ಕನ್ನಡಪ್ರಭ ವಾರ್ತೆ ಬೆಳಗಾವಿ

ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ರೈತ ಸಂಘದ ನೇತೃತ್ವದಲ್ಲಿ ಕಬ್ಬು ಬೆಳೆಗಾರರು ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ರೈತ ಸಂಘದ ರಾಜ್ಯಧ್ಯಕ್ಷ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ರೈತರು ಭಾಗವಹಿಸಿ, ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಪಾವತಿಸಬೇಕಿರುವ ಬಾಕಿ ಹಣ ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು. ಕಾರ್ಖಾನೆಗಳು ಸುಮಾರು ₹ 4,700 ಕೋಟಿಯಷ್ಟು ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿವೆ. ಪ್ರತಿಟನ್ ಕಬ್ಬಿಗೆ ₹ 3,300 ದರ ನಿಗದಿಯಾಗಿದ್ದರೂ ರೈತರಿಗೆ ಸಂಪೂರ್ಣ ಹಣ ಪಾವತಿಸಿಲ್ಲ ಎಂದು ಅವರು ಆರೋಪಿಸಿದರು. ಸರ್ಕಾರದಿಂದ ₹ 300 ಕೋಟಿ ಸಬ್ಸಿಡಿ ಬಿಡುಗಡೆ ಆಗಿದ್ದರೂ ಕಾರ್ಖಾನೆಗಳು ಅದನ್ನು ರೈತರಿಗೆ ನೀಡಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಚೂನಪ್ಪ ಪೂಜಾರಿ, ಸಕ್ಕರೆ ಕಾರ್ಖಾನೆಗಳು ತಕ್ಷಣ ಬಾಕಿ ಹಣ ಪಾವತಿಸದಿದ್ದರೆ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕಾನೂನು ಕ್ರಮಜರುಗಿಸಬೇಕು. ಇಲ್ಲವಾದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ರೈತರ ಬಾಕಿ ಬಿಲ್ ಪಾವತಿಸುವಲ್ಲಿ ಹಾಗೂ ಕಬ್ಬು ಬೆಳೆಗಾರರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.


ಪ್ರತಿಭಟನೆ ಹಿನ್ನೆಲೆಯಲ್ಲಿ ಆಯುಕ್ತರ ಕಚೇರಿ ಸುತ್ತಮುತ್ತ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಈ ವೇಳೆ ಮುಖಂಡರಾದ ಪ್ರಕಾಶ ನಾಯಕ, ಕಿಶನ ನಂದಿ, ಸೋಮು ರೈನಾಪುರ್ ಸೇರಿದಂತೆ ನೂರಾರೂ ರೈತರು ಇದ್ದರು.