ಸಾರಾಂಶ
ಕನ್ನಡಪ್ರಭವಾರ್ತೆ ಚಿತ್ರದುರ್ಗಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡುತ್ತಿರುವ ಉಚಿತ ಗ್ಯಾರೆಂಟಿಗಳನ್ನು ನೋಡಿ ಬಿಜೆಪಿಯಲ್ಲಿ ಅಸಹನೀಯ ವಾತಾವರಣ ಸೃಷ್ಟಿಯಾಗಿದೆ. ಆದ್ದರಿಂದ ಕಾಂಗ್ರೆಸ್ ವಿರುದ್ಧ ಅನಗತ್ಯ ಆರೋಪ ಮಾಡುತ್ತಾ ಕಾಲಹರಣ ಮಾಡುತ್ತಿವೆ. ಇಂತಹ ಶಕ್ತಿಗಳ ವಿರುದ್ಧ ಕಾರ್ಯಕರ್ತರು ಎಚ್ಚೆತ್ತುಕೊಳ್ಳಬೇಕೆಂದು ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ. ಸರ್ದಾರ್ ಹೇಳಿದರು.ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಚಿತ್ರದುರ್ಗ ಗ್ರಾಮಾಂತರ ಅಧ್ಯಕ್ಷರಾಗಿ ನೇಮಕವಾಗಿರುವ ಎಂ. ನಿಖಿಲ್, ಜಂಟಿ ಕಾರ್ಯದರ್ಶಿ ಅಮೀನಾಭಾನು, ಹೊಳಲ್ಕೆರೆ ಗ್ರಾಮಾಂತರ ಕಾಂಗ್ರೆಸ್ ಕಾರ್ಮಿಕ ವಿಭಾಗ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಖಲೀಲ್ ಖಲಂದರ್ ಅವರ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಕಾರ್ಮಿಕ ವಿಭಾಗ ಪಕ್ಷಕ್ಕೆ ಅತಿ ದೊಡ್ಡ ಶಕ್ತಿಯಿದ್ದಂತೆ. 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯನವರು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತ ಹಾಗೂ ಮುಖಂಡರು ಪಕ್ಷದ ಪರವಾಗಿ ಗಟ್ಟಿಯಾಗಿ ನಿಲ್ಲಬೇಕೆಂದು ಮನವಿ ಮಾಡಿದರು.ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಸೈಯದ್ ಮೊಯಿದ್ದಿನ್(ಚೋಟು) ಮಾತನಾಡಿ, ಪಕ್ಷಕ್ಕೆ ಪ್ರಾಮಾಣಿಕವಾಗಿ ದುಡಿಯುತ್ತಿರುವವರಿಗೆ ಒಂದಲ್ಲ ಒಂದು ದಿನ ಅಧಿಕಾರ ಸಿಗುತ್ತದೆ. ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ, ಪ್ರಾಮಾಣಿಕವಾಗಿ ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ಮನವಿ ಮಾಡಿದರು.
ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‍ಪೀರ್ ಮಾತನಾಡಿ, ಪ್ರತಿ ಕುಟುಂಬದಲ್ಲೂ ಒಬ್ಬರಲ್ಲ ಒಬ್ಬರು ಕಾರ್ಮಿಕರು ಇದ್ದೇ ಇರುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಐದು ಉಚಿತ ಗ್ಯಾರೆಂಟಿಗಳು ಎಲ್ಲರಿಗೂ ಮುಟ್ಟಿವೆಯೋ ಇಲ್ಲವೋ ಎನ್ನುವುದನ್ನು ಖಾತ್ರಿ ಪಡಿಸಿಕೊಂಡು ಕಾರ್ಮಿಕರಿಗೆ ಸಿಗಬೇಕಾದ ಸರ್ಕಾರದ ಸವಲತ್ತುಗಳನ್ನು ದೊರಕಿಸುವಲ್ಲಿ ಕಾರ್ಮಿಕ ವಿಭಾಗದವರ ಪಾತ್ರ ಬಹಳ ಮುಖ್ಯ ಎಂದು ತಿಳಿಸಿದರು.ಒಂದು ಕಾಲದಲ್ಲಿ ಪುರುಷರಷ್ಟೆ ಕಾರ್ಮಿಕರಾಗಿರುತ್ತಿದ್ದರು. ಈಗ ಮಹಿಳಾ ಕಾರ್ಮಿಕರು ಎಲ್ಲಾ ಕ್ಷೇತ್ರಗಳಲ್ಲಿಯೂ ಜಾಸ್ತಿಯಿದ್ದಾರೆ. ಹದಿನೆಂಟು ವರ್ಷವಾಗಿರುವವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಸೇರ್ಪಡೆಗೊಳಿಸಿಕೊಂಡು ಕಡ್ಡಾಯವಾಗಿ ಮತದಾನ ಮಾಡಿ ಪ್ರಜಾ ಪ್ರಭುತ್ವವನ್ನು ಉಳಿಸಿ ಎಂದು ಕೋರಿದರು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ವೆಂಕಟೇಶ್ ಮಾತನಾಡಿ, ಪಕ್ಷಕ್ಕಾಗಿ ದುಡಿದವರನ್ನು ಗುರುತಿಸಿ ನಾಯಕರುಗಳು ಅಧಿಕಾರ ನೀಡುತ್ತಿದ್ದಾರೆ. ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿಗೌಡರವರು ಅತ್ಯಂತ ಕ್ರಿಯಾಶೀಲರಾಗಿರುವುದರಿಂದ ಪಕ್ಷದಲ್ಲಿ ಕಾರ್ಮಿಕ ವಿಭಾಗ ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂದರು.
ಬಿಜೆಪಿಯವರು ಕಾಂಗ್ರೆಸ್‍ಗೆ ಮಸಿ ಬಳಿಯುವ ಕುತಂತ್ರ ಮಾಡುತ್ತಿದ್ದಾರೆ. ಮುಂದೆ ನಡೆಯುವ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಕಾರ್ಮಿಕ ವಿಭಾಗದವರು ಪ್ರಾಮಾಣಿಕವಾಗಿ ಶ್ರಮಿಸುವಂತೆ ಕರೆ ನೀಡಿದರು.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ನಜ್ಮತಾಜ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿರುವ ಯೋಜನೆಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸಿ ಜಿಲ್ಲೆಯಾದ್ಯಂತ ಪಕ್ಷವನ್ನು ಸಂಘಟಿಸಿ ಹೆಚ್ಚಿನ ಸದಸ್ಯತ್ವ ನೊಂದಾಯಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದು ಹೇಳಿದರು.
ಜಿಲ್ಲಾ ಮುಖಂಡ ಎಸ್.ಎಂ.ಎಲ್. ತಿಪ್ಪೇಸ್ವಾಮಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಯೂಸೂಫ್, ಜಿಲ್ಲಾ ಕಾರ್ಯದರ್ಶಿ ಖಯೂಂ, ಸಂಘಟನಾ ಕಾರ್ಯದರ್ಶಿ ಅಕ್ಬರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಡಿ.ಎನ್. ಮೈಲಾರಪ್ಪ, ಕಾರ್ಯದರ್ಶಿ ರವೀಂದ್ರ, ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಣ್ಣ, ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಮಂಜುನಾಥ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ. ಕುಮಾರ್, ವಾಸೀಂ, ದಾದಾಪೀರ್ ಇನ್ನು ಅನೇಕರು ವೇದಿಕೆಯಲ್ಲಿದ್ದರು.