ಅಂಗನವಾಡಿ ಕೇಂದ್ರ, ಪ್ರೌಢ ಶಾಲೆ, ಪಿಎಚ್ಸಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ

| Published : Sep 04 2024, 01:48 AM IST

ಅಂಗನವಾಡಿ ಕೇಂದ್ರ, ಪ್ರೌಢ ಶಾಲೆ, ಪಿಎಚ್ಸಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಸಿರವಾರ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಗೆ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಸಿರವಾರ

ತಾಲೂಕಿನ ಜಾಲಾಪೂರ ಕ್ಯಾಂಪ್‌ನಲ್ಲಿರುವ ಅಂಗನವಾಡಿ ಕೇಂದ್ರ, ಸಿರವಾರ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭಾರತ ಸರ್ಕಾರದ ರೈಲ್ವೆ ಸಚಿವಾಲಯ ಮತ್ತು ಜಲ ಶಕ್ತಿ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ಮೊದಲು ತಾಲೂಕಿನ ಚಾಗಬಾವಿ ಗ್ರಾಪಂಯ ಜಾಲಾಪೂರ ಕ್ಯಾಂಪ್‌ನಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಿಸಿದರು. ನಂತರ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಿದರು. ಗರ್ಭಿಣಿ ಮಹಿಳೆಯರಿಗೆ ಆಯೋಜಿಸಿದ ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಮವಸ್ತ್ರ ವಿತರಿಸಿದರು. ನಂತರ ಕೃಷಿ ಇಲಾಖೆಯಿಂದ ರೈತರಿಗೆ ಕಾರ್ಡ್ ವಿತರಿಸಿದರು.

ಅಲ್ಲಿಂದ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಗೆ ಭೇಟಿ ನೀಡಿ ಡಿಜಿಟಲ್ ಲೈಬ್ರರಿ ವೀಕ್ಷಣೆ ಮಾಡಿ, ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಮತ್ತು ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಹಾಗೂ ಸಿರವಾರ ತಾಲೂಕಿನಲ್ಲಿ ಸರ್ಕಾರಿ ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭಿಸಲು ಕ್ರಮ ತೆಗೆದುಕೊಳ್ಳುವಂತೆ ಡಿಡಿಪಿಐ ಅವರಿಗೆ ಸೂಚಿಸಿದರು.

ನಂತರ ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಾಯಿ ಕಾರ್ಡ್ ವಿತರಿಸಿದರು. ಗರ್ಭಿಣಿಯರಿಗೆ ಸರಿಯಾಗಿ ಚಿಕಿತ್ಸೆ ನೀಡಬೇಕು. ಮತ್ತು ಆಸ್ಪತ್ರೆಗೆ ಬರುವ ರೋಗಿಗಳಿಗೆ ವೈದ್ಯರು ಉತ್ತಮ ರೀತಿಯಲ್ಲಿ ಸ್ಪಂದಿಸಬೇಕೆಂದು ಸೂಚಿಸಿದರು.

ಈ ವೇಳೆ ಮಾನ್ವಿ ಕ್ಷೇತ್ರದ ಶಾಸಕ ಹಂಪಯ್ಯ ಸಾಹುಕಾರ್, ರಾಯಚೂರು ನಗರ ಶಾಸಕ ಡಾ.ಎಸ್.ಶಿವರಾಜ್ ಪಾಟೀಲ್, ಮಾಜಿ ಸಂಸದ ಬಿ.ವಿ.ನಾಯಕ, ಮುಖಂಡ ರವಿ ಬೋಸರಾಜು, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕರಾಮ ಸೇರಿ ಇತರೆ ಇಲಾಖೆಯ ಅಧಿಕಾರಿ-ಸಿಬ್ಬಂದಿ, ಮುಖಂಡರು ಇದ್ದರು.