ಡಿಎಪಿಗೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಕೆ ಮಾಡಿ: ಅಜಮೀರ ಅಲಿ

| Published : May 30 2024, 12:46 AM IST

ಡಿಎಪಿಗೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಕೆ ಮಾಡಿ: ಅಜಮೀರ ಅಲಿ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ರೈತರು ಕೇವಲ ಡಿಎಪಿ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಅದರ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳನ್ನು ಬಳಕೆ ಮಾಡಿಕೊಂಡು ಕೃಷಿ ಕಾರ್ಯ ಮಾಡಬೇಕು.

ಕನ್ನಡಪ್ರಭ ವಾರ್ತೆ ಕುಷ್ಟಗಿ

ತಾಲೂಕಿನ ರೈತರು ಕೇವಲ ಡಿಎಪಿ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಅದರ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳನ್ನು ಬಳಕೆ ಮಾಡಿಕೊಂಡು ಕೃಷಿ ಕಾರ್ಯ ಮಾಡಬೇಕು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಅಜಮೀರ ಅಲಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಸಕ್ತ ವರ್ಷ ಮುಂಗಾರು ಮಳೆಯು ಉತ್ತಮವಾಗಿ ಆಗುತ್ತಿರುವುದರಿಂದ ತಾಲೂಕಿನಲ್ಲಿ ಒಟ್ಟು 1.24 ಲಕ್ಷ ಹೆಕ್ಟೇರ್ ಕೃಷಿ ಭೂಮಿ ಇದ್ದು, ಸದ್ಯ ಮುಂಗಾರು ಹಂಗಾಮಿಗೆ 79 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡುವ ಸಾಧ್ಯತೆ. ಕಾರಣ ಡಿಎಪಿ ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಇದಕ್ಕೆ ಪರ್ಯಾಯವಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ದರ್ಜೆಯ ರಸಗೊಬ್ಬರಗಳನ್ನು ಸಂಯೋಜಿಸಿ ಬಳಕೆ ಮಾಡಬಹುದಾಗಿದೆ.

ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯುರಿಯಾ ಹಾಗೂ ಡಿಎಪಿಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಸ್ ಲಭ್ಯವಿರುವುದಿಲ್ಲ ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ಯುಕ್ತ ಬಹಳಷ್ಟು ರಸಗೊಬ್ಬರ ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.

ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ, ರಂಜಕ, ಪೋಟಾಷ್ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕು. ಆದರೆ ಇತ್ತೀಚಿನ ವರ್ಷಗಳಲ್ಲಿ ರೈತರು ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು ರಾಜ್ಯದಲ್ಲಿ 5:3:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಲು ಪೊಟ್ಯಾಷ್ಯುಕ್ತ ಸಂಯುಕ್ತ ರಸಗೊಬ್ಬರಗಳ ಬಳಕೆಯನ್ನು ಪ್ರೇರೇಪಿಸುವುದು ಮುಖ್ಯವಾಗಿದೆ.

ಅಲ್ಲದೆ ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೊಟ್ಯಾಷ್ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 17:17:17, 14:28:14, 19:19:19, 20:10:10 ಇತ್ಯಾದಿಗಳನ್ನು ಸಹ ಬಳಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.