‘ಆಳ್ವಾಸ್ ನುಡಿಸಿರಿ - ವಿರಾಸತ್’ ಉಡುಪಿ ಘಟಕದ ಆಶ್ರಯದಲ್ಲಿ ಉಡುಪಿಯ ಶ್ರೀ ಕೃಷ್ಣ ಮಠ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದ ಶ್ರೀ ವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ಶನಿವಾರ ಸಂಜೆ 5.45 ಕ್ಕೆ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಮೇಳೈಸಲಿದೆ.
ಮೂಡುಬಿದೆರೆಯ ಆಳ್ವಾಸ್ ನುಡಿಸಿರಿ ವಿರಾಸತ್ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮ
ಉಡುಪಿ: ಮೂಡುಬಿದಿರೆಯ ಡಾ. ಮೋಹನ್ ಆಳ್ವಾ ಅವರ ಪರಿಕಲ್ಪನೆಯ ವೈಶಿಷ್ಟ್ಯಪೂರ್ಣ ‘ಆಳ್ವಾಸ್ ನುಡಿಸಿರಿ - ವಿರಾಸತ್’ ಉಡುಪಿ ಘಟಕದ ಆಶ್ರಯದಲ್ಲಿ ಉಡುಪಿಯ ಶ್ರೀ ಕೃಷ್ಣ ಮಠ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದ ಶ್ರೀ ವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ಶನಿವಾರ ಸಂಜೆ 5.45 ಕ್ಕೆ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಮೇಳೈಸಲಿದೆ.ಈ ಬಗ್ಗೆ ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಮುರುಳಿ ಕಡೆಕಾರ್ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿದರು.ಕಾರ್ಯಕ್ರಮದ ಆರಂಭದಲ್ಲಿ 45 ನಿಮಿಷಗಳ ಕಾಲ ನಡೆಯುವ ಸಭಾ ಕಾರ್ಯಕ್ರಮವನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದು, ಉಡುಪಿ ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜದ ಎಲ್ಲಾ ಸ್ತರಗಳ ಪ್ರಮುಖರು ಸಭಾ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿಯಲ್ಲಿ ಹಾಜರಿರಲಿದ್ದಾರೆ. ಈ ಸಾಂಸ್ಕೃತಿಕ ಕಾರ‍್ಯಕ್ರಮವನ್ನು ಕೀರ್ತಿಶೇಷ ಡಾ. ವಿ.ಎಸ್. ಆಚಾರ್ಯ ಅವರಿಗೆ ಅರ್ಪಿಸಲಾಗಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಭಾರತೀಯ ಕಲಾಪ್ರಕಾರಗಳಾದ ಯೋಗದೀಪಿಕಾ, ಶಾಸ್ತ್ರೀಯ ನೃತ್ಯ - ಅಷ್ಟಲಕ್ಷ್ಮಿ, ಬಡಗುತಿಟ್ಟು ಯಕ್ಷಗಾನ - ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡಾನ್ಸ್, ಮಲ್ಲಕಂಬ - ಕಸರತ್ತು, ಡೊಳ್ಳು ಕುಣಿತ, ಕಥಕ್ ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ - ಹಿರಣ್ಯಾಕ್ಷ ವಧೆ, ಬೊಂಬೆ ವಿನೋದಾವಳಿಯ ಪ್ರದರ್ಶನ ನಡೆಯಲಿದೆ. ಆರಂಭದಲ್ಲಿ ಆಳ್ವಾಸ್ ವಿದ್ಯಾರ್ಥಿಗಳಿಂದ ಸಿಂಗಾರಿ ಮೇಳ ಫ್ಯೂ಼ಷನ್ ನಡೆಯಲಿದೆ. ಬೊಂಬೆ ವಿನೋದಾವಳಿಯೊಂದಿಗೆ ಆಕರ್ಷಕ ಸಿಡಿಮದ್ದಿನ ಪ್ರದರ್ಶನವಿರಲಿದೆ. ಪ್ರೇಕ್ಷಕರಿಗಾಗಿ 15000ಕ್ಕೂ ಅಧಿಕ ಆಸನದ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರಲಿದೆ. ಸಾಂಸ್ಕೃತಿಕ ಕಾರ್ಯಕ್ರಮ ಕ್ಲಪ್ತ ಸಮಯಕ್ಕೆ ಆರಂಭವಾಗಿ ನಿಗದಿತ ಸಮಯಕ್ಕೆ ಮುಕ್ತಾಯಗೊಳ್ಳಲಿದೆ ಎಂದರು.ಪತ್ರಿಕಾಗೋಷ್ಟಿಯಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಗೌರವಾಧ್ಯಕ್ಷ ವಿ. ಜಿ. ಶೆಟ್ಟಿ, ಉಡುಪಿ ಘಟಕದ ಕಾರ್ಯದರ್ಶಿ ಭುವನಪ್ರಸಾದ ಹೆಗ್ಡೆ, ಕಾರ್ಯಕ್ರಮ ಸಂಘಟಕ ನಿದೀಶ್ ತೋಳಾರ್, ಅಂಬರೀಷ್, ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ, ಘಟಕದ ಕಾರ್ಯಕಾರಿಣಿ ಸದಸ್ಯ ಸುಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.