ಸಾರಾಂಶ
ಯುಗಾದಿ ಜಾತ್ರೆಗೆ ಆಗಮಿಸುವ ಭಕ್ತರಿಗೆ ಅಗತ್ಯ ಮೂಲ ಸೌಲಭ್ಯಗಳು ಕೊರತೆಯಾಗದಂತೆ ನೋಡಿಕೊಳ್ಳುವುದರ ಜತೆಗೆ ಧಾರ್ಮಿಕ ಕ್ಷೇತ್ರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಸೂಚಿಸಿದರು.
ಕನ್ನಡಪ್ರಭ ವಾರ್ತೆ ಹನೂರು
ಯುಗಾದಿ ಜಾತ್ರೆಗೆ ಆಗಮಿಸುವ ಭಕ್ತರಿಗೆ ಅಗತ್ಯ ಮೂಲ ಸೌಲಭ್ಯಗಳು ಕೊರತೆಯಾಗದಂತೆ ನೋಡಿಕೊಳ್ಳುವುದರ ಜತೆಗೆ ಧಾರ್ಮಿಕ ಕ್ಷೇತ್ರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಸೂಚಿಸಿದರು.ತಾಲೂಕಿನ ಮಲೆ ಮಹದೇಶ್ವರಬೆಟ್ಟದ ನಾಗಮಲೆ ಭವನದಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಸಂಬಂಧ ಅಗತ್ಯ ಸಿದ್ಧತೆ ಕುರಿತು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಾನಿಧ್ಯದಲ್ಲಿ ಆಯೋಜಿಸಿದ್ಧ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವವು ಏ.6 ರಿಂದ 4 ದಿನಗಳ ಕಾಲ ನಡೆಯಲಿದ್ದು, ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಹಾಗೂ ತಾಲೂಕು ಸೇರಿದಂತೆ ತಮಿಳುನಾಡಿನಿಂದಲೂ ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ. ಹಾಗಾಗಿ ಭಕ್ತರಿಗೆ ಅಗತ್ಯ ಮೂಲ ಸೌಕರ್ಯವನ್ನು ಒದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.ಕಳೆದ ಮಹಾ ಶಿವರಾತ್ರಿ ಜಾತ್ರೆಯು ಸುಸೂತ್ರವಾಗಿ ನಡೆದಿದೆ. ಅದೇ ರೀತಿ ಈ ಬಾರಿ ಜಾತ್ರೆಗೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಶೌಚಗೃಹ ಹಾಗೂ ದಾಸೋಹ ವ್ಯವಸ್ಥೆ ಸೇರಿದಂತೆ ಇನ್ನಿತರೆ ಅಗತ್ಯ ಸೌಕರ್ಯವನ್ನು ಒದಗಿಸಬೇಕು.
ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಆಗಾಗ್ಗೆ ಸ್ವಚ್ಛತೆ ಕೈಗೊಳ್ಳುವುದರ ಮೂಲಕ ಶ್ರೀ ಕ್ಷೇತ್ರದಲ್ಲಿ ನೈರ್ಮಲ್ಯ ಕಾಪಾಡಬೇಕು. ಭಕ್ತರ ಸಂಖ್ಯೆಗೆ ಅನುಗುಣವಾಗಿ ಸಾರಿಗೆ ಬಸ್ ಸೌಕರ್ಯ ಕಲ್ಪಿಸಬೇಕು. ನಿಗದಿತ ಸ್ಥಳದಲ್ಲಿ ವಾಹನಗಳು ನಿಲುಗಡೆಯಾಗಬೇಕು ಜೊತೆಗೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ಭಕ್ತರಿಗೆ ಜಾಗೃತಿ ಮೂಡಿಸಬೇಕು.ಪರಿಶೀಲನೆ ಬಳಿಕ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ದೀಪದಗಿರಿ ಒಡ್ಡುವಿನಲ್ಲಿ ನಿರ್ಮಿಸಿರುವ 108 ಅಡಿ ಎತ್ತರದ ಶ್ರೀ ಮಹದೇಶ್ವರ ಮೂರ್ತಿಯ ಗುಹೆಯ ಒಳಾಂಗಣದಲ್ಲಿ ಪ್ರಗತಿಯಲ್ಲಿರುವ ವಿವಿಧ ಕಲಾ ವಿನ್ಯಾಸದ ಕಾಮಗಾರಿಯನ್ನು ಪರಿಶೀಲಿಸಿದರು.
ಪ್ರತಿಮೆಯ ಸ್ಥಳಕ್ಕೆ ಭಕ್ತರು ತೆರಳಲು ನಿರ್ಮಿಸುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು. ಸಭೆಯಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಸಾರಿಗೆ, ಸೆಸ್ಕ್ ಹಾಗೂ ಪ್ರಾಧಿಕಾರದ ಅಧಿಕಾರಿಗಳು ಹಾಗೂ ನೌಕರರು ಇದ್ದರು.