ಸಾರಾಂಶ
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಗಣೇಶ ಮೂರ್ತಿಯ ಮೆರವಣಿಗೆಯ ಸಂದರ್ಭ ನಡೆದ ಅಹಿತಕರ ಘಟನೆಗಳನ್ನು ಖಂಡಿಸಿ ಕೊಡಗು ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟ ಗುರುವಾರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಗಣೇಶ ಮೂರ್ತಿಯ ಮೆರವಣಿಗೆಯ ಸಂದರ್ಭ ನಡೆದ ಅಹಿತಕರ ಘಟನೆಗಳನ್ನು ಖಂಡಿಸಿ ಕೊಡಗು ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಒಕ್ಕೂಟ ಗುರುವಾರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು, ಗಲಭೆ ನಡೆಸಿ ಮೆರವಣಿಗೆಗೆ ತಡೆಯೊಡ್ಡಿದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಹಿಂದೂ ಜಾಗರಣಾ ವೇದಿಕೆ ಸಂಚಾಲಕ ಕುಕ್ಕೇರ ಅಜಿತ್ ಮಾತನಾಡಿ, ಗಣೇಶೋತ್ಸವ ಆಚರಣೆ ಹಿಂದೂ ರಾಷ್ಟ್ರ ಭಾರತದ ರಾಷ್ಟ್ರೀಯ ಹಬ್ಬವಾಗಿದೆ. ಇದನ್ನು ತಡೆಯಲು ಯತ್ನಿಸಿದರೆ ಸಹಿಸಲು ಸಾಧ್ಯವಿಲ್ಲ ಎಂದರು.
ನಾಗಮಂಗಲದಲ್ಲಿ ನಡೆದ ಅಹಿತಕರ ಘಟನೆ ಇಡೀ ಹಿಂದೂ ಸಮಾಜ ಜಾಗೃತಗೊಳಿಸಿದೆ. ಮುಂದಿನ ದಿನಗಳಲ್ಲಿ ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಬಹುದು. ಏನೇ ಅನಾಹುತ ಸಂಭವಿಸಿದರೂ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಸಮಾಜದಲ್ಲಿ ಅಶಾಂತಿ ಮೂಡಿಸುವ ದುಷ್ಕರ್ಮಿಗಳಿಗೆ ರಾಜ್ಯ ಸರ್ಕಾರ ಓಟ್ ಬ್ಯಾಂಕ್‌ಗಾಗಿ ರಕ್ಷಣೆ ನೀಡುತ್ತಿದೆ ಎಂದು ಅಜಿತ್ ಆರೋಪಿಸಿದರು.
ಹಿಂದೂ ಸಂಘಟನೆಗಳ ಪ್ರಮುಖರಾದ ಪುದಿಯೊಕ್ಕಡ ರಮೇಶ್, ಡಿ.ನರಸಿಂಹ, ಪ್ರವೀಣ್ ಸಿದ್ದಾಪುರ, ಚೇತನ್ ಶಾಂತಿನಿಕೇತನ, ಶಾಂತೆಯಂಡ ತಿಮ್ಮಯ್ಯ, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಹಾಗೂ ವಿವಿಧ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.