸ್ಪೀಕರ್ ಯುಟಿ ಖಾದರ್, ಶಾಸಕರಾದ ಯಶ್ಪಾಲ್ ಸುವರ್ಣ, ಕಾಪು ಗುರ್ಮ ಸುರೇಶ್ ಶೆಟ್ಟಿ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಆಯುಕ್ತರಾದ ಎಂ. ಪ್ರಭಾಕರ್ ಭಟ್, ಉಡುಪಿ ಜಿಲ್ಲಾ ಸೌಟ್ ಆಯುಕ್ತ ಜನಾರ್ದನ್ ಕೊಡವೂರು, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನಾ ಶೇಖರ್, ಜಿಲ್ಲಾ ಕಾರ್ಯದರ್ಶಿ ಆನಂದ ಅಡಿಗ ಉಪಸ್ಥಿತರಿದ್ದರು.