ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

| Published : Aug 24 2025, 02:00 AM IST

ಸಾರಾಂಶ

ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಕರನ್ನು ನೇಮಿಸಬೇಕು ಎಂದು ಒತ್ತಾಯಿಸಿ ಇಲ್ಲಿನ ಗಡಗಿ ಚನ್ನಪ್ಪ ವೃತ್ತದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ಬಳ್ಳಾರಿ

ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಕರನ್ನು ನೇಮಿಸಬೇಕು ಎಂದು ಒತ್ತಾಯಿಸಿ ಇಲ್ಲಿನ ಗಡಗಿ ಚನ್ನಪ್ಪ ವೃತ್ತದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದಿದೆ. ಆದರೂ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೆ ಇರುವ ಕಾರಣ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯ ತರಗತಿಗಳು ನಡೆಯುತ್ತಿಲ್ಲ. ಸರ್ಕಾರಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇದರಿಂದ ಬಹಳಷ್ಟು ತೊಂದರೆಯಾಗುತ್ತಿದೆ. ಖಾಸಗಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆದು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನ ಪಡೆದುಕೊಳ್ಳಲು ಅನುಕೂಲವಾಗುತ್ತದೆ. ಆದರೆ ಶೇ. 50ರಷ್ಟು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ಸರ್ಕಾರಿ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಸರ್ಕಾರ ಅನ್ಯಾಯ ಮಾಡಿದಂತಾಗಿದೆ. ಕೂಡಲೇ ರಾಜ್ಯ ಸರ್ಕಾರ ಈ ಕುರಿತು ಗಂಭೀರವಾಗಿ ಪರಿಗಣಿಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಅತಿಥಿ ಉಪನ್ಯಾಸಕರ ನೇಮಕಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು. ಪ್ರತಿ ವರ್ಷ ನೇಮಕಾತಿ ಸಂದರ್ಭದಲ್ಲಿ ಈ ರೀತಿ ಗೊಂದಲವಾಗುತ್ತಿದ್ದು, ಸರ್ಕಾರ ಶಾಶ್ವತ ಪರಿಹಾರ ಹುಡುಕಬೇಕು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಖಾಲಿ ಇರುವ ಎಲ್ಲ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಮಾಡಬೇಕು. ಸರ್ಕಾರಿ ಕಾಲೇಜುಗಳ ಮೂಲಭೂತ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ನೀಡಬೇಕು. ಪ್ರಯೋಗಾಲಯ ಸಲಕರಣೆಗಳು, ಕಂಪ್ಯೂಟರ್, ಇನ್ನಿತರ ಸಲಕರಣೆಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಪರಿಷತ್‌ನ ಜಿಲ್ಲಾ ಸಂಚಾಲಕ ಕೆ. ದಿಲೀಪ್ ಕುಮಾರ್, ಭರತ್, ನಾಗರಾಜ್, ಬಿ. ಸಾಗರ, ಚರಣ್, ಪಿ. ಸಾಗರ್ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.