ಅಂಬೇಡ್ಕರ್‌ ವಿಚಾರಧಾರೆ ಪಾಲನೆ ಇಂದಿನ ಅಗತ್ಯ: ಕಿಶೋರ್‌ ಕುಮಾರ್‌

| Published : Apr 15 2025, 12:47 AM IST

ಅಂಬೇಡ್ಕರ್‌ ವಿಚಾರಧಾರೆ ಪಾಲನೆ ಇಂದಿನ ಅಗತ್ಯ: ಕಿಶೋರ್‌ ಕುಮಾರ್‌
Share this Article
  • FB
  • TW
  • Linkdin
  • Email

ಸಾರಾಂಶ

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ನಡೆದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಇಂದು ಗ್ರಾ.ಪಂ.ನಿಂದ ಸಂಸತ್ತಿನವರೆಗಿನ ಚುನಾವಣೆಗಳಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಿಕೊಟ್ಟಂತಹ ದೀಮಂತ ನಾಯಕ ಡಾ. ಬಿ.ಆರ್. ಅಂಬೇಡ್ಕರ್. ಅವರ ಉದಾತ್ತ ವಿಚಾರಧಾರೆಗಳು ಹಾಗೂ ಜೀವನಾದರ್ಶಗಳ ಪಾಲನೆ ಇಂದಿನ ತುರ್ತು ಅಗತ್ಯವಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದ್ದಾರೆ.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸೋಮವಾರ ನಡೆದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಅಂಬೇಡ್ಕರ್ ಬಗ್ಗೆ ದೊಡ್ಡ ಮಾತುಗಳನ್ನಾಡುವ ಕಾಂಗ್ರೆಸ್, ಅವರನ್ನು ಹೇಗೆ ನಡೆಸಿಕೊಂಡಿದೆ ಹಾಗೂ ಚುನಾವಣೆಗೆ ಸ್ಪರ್ಧಿಸಿದಾಗ ಅವರನ್ನು ಯಾವ ರೀತಿಯಲ್ಲಿ ಸೋಲಿಸಲು ಕಾರಣವಾಗಿದೆ ಎಂಬುದು ಜಗಜ್ಜಾಹೀರಾಗಿದೆ. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವಿತಾವಧಿಯ ಪ್ರಮುಖ ಸ್ಥಳಗಳನ್ನು ಪಂಚ ತೀರ್ಥಗಳನ್ನಾಗಿ ಅಭಿವೃದ್ಧಿಪಡಿಸುವ ಮೂಲಕ ಅವರಿಗೆ ನೈಜ ಗೌರವವನ್ನು ಸಲ್ಲಿಸಿದೆ ಎಂದು ಹೇಳಿದರು.

ಚಿಂತಕ ಸಂತೋಷ್ ನಂಬಿಯಾರ್ ಪಡುಬಿದ್ರಿ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಸಾಮಾನ್ಯ ಸಾಧನೆ, ಅವರು ದೇಶಕ್ಕೆ ನೀಡಿದ ಕೊಡುಗೆ ಹಾಗೂ ಜೀವನಾದರ್ಶಗಳ ಕುರಿತು ಉಪನ್ಯಾಸ ನಡೆಸಿಕೊಟ್ಟರು.

ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಇದ್ದರು.

ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಂ. ಅಂಚನ್ ಸ್ವಾಗತಿಸಿದರು. ಜಿಲ್ಲಾ ಪ್ರ. ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ ವಂದಿಸಿದರು.