ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರು ಡಂಪಿಂಗ್ ಯಾರ್ಡ್ ಘಟಕದ ಸುತ್ತಮುತ್ತಲಿನ ಅವೈಜ್ಞಾನಿಕ ಹಾಗೂ ಅಸ್ವಚ್ಛ ವಾತಾವರಣವನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದ ಅವರು, ಇದರಲ್ಲಿ ಕರ್ತವ್ಯ ಲೋಪವೆಸಗಿದ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕಾರವಾರ: ಉಪ ಲೋಕಾಯುಕ್ತ ನ್ಯಾ. ಕೆ.ಎನ್. ಫಣೀಂದ್ರ ಅವರು ಬುಧವಾರ ಬೆಳಗ್ಗೆ ಕಾರವಾರ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂದರ್ಭದಲ್ಲಿ ಶಿರವಾಡದಲ್ಲಿನ ನಗರಸಭೆಯ ಡಂಪಿಂಗ್ ಯಾರ್ಡ್ ಮತ್ತು ನಗರದ ಹೆದ್ದಾರಿ ಫ್ಲೈಒವರ್ ಕೆಳಗಿನ ಜಾಗದಲ್ಲಿನ ಸ್ಥಿತಿ ಕಂಡು ಸಂಬಂಧಪಟ್ಟ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಡಂಪಿಂಗ್ ಯಾರ್ಡ್ ಘಟಕದ ಸುತ್ತಮುತ್ತಲಿನ ಅವೈಜ್ಞಾನಿಕ ಹಾಗೂ ಅಸ್ವಚ್ಛ ವಾತಾವರಣವನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದ ಅವರು, ಇದರಲ್ಲಿ ಕರ್ತವ್ಯ ಲೋಪವೆಸಗಿದ ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಘಟಕದಲ್ಲಿ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯದಿರುವುದನ್ನು ಹಾಗೂ ಸ್ಥಳೀಯ ಪರಿಸರ ಹಾಳಾಗುತ್ತಿರುವುದು ಮತ್ತು ತ್ಯಾಜ್ಯ ಘಟಕದಲ್ಲಿ ಒಣ ಹಾಗೂ ಹಸಿ ಕಸದ ವಿಲೇವಾರಿ ಅತ್ಯಂತ ವಿಳಂಬವಾಗಿ ನಡೆಯುತ್ತಿದ್ದು, ಸುತ್ತಮುತ್ತಲಿನ ಚರಂಡಿಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡಿಲ್ಲದಿರುವುದರ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಘಟಕದಿಂದ ಹೊರಬರುವ ಕಲುಷಿತ ದ್ರವ ತ್ಯಾಜ್ಯವು ನೇರವಾಗಿ ಭೂಮಿಗೆ ಇಂಗುತ್ತಿದ್ದು, ಇದರಿಂಧ ಸುತ್ತಮುತ್ತಲಿನ ಬಾವಿ ಹಾಗೂ ಕುಡಿಯುವ ನೀರಿನ ಮೂಲಗಳು ಕಲುಷಿತಗೊಂಡಿರುವ ಬಗ್ಗೆ ಸ್ಥಳೀಯರು ಗಮನಕ್ಕೆ ತಂದರು.

ಈ ಗಂಭೀರ ಸಮಸ್ಯೆಯ ಕುರಿತು ಸ್ವಯಂಪ್ರೇರಿತವಾಗಿ ಸುಮೊಟೊ ಪ್ರಕರಣ ದಾಖಲಿಸಿಕೊಳ್ಳುವುದಾಗಿ ಉಪಲೋಕಾಯುಕ್ತರು ತಿಳಿಸಿದರು.

