ದೇಶದ ಗಡಿಯಲ್ಲಿ ಸೈನಿಕರು ತಮ್ಮ ಪ್ರಾಣ ಪಣಕ್ಕಿಟ್ಟು ದೇಶವನ್ನು ರಕ್ಷಿಸುತ್ತಿದ್ದಾರೆ. ಅವರ ತ್ಯಾಗದಿಂದಾಗಿ ಕೋಟ್ಯಂತರ ಜನರು ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು.

ಕನ್ನಡಪ್ರಭ ವಾರ್ತೆ ನಾಗಮಂಗಲ

ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುವುದು ಅಥವಾ ಕರ್ತವ್ಯ ಲೋಪ ಎಸಗುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಜನರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಿ ನಿಯಮಾನುಸಾರ ಪರಿಹಾರ ಒದಗಿಸಬೇಕು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪಟ್ಟಣದ ಉಪ್ಪಾರಹಳ್ಳಿ ಗೇಟ್‌ನ ಎಂಆರ್‌ಪಿ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ನಾಗಮಂಗಲ ಹಾಗೂ ಕೆ.ಆರ್. ಪೇಟೆ ತಾಲೂಕುಗಳಿಗೆ ಸಂಬಂಧಿಸಿದ ಬಾಕಿ ಇರುವ 114 ಪ್ರಕರಣಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸರ್ಕಾರಿ ಕಚೇರಿಗಳಿಗೆ ತಮ್ಮ ಸಮಸ್ಯೆಗಳನ್ನು ಹೊತ್ತು ಬರುವ ಬಡವರು, ರೈತರು ಹಾಗೂ ಜನಸಾಮಾನ್ಯರನ್ನು ಅಧಿಕಾರಿಗಳು ಗೌರವದಿಂದ ಕಾಣಬೇಕು. ಒಂದು ಸಣ್ಣ ಕೆಲಸಕ್ಕೆ ಪದೇಪದೇ ಕಚೇರಿಗಳಿಗೆ ಅಲೆದಾಡಿಸಬಾರದು. ಜನರ ಸಮಸ್ಯೆ ಅರಿತು ಸ್ಥಳೀಯ ಮಟ್ಟದಲ್ಲಿಯೇ ಪರಿಹರಿಸುವ ಮನೋಭಾವ ಅಧಿಕಾರಿಗಳಲ್ಲಿರಬೇಕು ಎಂದರು.

ಲೋಕಾಯುಕ್ತ ಸಂಸ್ಥೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೀಮಿತವಾಗಿಲ್ಲ. ಆಡಳಿತ ವ್ಯವಸ್ಥೆಯ ಲೋಪಗಳನ್ನು ಗುರುತಿಸಿ ಸರಿಪಡಿಸುವುದು, ಸಾರ್ವಜನಿಕರಿಗೆ ನ್ಯಾಯ ದೊರಕಿಸುವುದು ಹಾಗೂ ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ಖಚಿತ ಪಡಿಸುವುದು ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಜನರ ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ದಾಸ್ತಾನು, ಗುಣಮಟ್ಟ ಹಾಗೂ ಅವಧಿಯನ್ನು ನಿಯಮಿತವಾಗಿ ಪರಿಶೀಲಿಸಿ ಅವಧಿ ಮೀರಿದ ಔಷಧಗಳು ಮತ್ತು ಲಸಿಕೆಗಳು ಸಾರ್ವಜನಿಕರ ಬಳಕೆಗೆ ಹೋಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮಕ್ಕಳನ್ನು ಸಾಗಿಸುವ ಶಾಲಾ ಬಸ್‌ಗಳು ಸೇರಿ ಎಲ್ಲ ವಾಹನಗಳ ಫಿಟ್‌ನೆಸ್, ಚಾಲಕರ ಅರ್ಹತೆ ಹಾಗೂ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು. ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದರು.

ರೈತರಿಗೆ ಸರ್ಕಾರಿ ಸೌಲಭ್ಯಗಳು ಮತ್ತು ಸೇವೆಗಳಲ್ಲಿ ಯಾವುದೇ ವಿಳಂಬವಾಗಬಾರದು. ಅವರ ಸಮಸ್ಯೆಗಳನ್ನು ಕಚೇರಿಗಳಲ್ಲಿ ಬಾಕಿ ಉಳಿಸದೆ ನಿಯಮಾನುಸಾರ ತ್ವರಿತವಾಗಿ ಪರಿಹರಿಸಬೇಕು. ಅದೇ ರೀತಿ ಸಾಮಾನ್ಯ ಜನರಿಗೆ ತಮ್ಮ ಹಕ್ಕುಗಳು ಹಾಗೂ ಕಾನೂನುಗಳ ಬಗ್ಗೆ ಸಂಪೂರ್ಣ ಅರಿವಿಲ್ಲ. ಇದರಿಂದ ಹಲವು ಸಮಸ್ಯೆಗಳು ಎದುರಾಗುತ್ತಿವೆ. ಜನರಿಗೆ ಕಾನೂನು ಅರಿವು ಮೂಡಿಸಿ ತಮ್ಮ ಸಮಸ್ಯೆಗಳಿಗೆ ಕಾನೂನುಬದ್ಧ ಮಾರ್ಗದಲ್ಲಿ ಪರಿಹಾರ ಕಂಡುಕೊಳ್ಳುವಂತಾಗಬೇಕು ಎಂದರು.

ದೇಶದ ಗಡಿಯಲ್ಲಿ ಸೈನಿಕರು ತಮ್ಮ ಪ್ರಾಣ ಪಣಕ್ಕಿಟ್ಟು ದೇಶವನ್ನು ರಕ್ಷಿಸುತ್ತಿದ್ದಾರೆ. ಅವರ ತ್ಯಾಗದಿಂದಾಗಿ ಕೋಟ್ಯಂತರ ಜನರು ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಹಾಗೂ ಉಪ ನಿಬಂಧಕರಾದ ಅರವಿಂದ್, ಲೋಕಾಯುಕ್ತ ಎಸ್‌ಪಿ ಸುರೇಶ್‌ಬಾಬು, ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ, ಪಾಂಡವಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ನಾಗಮಂಗಲ ಹಾಗೂ ಕೆ.ಆರ್.ಪೇಟೆ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಇದ್ದರು.