ತಾಲೂಕು ಮಟ್ಟದ ಕಾರ್ಯಪಡೆಯು ತನ್ನ ಇಲಾಖೆಯ ನಿಯಮಿತ ಕೆಲಸಗಳ ಜೊತೆಗೆ ಬಾಲಕಾರ್ಮಿಕ ವ್ಯವಸ್ಥೆ ವಿರುದ್ಧ ವ್ಯಾಪಕ ಜನಜಾಗೃತಿ ಮೂಡಿಸಬೇಕು
ಬಳ್ಳಾರಿ: ಜಿಲ್ಲೆಯಲ್ಲಿ ಬಾಲಕಾರ್ಮಿಕ, ಕಿಶೋರ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತೆಸೆಯಲು ಜಿಲ್ಲಾ, ತಾಲೂಕು ಮಟ್ಟದಲ್ಲಿ ನಿರಂತರ ಹಠಾತ್ ದಾಳಿ ನಡೆಸುವ ಮೂಲಕ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಟಾಸ್ಕ್ ಫೋರ್ಸ್ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಕಾರ್ಯಪಡೆಯು ತನ್ನ ಇಲಾಖೆಯ ನಿಯಮಿತ ಕೆಲಸಗಳ ಜೊತೆಗೆ ಬಾಲಕಾರ್ಮಿಕ ವ್ಯವಸ್ಥೆ ವಿರುದ್ಧ ವ್ಯಾಪಕ ಜನಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ತಹಶೀಲ್ದಾರರ ಅಧ್ಯಕ್ಷತೆಯಲ್ಲಿರುವ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದೆ. ಕಳೆದ ಸಾಲಿನಲ್ಲಿ 33 ತಾಲೂಕು ಮಟ್ಟದ ಸಭೆಗಳನ್ನು ನಡೆಸಲಾಗಿದೆ. ಇನ್ಮುಂದೆ ತಾಲೂಕು ಮಟ್ಟದ ಸಭೆ ಹಾಗೂ ಹಠಾತ್ ದಾಳಿಗಳಲ್ಲಿ ತಾಲೂಕು ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್ ಮಾತನಾಡಿ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ನಿರ್ದೇಶನದಂತೆ ಪ್ರತಿ ತಿಂಗಳು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳ ಮೂಲಕ ಇಲ್ಲಿಯವರೆಗೆ (2025-26ನೇ ಸಾಲಿನಲ್ಲಿ) 20 ಆಕಸ್ಮಿಕ ದಾಳಿಗಳನ್ನು ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ 58 ಬಾಲಕಾರ್ಮಿಕರನ್ನು ರಕ್ಷಿಸಿ, ಮಕ್ಕಳ ಕಲ್ಯಾಣ ಸಮಿತಿ ಮತ್ತು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ. ಮಕ್ಕಳನ್ನು ದುಡಿಸಿಕೊಳ್ಳುತ್ತಿದ್ದ ಮಾಲೀಕರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 31 ಎಫ್.ಐ.ಆರ್ ದಾಖಲಿಸಲಾಗಿದ್ದು, ಕರಪತ್ರಗಳ ಮೂಲಕ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ:ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಅಧ್ಯಕ್ಷರೂ ಆದ ನಾಗೇಂದ್ರ ಪ್ರಸಾದ್ ಮಾತನಾಡಿ, ಇದೇ ಜೂ.12ರಂದು ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಜಂಟಿ ಸಹಯೋಗದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಅಂತರಾಷ್ಟ್ರೀಯ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಇದಕ್ಕೂ ಶಾಲಾ ಮಕ್ಕಳಿಂದ ಜನಜಾಗೃತಿ ಜಾಥಾ ನಡೆಯಲಿದೆ. ಇದಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಎಲ್ಲ ತಾಲೂಕು ಕೇಂದ್ರಗಳಲ್ಲೂ ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯನ್ನು 2025-26ನೇ ಸಾಲಿಗೆ ಸಹಕಾರ ಸಂಘಗಳ ನೋಂದಣಿ ಕಾಯ್ದೆಯನ್ವಯ ನವೀಕರಿಸುವ ಕುರಿತು ಹಾಗೂ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಜಾಗೃತಿ ಕಾರ್ಯಕ್ರಮಗಳಿಗಾಗಿ ಪ್ರಸಿದ್ಧ ಕಂಪನಿಗಳಿಂದ ಸಿಎಸ್‌ಆರ್ ಅನುದಾನ ಮತ್ತು ಗಣ್ಯ ವ್ಯಕ್ತಿಗಳಿಂದ ದೇಣಿಗೆ ಸಂಗ್ರಹ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ, ಸಹಾಯಕ ಆಯುಕ್ತ ರಾಜೇಶ್ ಎಚ್.ಡಿ., ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಮೈದೂರು, ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು ಇದ್ದರು.