ನಗರದ ಹೆದ್ದಾರಿ ಫ್ಲೈಒವರ್ ಕೆಳಗಿನ ಖಾಲಿ ಜಾಗದಲ್ಲಿ ಅನಧಿಕೃತವಾಗಿ ವಾಹನಗಳ ಪಾರ್ಕಿಂಗ್ ಮತ್ತಿತರ ಚಟುವಟಿಕೆ ನಡೆಯಲು ಅವಕಾಶ ನೀಡಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಅನಧಿಕೃತ ಕೃತ್ಯಕ್ಕೆ ಪರೋಕ್ಷವಾಗಿ ಕುಮ್ಮಕ್ಕು ನೀಡುತ್ತಿರುವ ಅಧಿಕಾರಿಗಳ ಬೇಜವಾಬ್ದಾರಿ ನಡವಳಿಕೆಯನ್ನು ಕುರಿತು ತಕ್ಷಣವೇ ಲಿಖಿತ ಸ್ಪಷ್ಟನೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿ, ಈ ನಿರ್ಲಕ್ಷ್ಯದ ಬಗ್ಗೆ ಪ್ರಕರಣ ದಾಖಲಿಸುವಂತೆ ತಿಳಿಸಿದ ಅವರು, ಈ ಬಗ್ಗೆ ಸಮಗ್ರ ವರದಿಯನ್ನು ಪಡೆದು, ಕೇಂದ್ರದ ಲೋಕಪಾಲ್ ಗಮನಕ್ಕೆ ತರುವುದಾಗಿ ತಿಳಿಸಿದರು.

ಪರಿಶೀಲನೆ ವೇಳೆ ಫ್ಲೈಒವರ್ ಕೆಳಗೆ ನರ್ಸರಿ ಗಿಡಗಳನ್ನು ಮಾರುತ್ತಿದ್ದ ವ್ಯಾಪಾರಿಯನ್ನು ವಿಚಾರಣೆ ನಡೆಸಿ ಯಾವುದೇ ಮುನ್ಸೂಚನೆ ಅಥವಾ ಅನುಮತಿ ಇಲ್ಲದೆ ಖಾಲಿ ಜಾಗದಲ್ಲಿ ಅಕ್ರಮವಾಗಿ ಅಂಗಡಿ ಇಟ್ಟುಕೊಂಡು ವ್ಯಾಪಾರ ಮುಂದುವರಿಸಲಾಗುತ್ತಿದ್ದರೂ, ಅಧಿಕಾರಿಗಳು ಕೇವಲ ನೋಟಿಸ್ ನೀಡುವುದು ಮತ್ತು ದಂಡ ಹಾಕಿ ಸುಮ್ಮನಾಗುವುದರಿಂದ ಇಂತಹ ಅಕ್ರಮಗಳು ನಿಲ್ಲುವುದಿಲ್ಲ, ಬದಲಿಗೆ ಕ್ರಿಮಿನಲ್ ದೂರು ದಾಖಲಿಸಿ ವಸ್ತುಗಳು ಹಾಗೂ ವಾಹನಗಳನ್ನು ಜಪ್ತಿ ಮಾಡುವಂತಹ ಕಠಿಣ ಕ್ರಮ ಕೈಗೊಳ್ಳಬೇಕು. ಫ್ಲೈಒವರ್ ಕೆಳಗೆ ವಾಹನಗಳ ನಿಲ್ಲದಂತೆ ಸುತ್ತಲೂ ಗೇಟ್‌ಗಳನ್ನು ಅಳವಡಿಸುವಂತೆ ಮತ್ತು ತೋಟಗಾರಿಕಾ ಇಲಾಖೆ ಮೂಲಕ ಉದ್ಯಾನ ಮಾದರಿಯಲ್ಲಿ ಅಭಿವೃದ್ಧಿ ಮಾಡುವಂತೆ ಸೂಚಿಸಿದರು. ನಂತರ ಕೋಣೆನಾಲ ಪ್ರದೇಶವನ್ನು ವೀಕ್ಷಿಸಿ, ಈ ನಾಲೆಯ ಮೂಲಕ ತ್ಯಾಜ್ಯವು ಸಮುದ್ರ ಸೇರದಂತೆ ಸೂಕ್ತ ಯೋಜನೆ ರೂಪಿಸುವಂತೆ ತಿಳಿಸಿದ ಅವರು ,ನಂತರ ನಗರಸಭೆಯ ಚರಂಡಿ ನೀರು ಶುದ್ದೀಕರಣ ಘಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ. ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಕಾರವಾರ ಉಪವಿಭಾಗಾಧಿಕಾರಿ ರಮ್ಯಾ, ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ದಿನೇಶ್ ಕುಮಾರ್, ಉಪ ಲೋಕಾಯುಕ್ತರ ಆಪ್ತ ಕಾರ್ಯದರ್ಶಿ ಕಿರಣ್ ಪಾಟೀಲ್, ನಗರಸಭೆ ಪೌರಾಯುಕ್ತ ಜಗದೀಶ್ ಹುಲಗಜ್ಜಿ, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ದೂರುದಾರರು ಉಪಸ್ಥಿತರಿದ್ದರು.