ದಾಸಶ್ರೇಷ್ಠ ಭಕ್ತ ಕನಕದಾಸರ ೫೩೯ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿರುವುದು ಸಂತಸ ತಂದಿದೆ. ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜಕ್ಕೆ ಸಮಾನತೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳ ಸಂದೇಶ ಸಾರಿದ್ದಾರೆ. ಅವರು ತೋರಿಸಿಕೊಟ್ಟ ಮಾರ್ಗದಲ್ಲಿ ನಡೆಯುವುದು ಪ್ರಜೆಗಳಾಗಿ ಹಾಗೂ ಜನಪ್ರತಿನಿಧಿಗಳಾಗಿ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು. ಜಾತಿ, ಪಕ್ಷಭೇದ ಮರೆತು ವಿವಿಧ ಸಮಾಜಗಳ ಮುಖಂಡರು ಹಾಗೂ ಸಾರ್ವಜನಿಕರು ಒಗ್ಗೂಡಿ ಜಯಂತಿ ಆಚರಿಸಿರುವುದು ಸಂತಸದ ಸಂಗತಿ. ಕನಕದಾಸರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಸಮಾನತೆ ಮತ್ತು ಸೌಹಾರ್ದತೆಯ ಹಾದಿಯಲ್ಲಿ ಸಾಗೋಣ ಎಂದು ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಹಾಸನ

ದಾಸಶ್ರೇಷ್ಠ ಭಕ್ತ ಕನಕದಾಸರ ೫೩೯ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿರುವುದು ಸಂತಸ ತಂದಿದೆ. ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜಕ್ಕೆ ಸಮಾನತೆ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳ ಸಂದೇಶ ಸಾರಿದ್ದಾರೆ. ಅವರು ತೋರಿಸಿಕೊಟ್ಟ ಮಾರ್ಗದಲ್ಲಿ ನಡೆಯುವುದು ಪ್ರಜೆಗಳಾಗಿ ಹಾಗೂ ಜನಪ್ರತಿನಿಧಿಗಳಾಗಿ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶುಕ್ರವಾರ ಕನಕದಾಸರ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಆಕರ್ಷಕ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕನಕದಾಸರ ಚಿಂತನೆಗಳು ಮತ್ತು ಆದರ್ಶಗಳು ಇಂದಿಗೂ ಸಮಾಜಕ್ಕೆ ಪ್ರೇರಣೆಯಾಗಿವೆ. ಜಾತಿ, ಪಕ್ಷಭೇದ ಮರೆತು ವಿವಿಧ ಸಮಾಜಗಳ ಮುಖಂಡರು ಹಾಗೂ ಸಾರ್ವಜನಿಕರು ಒಗ್ಗೂಡಿ ಜಯಂತಿ ಆಚರಿಸಿರುವುದು ಸಂತಸದ ಸಂಗತಿ. ಕನಕದಾಸರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಸಮಾನತೆ ಮತ್ತು ಸೌಹಾರ್ದತೆಯ ಹಾದಿಯಲ್ಲಿ ಸಾಗೋಣ ಎಂದು ಕರೆ ನೀಡಿದರು.