ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರುತುರ್ತಾಗಿ ಮಲೆಮಹದೇಶ್ವರ ಬೆಟ್ಟದ ಮಾಸ್ಟರ್ ಪ್ಲಾನ್ ಆವರಣದ ಅರಣ್ಯದಂಚಿನಲ್ಲಿ ಬರುವ ವಿವಿಧ ಭಾಗಗಳಲ್ಲಿ ಇರುವ ಜಮೀನನ್ನು ಭೂಮಾಪನ ಸರ್ವೆ ಇಲಾಖೆಯ ಅಧಿಕಾರಿಗಳು ತುರ್ತಾಗಿ ಸರ್ವೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಸೂಚನೆ ನೀಡಿದರು.ತಾಲೂಕಿನ ಮಲೆಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ಕುರಿತು ಶಾಸಕ ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಾಸ್ಟರ್ ಪ್ಲಾನ್ ಆವರಣದ 7.18 ಎಕರೆ ಜಮೀನುಗಳಲ್ಲಿ ಒತ್ತುವರಿಯಾಗಿ, ಅನಧಿಕೃತವಾಗಿ ನಿರ್ಮಾಣವಾಗಿರುವ ಬಗ್ಗೆ ಪ್ರಶ್ನಿಸಿದರು. ಈಗಾಗಲೇ ಮಾಸ್ಟರ್ ಪ್ಲಾನ್ ಆವರಣದಲ್ಲಿ ನಿರ್ಮಾಣಗೊಂಡಿರುವ 381 ಮನೆಗಳು ಅದರಲ್ಲಿ 41 ಮನೆಗಳಿಗೆ ಇ-ಸ್ವತ್ತು ಮಲೆಮಹದೇಶ್ವರ ಬೆಟ್ಟ ಗ್ರಾಪಂ ವತಿಯಿಂದ ನೀಡಲಾಗಿದೆ. ಇದಲ್ಲದೆ ದೀಪದಗಿರಿ ವಡ್ಡುವಿನಲ್ಲಿ ಪ್ರತಿಮೆಗೆ ಹೋಗುವ ದಾರಿಯಲ್ಲಿ ಸುಮಾರು 15 ಅನಧಿಕೃತ ಮನೆಗಳು ನಿರ್ಮಿಸಲಾಗಿದೆ ಎಂದು ಗ್ರಾಪಂ ಅಭಿವೃದ್ಧಿ ಅಧಿಕಾರಿ ಕಿರಣ್ ಕುಮಾರ್ ಸಭೆಯಲ್ಲಿ ಮಾಹಿತಿ ನೀಡಿದರು.
ಮಲೆಮಹದೇಶ್ವರ ಬೆಟ್ಟದಲ್ಲಿ ಅನಧಿಕೃತವಾಗಿ ನಿರ್ಮಾಣಗೊಳ್ಳುತ್ತಿರುವ ಮನೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳು, ಸಿಬ್ಬಂದಿ ಕಾರ್ಯ ಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.ಪೌರಕಾರ್ಮಿಕರಿಗೆ ಸುರಕ್ಷತಾ ಸಾಧನಗಳ ಕಿಟ್ ವಿತರಣೆ:ಮಲೆಮಹದೇಶ್ವರ ಬೆಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪೌರಕಾರ್ಮಿಕರಿಗೆ ಸಮವಸ್ತ್ರ ಹಾಗೂ ಹ್ಯಾಂಡ್ ಗ್ಲೌಸ್ ಹೆಲ್ಮೆಟ್ ಗಳನ್ನು ಮತ್ತು ಸುರಕ್ಷಿತ ಸಾಧನಗಳನ್ನು ಸಭೆಯಲ್ಲಿ ವಿತರಣೆ ಮಾಡಿ ಶ್ರೀ ಕ್ಷೇತ್ರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸಭೆಯಲ್ಲಿ ತಿಳಿಸಿದರು.
ಡಿಜಿಟಲೀಕರಣಕ್ಕೆ ಒತ್ತು ನೀಡಿ:ಮಲೆಮಹದೇಶ್ವರ ಬೆಟ್ಟದಲ್ಲಿ ಮುಂದಿನ ತಿಂಗಳು ನಡೆಯಲಿರುವ ಕ್ಯಾಬಿನೆಟ್ ಸಭೆ ವೇಳೆ ಮುಖ್ಯಮಂತ್ರಿಗಳಿಗೆ ಮಲೆಮಹದೇಶ್ವರ ಬೆಟ್ಟದ ಅಭಿವೃದ್ಧಿ ಹಾಗೂ ಉಳಿದಂತೆ ಮಾಸ್ಟರ್ ಪ್ಲಾನ್ ಆವರಣದಲ್ಲಿರುವ ಆಗುಹೋಗುಗಳ ಬಗ್ಗೆ ಸಂಪೂರ್ಣವಾಗಿ ಅಧಿಕಾರಿ, ಸಿಬ್ಬಂದಿ ಮತ್ತು ಮುಖ್ಯವಾಗಿ ಸರ್ವೆ ಇಲಾಖೆ ಹಾಗೂ ಅರಣ್ಯ ಇಲಾಖೆ ಮತ್ತು ಗ್ರಾಪಂ ರಾಜ್ ಇಲಾಖೆ ಅಧಿಕಾರಿಗಳ ನಿರ್ವಹಣೆಯ ಮೇರೆಗೆ ಸಂಪೂರ್ಣ ಸರ್ವೆ ನಡೆಸಿ ವರದಿ ನೀಡುವಂತೆ ಹೇಳಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾಹುಡೆದ್, ಎಸ್ಪಿ ಕವಿತಾ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಡಿವೈಎಸ್ಪಿ ಧರ್ಮೇಂದರ್, ಉಪ ವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ಗುರುಪ್ರಸಾದ್, ಇನ್ಸ್‌ಪೆಕ್ಟರ್ ಜಗದೀಶ್, ಎಡಿಎಲ್ಆರ್ ವಿದ್ಯಾರಾಣಿ, ಮಲೆ ಮಾಹಶ್ವರ ಬೆಟ್ಟ ಇನ್ಸ್‌ಪೆಕ್ಟರ್ ಜಗದೀಶ್ ಮತ್ತು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.