ಸಾರಾಂಶ
ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಸ್ನಾತಕ ವಿದ್ಯಾರ್ಥಿ ಡಾ. ವಿನಾಯಕ ಜೋಯಿಸ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿ ಎಂದು ಚಿನ್ನದ ಪದಕವನ್ನು ಪ್ರದಾನ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ಉದ್ಯಾವರ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಭಾವಪ್ರಕಾಶ ಸಭಾಂಗಣದಲ್ಲಿ ಶನಿವಾರ ‘ವಿಶಿಖಾನುಪ್ರವೇಶ’ ಪದವಿ ಪ್ರದಾನ ಸಮಾರಂಭ ನಡೆಯಿತು.ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಸಮಾರಂಭದ ಅದ್ಯಕ್ಷತೆ ವಹಿಸಿ, ನೂತನವಾಗಿ ಪದವಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಆಯುರ್ವೇದ ಜ್ಞಾನ, ಕೌಶಲ್ಯ ಮತ್ತು ಮಾನವೀಯ ಮೌಲ್ಯಗಳೊಂದಿಗೆ ತಮ್ಮ ವೃತ್ತಿಯಲ್ಲಿ ತೊಡಗುವಂತೆ ಸಂದೇಶ ನೀಡಿದರು.ಮುಖ್ಯ ಅತಿಥಿ ಧಾರವಾಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಮಾತನಾಡಿ, ಕಠಿಣ ಪರಿಶ್ರಮ, ಧೈರ್ಯ, ಕಾಳಜಿ ಮತ್ತು ಸಮರ್ಪಣೆಯಿಂದ ಜೀವನದಲ್ಲಿ ಎಲ್ಲವನ್ನೂ ಸಾಧಿಸಬಹುದು ಎಂದು ವಿದ್ಯಾರ್ಥಿಗಳನ್ನು ಕಿವಿಮಾತು ಹೇಳಿದರು.ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಸ್ನಾತಕ ವಿದ್ಯಾರ್ಥಿ ಡಾ. ವಿನಾಯಕ ಜೋಯಿಸ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿ ಎಂದು ಚಿನ್ನದ ಪದಕವನ್ನು ಪ್ರದಾನ ಮಾಡಲಾಯಿತು.ಕಾಲೇಜಿನ ಆಡಳಿತ ಮುಖ್ಯಾಧಿಕಾರಿ ಡಾ. ವೀರಕುಮಾರ ಕೆ. ಅವರು ೭೬ ಸ್ನಾತಕ ಮತ್ತು ೪೮ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾಲೇಜಿನ ಸ್ನಾತಕೋತ್ತರ ವಿಭಾಗದ ಡೀನ್ ಡಾ. ಅಶೋಕ್ ಕುಮಾರ್ ಬಿ.ಎನ್., ಸ್ನಾತಕ ವಿಭಾಗದ ಡೀನ್ ಡಾ. ರಜನೀಶ್ ವಿ. ಗಿರಿ, ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಡಾ. ಶ್ರೀಲತಾ ಕಾಮತ್ ಉಪಸ್ಥಿತರಿದ್ದರು.ಕಾಲೇಜಿನ ಪ್ರಾಂಶುಪಾಲೆ ಡಾ. ಮಮತಾ ಕೆ.ವಿ. ಅತಿಥಿಗಳನ್ನು ಸ್ವಾಗತಿಸಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಎಸ್. ವಂದಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಅರುಣ್ ಕುಮಾರ್ ಮತ್ತು ಡಾ. ಲಿಖಿತಾ ಡಿ.ಎನ್. ಕಾರ್ಯಕ್ರಮ ನಿರೂಪಿಸಿದರು.