ಕ್ಷೇತ್ರದ ಶಾಸಕ ಎಚ್. ಪಿ. ಸ್ವರೂಪ್ ಮಾತನಾಡಿ, ದಾಸಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿಯಿಂದ ಕನಕದಾಸರ ಪುತ್ಥಳಿವರೆಗೆ ಅದ್ಧೂರಿಯಾಗಿ ಮೆರವಣಿಗೆ ಆಯೋಜಿಸಿದ್ದು, ಅಪಾರ ಜನಸ್ತೋಮ ಭಾಗವಹಿಸಿರುವುದು ಸಂತಸ ತಂದಿದೆ. ಕನಕದಾಸರು ಕೇವಲ ಶ್ರೇಷ್ಠ ಕವಿಯಷ್ಟೇ ಅಲ್ಲದೆ, ಸಮಾಜ ಸುಧಾರಕರಾಗಿಯೂ ಗುರುತಿಸಿಕೊಂಡವರು. ಜಾತಿ, ಮತ ಹಾಗೂ ಭೇದಭಾವವಿಲ್ಲದೆ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಮತ್ತು ಗೌರವ ದೊರೆಯಬೇಕು ಎಂಬ ಆಶಯವನ್ನು ತಮ್ಮ ಚಿಂತನೆಗಳ ಮೂಲಕ ಸಾರಿದ್ದಾರೆ. ಅವರ ತತ್ವ, ಸಿದ್ಧಾಂತ ಹಾಗೂ ಮೌಲ್ಯಗಳನ್ನು ಮುಂದಿನ ಪೀಳಿಗೆಗೂ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಶ್ಲಾಘನೀಯ. ಎಲ್ಲರಿಗೂ ಕನಕದಾಸರ ಜಯಂತಿಯ ಶುಭಾಶಯಗಳು ಎಂದು ತಿಳಿಸಿದರು.ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಮಾತನಾಡಿ, ದಾಸಶ್ರೇಷ್ಠ ಕನಕದಾಸರ ಜಯಂತಿಯನ್ನು ಜಿಲ್ಲೆಯಲ್ಲಿ ಸಡಗರ, ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಸಂತಸದ ವಿಚಾರವಾಗಿದೆ. ಕನಕದಾಸರ ಶ್ರೇಷ್ಠತೆ ಇಡೀ ಜಗತ್ತಿಗೆ ಪರಿಚಿತವಾಗಿದೆ. ಉತ್ತಮ ಶಿಕ್ಷಣ ಪಡೆದಿದ್ದ ಅವರು ವ್ಯಾಕರಣದಲ್ಲಿ ಪಾಂಡಿತ್ಯ ಹೊಂದಿದ್ದು, ಅನೇಕ ಗ್ರಂಥಗಳನ್ನು ರಚಿಸುವುದರ ಜೊತೆಗೆ ತಮ್ಮ ಕೀರ್ತನೆಗಳ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಇಂತಹ ಮಹಾನ್ ದಾಸಶ್ರೇಷ್ಠರ ಆದರ್ಶ, ಸಾಹಿತ್ಯ ಹಾಗೂ ಕೊಡುಗೆಗಳನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಕನಕದಾಸರ ಜಯಂತಿಯ ಮೂಲಕ ಅವರ ಸಂದೇಶವನ್ನು ಸಮಾಜಕ್ಕೆ ಮತ್ತು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯವಾಗಲಿ ಎಂದು ಆಶಿಸಿದರು. ಇದೇ ಸಂದರ್ಭದಲ್ಲಿ ಎಲ್ಲರಿಗೂ ಕನಕದಾಸರ ಜಯಂತಿಯ ಶುಭಾಶಯಗಳನ್ನು ಹೇಳಿದರು.

ಮೆರವಣಿಗೆಯಲ್ಲಿ ಹುಡಾ ಅಧ್ಯಕ್ಷ ಪಟೇಲ್ ಶಿವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಕೆ. ಆರ್‌. ಅನುಪಮ, ಹಾಸನ ತಾಲೂಕು ಕುರುಬರ ಸಂಘದ ಅಧ್ಯಕ್ಷ ಸಿದ್ದೇಗೌಡ, ಸಂಘದ ಕಾರ್ಯಾಧ್ಯಕ್ಷ ಡಿ. ಪ್ರಸನ್ನ ಕುಮಾರ್‌, ಪ್ರಧಾನ ಕಾರ್ಯದರ್ಶಿ ಬಿ.ಸಿ. ದೇವೇಂದ್ರ, ಸಣ್ಣೇಗೌಡ, ರಂಗೇಗೌಡ, ಮಾಳಪ್ಪ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.