ಸಾರಾಂಶ
ಸಂಡೂರು: ನಾನು ಸಂಡೂರು ಕ್ಷೇತ್ರದಲ್ಲಿ ೩ ದಿನ ಪ್ರಚಾರ ನಡೆಸಿದ್ದೇನೆ. ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆತಿದೆ. ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಕಾಂಗ್ರೆಸ್ ಅಭ್ಯರ್ಥಿ ಈ. ಅನ್ನಪೂರ್ಣಾ ತುಕಾರಾಂ ಗೆಲ್ಲುವುದು ಅಷ್ಟೇ ಸತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಶನಿವಾರ ಇಲ್ಲಿ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾವು ಈ ಹಿಂದೆ ಕೊಟ್ಟ ೧೬೫ ಭರವಸೆಗಳಲ್ಲಿ ೧೫೮ ಭರವಸೆಗಳನ್ನು ಈಡೇರಿಸಿದ್ದೇವೆ. ಅನ್ನಭಾಗ್ಯ, ಮೈತ್ರಿ, ಮನಸ್ವಿನಿ, ಇಂದಿರಾ ಕ್ಯಾಂಟೀನ್, ಶೂ, ಶಾದಿ ಭಾಗ್ಯ, ಕೃಷಿ ಹೊಂಡ ಮುಂತಾದ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ೨೦೨೩ರಲ್ಲಿ ಅಧಿಕಾರಕ್ಕೆ ಬಂದಕೂಡಲೆ ೫ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೇವೆ. ಇದಕ್ಕಾಗಿ ವಾರ್ಷಿಕ ₹೫೬ ಸಾವಿರ ಕೋಟಿ ಖರ್ಚು ಮಾಡುತ್ತಿದ್ದೇವೆ. ಮೋದಿಯವರು ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದರು. ಗ್ಯಾರಂಟಿ ಯೋಜನೆಗಳಿಂದ ದೇಶ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಅಭಿವೃದ್ಧಿಗೆ ದುಡ್ಡಿರೋದಿಲ್ಲ ಎಂದು ಟೀಕಿಸಿದರು. ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವುದಲ್ಲದೆ, ಅಭಿವೃದ್ಧಿ ಕಾರ್ಯಗಳಿಗೂ ಅನುದಾನ ನೀಡಿದ್ದೇವೆ ಎಂದರು.ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಯಾವುದಾದರೂ ಅಭಿವೃದ್ಧಿ ಮಾಡಿದ್ದಾರಾ? ಲೂಟಿ ಹೊಡೆಯುವುದನ್ನು ಬಿಟ್ಟು ಅವರು ಏನನ್ನೂ ಮಾಡಿಲ್ಲ. ಒಂದು ಧರ್ಮವನ್ನು ಇನ್ನೊಂದು ಧರ್ಮದ ವಿರುದ್ಧ ಎತ್ತಿ ಕಟ್ಟುವುದು. ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಯಾವ ಮುಖ ಇಟ್ಟುಕೊಂಡು ಮತ ಕೇಳಲು ಬರುತ್ತಾರೋ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ನಾವು ಕೆಲಸ ಮಾಡಿ ಮತಕೇಳುತ್ತಿದ್ದೇವೆ ಎಂದು ಹೇಳಿದರು.
ಅಭ್ಯರ್ಥಿ ಅನ್ನಪೂರ್ಣಾ ತುಕಾರಾಂ ಮತಯಾಚನೆ ಮಾಡಿದರು. ಸಚಿವರಾದ ಎಚ್.ಕೆ. ಪಾಟೀಲ್, ಕೆ.ಎಚ್. ಮುನಿಯಪ್ಪ, ಸಂತೋಷ್ ಲಾಡ್, ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್, ಸಂಸದ ಈ. ತುಕಾರಾಂ, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಅಭ್ಯರ್ಥಿ ಈ. ಅನ್ನಪೂರ್ಣಾ ತುಕಾರಾಂ ಪರವಾಗಿ ಮತಯಾಚಿಸಿದರು.ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳಿನಿಯಪ್ಪನ್, ಶಾಸಕರಾದ ಗಣೇಶ್, ಬಿ.ಎನ್. ನಾಗರಾಜ್, ಲತಾ ಮಲ್ಲಿಕಾರ್ಜುನ, ಮಾಜಿ ಸಚಿವ ಎಚ್. ಆಂಜನೇಯ, ಅಮರೇಗೌಡ ಬಯ್ಯಾಪುರ, ಮಾಜಿ ಸಂಸದ ಐ.ಜಿ. ಸನದಿ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣ, ಮಾಜಿ ಜಿಪಂ ಸದಸ್ಯ ಅಕ್ಷಯ್ ಲಾಡ್, ಮುಖಂಡರಾದ ವಿಶ್ವಾಸ್ ಲಾಡ್, ಕೆ. ಸತ್ಯಪ್ಪ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಆಶಾಲತಾ ಸೋಮಪ್ಪ ಭಾಗವಹಿಸಿದ್ದರು.