ಸಾರಾಂಶ
ಕಾಪು ತೀರದಲ್ಲಿ ನವದುರ್ಗೆ, ಶಾರದೆ ವಿಸರ್ಜನೆ । ಗಂಗಾರತಿ: ನಾಡೋಜ ಡಾ. ಜಿ ಶಂಕರ್ ಮಾಹಿತಿ
ಕನ್ನಡಪ್ರಭ ವಾರ್ತೆ ಉಚ್ಚಿಲದ.ಕ. ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 4ನೇ ವರ್ಷದ ‘ಉಡುಪಿ-ಉಚ್ಚಿಲ ದಸರಾ’ ಸೆ. 22ರಿಂದ ಅ. 2ರವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಗೌರವ ಸಲಹೆಗಾರ ನಾಡೋಜಾ ಡಾ. ಜಿ ಶಂಕರ್ ತಿಳಿಸಿದ್ದಾರೆ.ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯ ಲಕ್ಷಾಂತರ ಜನರು ಶ್ರದ್ಧಾಭಕ್ತಿಯ ಕೇಂದ್ರವಾಗಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಆಕರ್ಷಕ ಮಂಟಪದಲ್ಲಿ ನವದುರ್ಗೆಯರು ಹಾಗೂ ಶ್ರೀ ಶಾರದಾ ಮಾತೆಯ ವಿಗ್ರಹಗಳನ್ನು ಪ್ರತಿಷ್ಠಾಪಿಸಿ 11 ದಿನಗಳ ಕಾಲ ಶಾಸ್ತ್ರೋಕ್ತವಾಗಿ ಪೂಜಿಸಲಾಗುವುದು ಎಂದರು. 22ರಂದು ಬೆಳಗ್ಗೆ 9 ಕ್ಕೆ ನವದುರ್ಗೆಯರ ಮತ್ತು ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆ ನಡೆಯಲಿದೆ. ಪ್ರತಿ ದಿನ ಬೆಳಿಗ್ಗೆ ಚಂಡಿಕಾಹೋಮ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಭಕ್ತರಿಗೆ ಪ್ರಸಾದ ವಿತರಣೆ, ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ಪ್ರತಿದಿನ ಭಜನಾ ಕಾರ್ಯಕ್ರಮ, ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ ಕಲ್ಪೋಕ್ತ ಪೂಜೆ, ಅ.2 ರಂದು ವಿಜಯದಶಮಿಯಂದು ಸಾಮೂಹಿಕ ಮಹಾಚಂಡಿಕಾಯಾಗ ಹಾಗೂ ಮಹಾಪೂರ್ಣಾಹುತಿ ನಡೆಯಲಿದೆ ಎಂದರು.
ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ರಂಗೋಲಿ, ಚಿತ್ರಕಲಾ ಸ್ಪರ್ಧೆ, ಮಹಿಳೆಯರ ಹುಲಿಕುಣಿತ ಸ್ಪರ್ಧೆ, ಪುರುಷರ ದೇಹದಾಢ್ಯ ಸ್ಪರ್ಧೆ, ನೃತ್ಯ ಸ್ಪರ್ಧೆ, ನಾಟಕ, ಸುಗಮ ಸಂಗೀತ, ಯಕ್ಷಗಾನಗಳು ಜರಗಲಿದೆ.ಭಕ್ತರಿಗೆ ಸುಲಭವಾಗಿ ದೇವರದರ್ಶನ ಪಡೆಯಲು ಮತ್ತು ಮಹಾ ಅನ್ನಸಂತರ್ಪಣೆಗೆ ಸಹಕರಿಸಲು ದಿನಂಪ್ರತಿ 1,500 ಸ್ವಯಂಸೇವಕರು, ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಹಿಳಾ ತಂಡಗಳು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸಹಕರಿಸಲಿದ್ದಾರೆ ಎಂದರು.ಭವ್ಯ ಶೋಭಾಯಾತ್ರೆ:
ಅ.2 ರಂದು ಮಧ್ಯಾಹ್ನ ಘಂಟೆ 2.30ಕ್ಕೆ ವಿಸರ್ಜನಾಪೂಜೆ, ಶ್ರೀ ಕ್ಷೇತ್ರದಿಂದ ಸಂಜೆ ಗಂಟೆ 4.30 ಕ್ಕೆ ಶೋಭಾಯಾತ್ರೆಯು ಹೊರಟು ಎರ್ಮಾಳಿನ ತನಕ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸಾಗಿ, ಅಲ್ಲಿಂದ ತಿರುಗಿ ರಾಷ್ಟ್ರೀಯ ಹೆದ್ದಾರಿಯ ಮೂಲಕ ಉಚ್ಚಿಲ- ಮೂಳೂರು, ಕೊಪ್ಪಲಂಗಡಿಯವರೆಗೆ ಸಾಗಿ, ಅಲ್ಲಿಂದ ಕಾಪು ಸಮುದ್ರ ತೀರದ ದೀಪಸ್ತಂಭ ಬಳಿ ವಿಸರ್ಜನೆ ಮಾಡಲಾಗುವುದು. ಇಲ್ಲಿ ಕಾಶಿಯ ಅರ್ಚಕರಿಂದ ಗಂಗಾರತಿ ಹಾಗೂ ಡ್ರೋನ್ ಮೂಲಕ ಪುಷ್ಪಾರ್ಚನೆಗೂ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಸುವರ್ಣ ಬೆಳ್ಳಂಪಳ್ಳಿ, ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಕಾರ್ಯದರ್ಶಿ ಶರಣ್‌ಕುಮಾರ್ ಮಟ್ಟು, ಕ್ಷೇತ್ರಾಡಳಿಯ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಉಚ್ಚಿಲ ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಉಷಾ ರಾಣಿ ಮಂಗಳೂರು, ಮನೋಜ್ ಕಾಂಚನ್, ಸುಜಿತ್ ಸಾಲ್ಯಾನ್, ಸತೀಶ್ ಕಾಂಚನ್, ಶಿವಕುಮಾರ್ ಮೆಂಡನ್, ಸುಗುಣ ಕರ್ಕೇರ ಮತ್ತು ದೇವಳದ ಪ್ರಧಾನ ವ್ಯವಸ್ಥಾಪಕ ಸತೀಶ್ ಅಮೀನ್ ಪಡುಕರೆ ಇದ್ದರು.